ಪ್ರಾತಿನಿಧಿಕ ಚಿತ್ರ
– ಪ್ರಜಾವಾಣಿ ಚಿತ್ರ
ಬೆಂಗಳೂರು: ಕನಿಷ್ಠ ಬೆಂಬಲ ಬೆಲೆ ನಿಗದಿಗೆ ಕಾಯ್ದೆ ಜಾರಿ, ಕಾರ್ಮಿಕರಿಗೆ ತಿಂಗಳಿಗೆ ₹36 ಸಾವಿರ ಕನಿಷ್ಠ ವೇತನ ನಿಗದಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿ.21ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಬಹಿರಂಗ ಪ್ರತಿಭಟನಾ ಸಭೆ ಆಯೋಜಿಸಲಾಗುವುದು ಎಂದು ಸಿಪಿಎಂ ತಿಳಿಸಿದೆ.
ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಪಿಎಂ ಕಾರ್ಯದರ್ಶಿ ಪ್ರಕಾಶ ಕೆ., ಕಾರ್ಯದರ್ಶಿ ಮಂಡಳಿ ಸದಸ್ಯರಾದ ಚಂದ್ರಪ್ಪ ಹೊಸ್ಕೇರಾ, ಗೋಪಾಲಕೃಷ್ಣ ಅರಳಹಳ್ಳಿ, ‘ನವೆಂಬರ್ 1ರಿಂದ ಡಿಸೆಂಬರ್ 15ರವರೆಗೆ ಆಯೋಜಿಸಿರುವ ಪರ್ಯಾಯ ರಾಜಕಾರಣಕ್ಕಾಗಿ ಸಿಪಿಎಂ ಜನದನಿ ರ್‍ಯಾಲಿ ವೇಳೆ ರಾಜ್ಯದ ಮನೆ–ಮನೆಗೆ ಭೇಟಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನ ವಿರೋಧಿ ನೀತಿಗಳ ವಿರುದ್ಧ ಜಾಗೃತಿ ಮೂಡಿಸಲಾಗುತ್ತಿದೆ. 21ರಂದು ನಡೆಯುವ ಪ್ರತಿಭಟನಾ ಸಭೆಯಲ್ಲಿ ಸಿಪಿಎಂನ ಪಾಲಿಟ್ ಬ್ಯೂರೊ ಸದಸ್ಯರಾದ ಯು.ವಾಸುಕಿ ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು.
‘ಬಲವಂತದ ಭೂಸ್ವಾಧೀನ ಕೈಬಿಡಬೇಕು. ಹಿಂದಿನ ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ಭೂ ಸುಧಾರಣಾ ಕಾಯ್ದೆ, ಎಂಪಿಎಂಸಿ ತಿದ್ದುಪಡಿ ಕಾಯ್ದೆ, ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆ ಹಿಂಪಡೆಯಬೇಕು. ಬಗರ್ ಹುಕುಂ ಹಾಗೂ ಅರಣ್ಯ ಸಾಗುವಳಿ ಮಾಡುವವರಿಗೆ ಹಕ್ಕು ಪತ್ರಗಳನ್ನು ನೀಡಬೇಕು. ಶಿಕ್ಷಣದ ಖಾಸಗೀಕರಣ ಹಾಗೂ ವ್ಯಾಪಾರೀಕರಣಕ್ಕೆ ಕಡಿವಾಣ ಹಾಕಿ, ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು ಕೇರಳ ಮಾದರಿ ಅನುಸರಿಸಬೇಕು’ ಎಂದು ಆಗ್ರಹಿಸಿದರು.
‘ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ನಿಯಂತ್ರಿಸಬೇಕು. ಮೈಕ್ರೋ ಫೈನಾನ್ಸ್ ಕಿರುಕುಳದ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ದಲಿತರ ಮೇಲಿನ ದೌರ್ಜನ್ಯಗಳು ಹೆಚ್ಚುತ್ತಿದ್ದು, ಅದಕ್ಕೆ ಕಡಿವಾಣ ಹಾಕಬೇಕು. ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸಬೇಕು. ಸಮಾಜದಲ್ಲಿ ಹೆಚ್ಚುತ್ತಿರುವ ಕೋಮುವಾದ, ಜಾತಿವಾದವನ್ನು ನಿಯಂತ್ರಿಸಬೇಕು. ವಿದ್ಯುತ್, ಸಾರಿಗೆ, ರಸ್ತೆ ಮುಂತಾದ ಸಾರ್ವಜನಿಕ ಸೇವೆಗಳನ್ನು ಖಾಸಗೀಕರಣ ಮಾಡಬಾರದು’ ಎಂದು ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.