ADVERTISEMENT

ಕೋವಿಡ್: ಐಸಿಯುಗೆ ದಾಖಲಾಗುವವರ ಸಂಖ್ಯೆ ಇಳಿಕೆ

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2020, 20:51 IST
Last Updated 19 ನವೆಂಬರ್ 2020, 20:51 IST

ಬೆಂಗಳೂರು: ಕೋವಿಡ್ ಪೀಡಿತರಲ್ಲಿ ತೀವ್ರ ನಿಗಾ ಘಟಕಕ್ಕೆ (ಐಸಿಯು) ದಾಖಲಾಗುವವರ ಸಂಖ್ಯೆ ಎರಡು ವಾರಗಳಿಂದ ಇಳಿಮುಖವಾಗಿದ್ದು, ಸದ್ಯ 598 ಮಂದಿ ಐಸಿಯುನಲ್ಲಿ ಇದ್ದಾರೆ.

ರಾಜ್ಯದಲ್ಲಿ ಗುರುವಾರ 1,849 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಸೋಂಕಿಗೀಡಾದವರ ಒಟ್ಟು ಸಂಖ್ಯೆ 8.67 ಲಕ್ಷಕ್ಕೆ ಏರಿಕೆಯಾಗಿದೆ. ಈ ತಿಂಗಳ 19 ದಿನಗಳ ಅವಧಿಯಲ್ಲಿ 44,368 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ಈ ಅವಧಿಯಲ್ಲಿ ಪ್ರತಿನಿತ್ಯ ಸರಾಸರಿ 2,335 ಮಂದಿ ಸೋಂಕಿತರಾಗಿದ್ದಾರೆ. ಕೋವಿಡ್ ಪೀಡಿತರಲ್ಲಿ 26 ಮಂದಿ ಮೃತಪಟ್ಟಿದ್ದು, ಕೋವಿಡ್‌ಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 11,604ಕ್ಕೆ ತಲುಪಿದೆ.

ಬೆಂಗಳೂರಿನಲ್ಲಿ 881 ಮಂದಿ ಸೇರಿದಂತೆ ರಾಜ್ಯದಲ್ಲಿ 1,800 ಮಂದಿಗೆ ಕಾಯಿಲೆ ವಾಸಿಯಾಗಿದೆ. ಇದರಿಂದಾಗಿ ಗುಣಮುಖರ ಸಂಖ್ಯೆ 8.30 ಲಕ್ಷಕ್ಕೆ ತಲುಪಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 25,169ಕ್ಕೆ ಇಳಿಕೆಯಾಗಿದೆ. ಒಂದೇ ದಿನ 1.18 ಲಕ್ಷ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ. ಈವರೆಗೆ 98.59 ಲಕ್ಷ ಮಂದಿ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದಾರೆ.

ADVERTISEMENT

ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ ಕಳೆದ 14 ದಿನಗಳಲ್ಲಿ 1.58 ಲಕ್ಷ ನೇರ ಸಂಪರ್ಕಿತರು ಹಾಗೂ 1.73 ಲಕ್ಷ ಪರೋಕ್ಷ ಸಂಪರ್ಕಿತರನ್ನು ಪತ್ತೆ ಮಾಡಲಾಗಿದೆ. 7 ದಿನಗಳ ಅವಧಿಯಲ್ಲಿ 32,921 ಮಂದಿಯನ್ನು ಮನೆ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ.

ಬೆಂಗಳೂರಿನಲ್ಲಿ 1,048 ಮಂದಿ ಕೋವಿಡ್ ಪೀಡಿತರಾಗಿದ್ದು, ಸೋಂಕಿತರ ಸಂಖ್ಯೆ 3.60 ಲಕ್ಷ ದಾಟಿದೆ. ತುಮಕೂರಿನಲ್ಲಿ ಹೊಸದಾಗಿ 103 ಪ್ರಕರಣಗಳು ಪತ್ತೆಯಾಗಿವೆ. ವಿಜಯಪುರ (78), ಮೈಸೂರು (54), ದಕ್ಷಿಣ ಕನ್ನಡ (54), ಹಾಸನ (54) ಜಿಲ್ಲೆಯಲ್ಲಿ ಅಧಿಕ ಪ್ರಕರಣಗಳು ವರದಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.