ADVERTISEMENT

ಕೋವಿಡ್‌–19: ರಾಜ್ಯದ 5 ಕಡೆ ರೋಗ ಪರೀಕ್ಷಾ ಕೇಂದ್ರ

ವಿಧಾನಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್‌

​ಪ್ರಜಾವಾಣಿ ವಾರ್ತೆ
Published 9 ಮಾರ್ಚ್ 2020, 12:25 IST
Last Updated 9 ಮಾರ್ಚ್ 2020, 12:25 IST
ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್
ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್   

ಬೆಂಗಳೂರು: ಕೋವಿಡ್‌–19 ಸೋಂಕಿನ ಬಗ್ಗೆ ಆತಂಕ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಐದು ಕಡೆಗಳಲ್ಲಿ 15 ದಿನಗಳಲ್ಲಿ ರೋಗ ಪರೀಕ್ಷಾ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು.

ವಿಧಾನಸಭೆಯಲ್ಲಿ ಸೋಮವಾರ ಶೂನ್ಯ ವೇಳೆಯಲ್ಲಿ ಮಾತನಾಡಿದ ಅವರು, ‘ಬೆಂಗಳೂರಿನ ವಿಕ್ಟೋರಿಯಾ, ರಾಜೀವ್‌ ಗಾಂಧಿ ಎದೆರೋಗಗಳ ಆಸ್ಪತ್ರೆ ಹಾಗೂ ನಿಮ್ಹಾನ್ಸ್‌ನಲ್ಲಿ ರೋಗ ಪರೀಕ್ಷೆ ನಡೆಸಲಾಗುತ್ತಿದೆ. ಹಾಸನ, ಮೈಸೂರು, ಶಿವಮೊಗ್ಗ, ಬೆಳಗಾವಿ, ಬಳ್ಳಾರಿಯಲ್ಲಿ ಕೇಂದ್ರಗಳನ್ನು ಆರಂಭಿಸುತ್ತೇವೆ’ ಎಂದರು.

‘ಎಲ್ಲರೂ ಮಾಸ್ಕ್‌ ಧರಿಸುವ ಅಗತ್ಯ ಇಲ್ಲ. ರೋಗ ಲಕ್ಷಣ ಇರುವವರು ಮಾತ್ರ ಮಾಸ್ಕ್‌ ಧರಿಸಿದರೆ ಸಾಕು’ ಎಂದು ಅವರು ಹೇಳಿದರು. ರಾಜ್ಯದ 50 ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳನ್ನು ಗುರುತಿಸಿ ಚಿಕಿತ್ಸೆ ನೀಡಲು 3 ಸಾವಿರ ಹಾಸಿಗೆಗಳನ್ನು ಕಾಯ್ದಿರಿಸಲಾಗಿದೆ ಎಂದರು.

ADVERTISEMENT

‘ರಾಜ್ಯದಲ್ಲಿ ಯಾವುದೇ ಸೋಂಕಿನ ಪ್ರಕರಣಗಳು ಕಂಡುಬಂದಿಲ್ಲ. ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಬಂದರಿನ ಮೂಲಕ ಹೊರದೇಶಗಳಿಂದ ಬಂದಿರುವ 73,811 ಪ್ರಯಾಣಿಕರನ್ನು ತಪಾಸಣೆ ನಡೆಸಲಾಗಿದೆ. ಅದರಲ್ಲಿ ಬಾಧಿತ 11 ದೇಶಗಳಿಂದ ಬಂದಿರುವ 568 ಪ್ರಯಾಣಿಕರನ್ನು ಗುರುತಿಸಿ, ತಪಾಸಣೆ ನಡೆಸಿ ಮನೆಗಳಲ್ಲಿ ಪ್ರತ್ಯೇಕವಾಗಿರಲು ಸೂಚಿಸಲಾಗಿದೆ’ ಎಂದರು.

ಕಾಂಗ್ರೆಸ್‌ನ ಯತೀಂದ್ರ ಸಿದ್ದರಾಮಯ್ಯ, ‘ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾತ್ರ ಶಂಕಿತರ ತಪಾಸಣೆ ನಡೆಸಲಾಗುತ್ತಿದೆ. ಉಳಿದ ವಿಮಾನ ನಿಲ್ದಾಣಗಳಲ್ಲೂ ತಪಾಸಣೆ ನಡೆಸಬೇಕು’ ಎಂದು ಮನವಿ ಮಾಡಿದರು.

ಕೋವಿಡ್‌–19ರ ಬಗ್ಗೆ ಜನರಿಗೆ ಸರಿಯಾದ ಮಾಹಿತಿ ಇಲ್ಲ ಎಂದು ಬಿಜೆಪಿಯ ಡಾ.ವೈ.ಭರತ್‌ ಶೆಟ್ಟಿ ಹೇಳಿದರು. ಕಾಂಗ್ರೆಸ್‌ನ ಎಚ್‌.ಕೆ.‍ಪಾಟೀಲ, ‘ವಿಮಾನ ನಿಲ್ದಾಣಗಳಲ್ಲಿ ಸರಿಯಾಗಿ ತಪಾಸಣೆ ನಡೆಸುತ್ತಿಲ್ಲ’ ಎಂದರು. ಜೆಡಿಎಸ್‌ನ ನಿಸರ್ಗ ನಾರಾಯಣಸ್ವಾಮಿ, ‘ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ತಪಾಸಣೆಯನ್ನಷ್ಟೇ ನಡೆಸಲಾಗುತ್ತಿದೆ. ಆದರೆ, ಅಲ್ಲಿನ ಕಾರ್ಮಿಕರ ಬಗ್ಗೆ ಕಾಳಜಿ ವಹಿಸುತ್ತಿಲ್ಲ’ ಎಂದು ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.