ADVERTISEMENT

ವ್ಯವಸ್ಥಾ‍ಪಕ ಅನುಮಾನಾಸ್ಪದ ಸಾವು

ಹಹ ಬ34

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2021, 15:38 IST
Last Updated 7 ಮಾರ್ಚ್ 2021, 15:38 IST
ಪ್ರಭು
ಪ್ರಭು   

ಬೆಂಗಳೂರು: ಬಿಬಿಎಂಪಿ ಮಾಜಿ ಸದಸ್ಯ ಧನರಾಜ್‌ ಅವರ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯವಸ್ಥಾ‍ಪಕ ಪ್ರಭು (30) ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದು, ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಭಾನುವಾರ ಪತ್ತೆಯಾಗಿದೆ.

‘ತಮಿಳುನಾಡಿನ‌ ಪ್ರಭು, ಕೆಲ ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದರು. ಧರ್ಮರಾಯ ಸ್ವಾಮಿ ದೇವಸ್ಥಾನ ವಾರ್ಡ್‌ನ ಮಾಜಿ ಸದಸ್ಯ ಧನರಾಜ್ ಕಚೇರಿಯಲ್ಲಿ ನಾಲ್ಕು ವರ್ಷಗಳಿಂದ ಪ್ರಭು ಕೆಲಸ ಮಾಡುತ್ತಿದ್ದರು. ಅವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ’ ಎಂದು ಕಲಾಸಿಪಾಳ್ಯ ಪೊಲೀಸ್ ಮೂಲಗಳು ತಿಳಿಸಿವೆ.

‘ಕಚೇರಿ ಚಾವಣಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಭಾನುವಾರ ಬೆಳಿಗ್ಗೆ ಮೃತದೇಹ ಪತ್ತೆಯಾಗಿದೆ. ಅದನ್ನು ನೋಡಿದ್ದ ಸ್ಥಳೀಯರು ಠಾಣೆಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಹೋಗಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ’ ಎಂದೂ ಹೇಳಿವೆ.

ADVERTISEMENT

ಪತ್ನಿಯಿಂದ ದೂರು: ‘ಶನಿವಾರ ಎಂದಿನಂತೆ ಕೆಲಸಕ್ಕೆ ಹೋಗಿದ್ದ ಪ್ರಭು, ರಾತ್ರಿಯಾದರೂ ಮನೆಗೆ ವಾಪಸು ಬಂದಿರಲಿಲ್ಲ. ಬೆಳಿಗ್ಗೆ ಬರಬಹುದೆಂದು ಮನೆಯವರು ಸುಮ್ಮನಾಗಿದ್ದರು. ಆದರೆ, ಬೆಳಿಗ್ಗೆಯೇ ಮೃತದೇಹ ಸಿಕ್ಕಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಸಾವಿನ ಬಗ್ಗೆ ಪತ್ನಿ ದೂರು ನೀಡಿದ್ದಾರೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

‘ಪ್ರಕರಣವೊಂದರ ಜಾಮೀನಿಗಾಗಿ ಪ್ರಭು ಸಹಿ ಮಾಡಿದ್ದರು. ಅದೇ ವಿಚಾರಕ್ಕಾಗಿ ಇತ್ತೀಚೆಗೆ ಪೊಲೀಸ್ ಠಾಣೆಯೊಂದಕ್ಕೆ ಹೋಗಿ ಬಂದಿದ್ದರು ಎಂಬ ಮಾಹಿತಿ ಸಿಕ್ಕಿದೆ. ಪತಿಯ ಸಾವಿನ ಬಗ್ಗೆ ತನಿಖೆ ನಡೆಸುವಂತೆ ಪತ್ನಿ ದೂರಿನಲ್ಲಿ ಕೋರಿದ್ದಾರೆ. ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದು ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ತಿಳಿಯಬೇಕಿದೆ’ ಎಂದೂ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.