ಬೆಂಗಳೂರು: ಕೋವಿಡ್ ಕಾಯಿಲೆ ಹೊಂದಿರುವ ಕೆಲವರಿಗೆ ಆರ್‌ಟಿ–ಪಿಸಿಆರ್ ಹಾಗೂ ರ್‍ಯಾಟ್ ಮಾದರಿ ಪರೀಕ್ಷೆಯಲ್ಲಿ ನೆಗೆಟಿವ್ ಫಲಿತಾಂಶ ಬರುತ್ತಿರುವ ಕಾರಣ ರೋಗ ಲಕ್ಷಣಗಳ ಆಧಾರದ ಮೇಲೆ ವ್ಯಕ್ತಿಯನ್ನು ಆಸ್ಪತ್ರೆಯಲ್ಲಿ ದಾಖಲಿಸಿಕೊಂಡು, ಚಿಕಿತ್ಸೆ ಒದಗಿಸಬೇಕು ಎಂದು ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.
‘ಹಲವು ಪ್ರಕರಣಗಳಲ್ಲಿ ಆರ್‌ಟಿ–ಪಿಸಿಆರ್ ಹಾಗೂ ವಿವಿವಿಧ ವಿಧಾನಗಳಲ್ಲಿ ಪರೀಕ್ಷೆ ಮಾಡಿಸಿದರೂ ನೆಗೆಟಿವ್ ವರದಿ ಬರುತ್ತಿದೆ. ವ್ಯಕ್ತಿಗೆ ಕೋವಿಡ್ ರೋಗ ಲಕ್ಷಣವಿದ್ದರೂ ವರದಿಯಲ್ಲಿ ನೆಗೆಟಿವ್ ಬಂದಲ್ಲಿ ಸಮಸ್ಯೆ ಸಂಕೀರ್ಣ ಸ್ವರೂಪ ಪಡೆದುಕೊಳ್ಳಲಿದೆ. ರೋಗದ ತೀವ್ರತೆ ಹೆಚ್ಚಾದ ಸಮಯದಲ್ಲಿ ಆಸ್ಪತ್ರೆಗೆ ದಾಖಲಿಸಲು ಸಮಸ್ಯೆಯಾಗುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು ಹಾಗೂ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡುವ ಉದ್ದೇಶದಿಂದ ರೋಗ ಲಕ್ಷಣಗಳನ್ನು ಆಧರಿಸಿ ಚಿಕಿತ್ಸೆ ನೀಡುವ (ಸಿಂಡ್ರೋಮಿಕ್) ವಿಧಾನವನ್ನು ಅನುಸರಿಸಲು ತೀರ್ಮಾನಿಸಲಾಗಿದೆ’ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.
‘ಈ ವಿಧಾನದಲ್ಲಿ ಸಂಬಂಧಪಟ್ಟ ವೈದ್ಯರು ಅಥವಾ ವೈದ್ಯಾಧಿಕಾರಿಗಳೇ ರೋಗಿಗಳ ಸ್ಥಿತಿಯನ್ನು ಪ್ರಮಾಣೀಕರಿಸುತ್ತಾರೆ. ನಂತರ ರೋಗಿಗೆ ಪ್ರತ್ಯೇಕ ಸಂಖ್ಯೆಯನ್ನು ನೀಡಿ, ನಿರ್ದಿಷ್ಟ ಆಸ್ಪತ್ರೆಯಲ್ಲಿ ಹಾಸಿಗೆ ಹಂಚಿಕೆ ಮಾಡಲಾಗುತ್ತದೆ. ಇವರನ್ನು ಕೋವಿಡ್ ರೋಗಿ ಎಂದೇ ಪರಿಗಣಿಸಲಾಗುತ್ತದೆ. ರೋಗಿಗೆ ಸೂಕ್ತ ಸಮಯದಲ್ಲಿ ಅಗತ್ಯ ಚಿಕಿತ್ಸೆ ನೀಡಬೇಕಿರುವುದರಿಂದ ಈ ವಿಧಾನವನ್ನು ಅನುರಿಸಲು ನಿರ್ಧರಿಸಲಾಗಿದೆ’ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.