ADVERTISEMENT

ಖಾಸಗಿ ಜಮೀನು ಸ್ವಾಧೀನಕ್ಕೆ ಕೋರ್ಟ್ ಆದೇಶಿಸಲಾಗದು: ಹೈಕೋರ್ಟ್‌

​ಪ್ರಜಾವಾಣಿ ವಾರ್ತೆ
Published 18 ಮೇ 2023, 1:21 IST
Last Updated 18 ಮೇ 2023, 1:21 IST
ಕರ್ನಾಟಕ ಹೈಕೋರ್ಟ್‌
ಕರ್ನಾಟಕ ಹೈಕೋರ್ಟ್‌   

ಬೆಂಗಳೂರು: ‘ಖಾಸಗಿಯವರ ಜಮೀನನ್ನು ಸ್ವಾಧೀನಪಡಿಸಿಕೊಳ್ಳುವಂತೆ ಕೋರ್ಟ್ ಭೂಸ್ವಾಧೀನ ಪ್ರಾಧಿಕಾರಕ್ಕೆ ನಿರ್ದೇಶನ ನೀಡಲು ಆಗದು’ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ಬೆಳಗಾವಿ ಜಿಲ್ಲೆ ಹುಕ್ಕೇರಿಯ ಐವರು ಕೃಷಿಕರು ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಆರ್. ದೇವದಾಸ್ ಮತ್ತು ಕೆ.ರಾಜೇಶ್ ರೈ ಅವರಿದ್ದ ವಿಭಾಗೀಯ ನ್ಯಾಯಪೀಠವು ಈ ಕುರಿತಂತೆ ಸ್ಪಷ್ಟಪಡಿಸಿದೆ.

ಹಿಡಕಲ್ ಜಲಾಶಯದ ಹಿನ್ನೀರಿನಲ್ಲಿ ಮುಳುಗಡೆಯಾಗುತ್ತಿರುವ ತಮ್ಮ ಜಮೀನು ಸ್ವಾಧೀನಪಡಿಸಿಕೊಂಡು ಪರಿಹಾರ ನೀಡಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ರೈತರು ಈ ಹಿಂದೆ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಏಕಸದಸ್ಯ ನ್ಯಾಯಪೀಠ, ರೈತರ ಮನವಿಗೆ ಸಂಬಂಧಿಸಿದಂತೆ ಸೂಕ್ತಕ್ರಮ ಜರುಗಿಸಬೇಕು. ಈ ಕುರಿತು ನಾಲ್ಕು ವಾರಗಳಲ್ಲಿ ಸೂಕ್ತ ಆದೇಶ ಹೊರಡಿಸಬೇಕು ಎಂದು ಕಾವೇರಿ ನೀರಾವರಿ ನಿಗಮದ ಮುಖ್ಯ ಎಂಜಿನಿಯರ್ ಮತ್ತು ಕಾರ್ಯಕಾರಿ ಎಂಜಿನಿಯರ್‌ಗೆ ನಿರ್ದೇಶಿಸಿತ್ತು.

ADVERTISEMENT

ಸರ್ಕಾರಿ ಪ್ರಾಧಿಕಾರಗಳು ಹೈಕೋರ್ಟ್‌ನ ಆದೇಶ ಪಾಲಿಸಿಲ್ಲ ಎಂದು ಆಕ್ಷೇಪಿಸಿದ್ದ ಅರ್ಜಿದಾರ ರೈತರು ಹೈಕೋರ್ಟ್‌ಗೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ವಿಭಾಗೀಯ ನ್ಯಾಯಪೀಠ, ‘ಜಮೀನು ಸ್ವಾಧೀನ ಪಡಿಸಿಕೊಳ್ಳುವಂತೆ ನ್ಯಾಯಾಲಯಗಳು ನಿರ್ದೇಶನ ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್‌ನ ಸ್ಪಷ್ಟ ತೀರ್ಪುಗಳಿವೆ’ ಎಂದು ಅರ್ಜಿ ವಿಲೇವಾರಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.