ADVERTISEMENT

ಹಗಲು ಹಣ್ಣಿನ ವ್ಯಾಪಾರ, ರಾತ್ರಿ ಕಳ್ಳತನ: ಪೊಲೀಸರಿಗೆ ಸಿಕ್ಕಿಬಿದ್ದ ಭೂ‍ಪ!

ಮಹದೇವಪುರ ಠಾಣೆಯ ಪೊಲೀಸರ ಕಾರ್ಯಾಚರಣೆ

​ಪ್ರಜಾವಾಣಿ ವಾರ್ತೆ
Published 9 ಡಿಸೆಂಬರ್ 2025, 14:49 IST
Last Updated 9 ಡಿಸೆಂಬರ್ 2025, 14:49 IST
<div class="paragraphs"><p>ಬಂಧನ  </p></div>

ಬಂಧನ

   

(ಪ್ರಾತಿನಿಧಿಕ ಚಿತ್ರ)

ಬೆಂಗಳೂರು: ಹಗಲು ವೇಳೆ ಹಣ್ಣಿನ ವ್ಯಾಪಾರ ಮಾಡಿಕೊಂಡು, ರಾತ್ರಿ ವೇಳೆ ಮನೆಗೆ ನುಗ್ಗಿ ಚಿನ್ನದ ಆಭರಣ, ನಗದು ದೋಚಿ ಪರಾರಿ ಆಗುತ್ತಿದ್ದ ಆರೋಪಿಯನ್ನು ಮಹದೇವಪುರ ಠಾಣೆಯ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ADVERTISEMENT

ಮೊಹಮ್ಮದ್‌ ತಂಜೀಮ್ (33) ಬಂಧಿತ ಆರೋಪಿ.

ಬಂಧಿತ ಆರೋಪಿಯಿಂದ ₹29.40 ಲಕ್ಷ ಮೌಲ್ಯದ 245 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.

ಠಾಣಾ ವ್ಯಾಪ್ತಿಯ ಬಡಾವಣೆಯೊಂದರಲ್ಲಿ ಆರೋಪಿ ನೆಲಸಿದ್ದ ಎಂದು ಮೂಲಗಳು ಹೇಳಿವೆ.

ಡಿಆರ್‌ಡಿಒ ಟೌನ್‌ಶಿಪ್‌ನ ನಿವಾಸಿ ಮ್ಯಾಥ್ಯು ಅವರ ಮನೆಗೆ ಆರೋಪಿ ನುಗ್ಗಿ ಕಳ್ಳತನ ಮಾಡಿದ್ದ. ಮ್ಯಾಥ್ಯು ಅವರು ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಖಚಿತ ಮಾಹಿತಿ ಮೇರೆಗೆ ಆರೋಪಿಯನ್ನು ಸಿ.ವಿ ರಾಮನ್‌ ನಗರದಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸಲಾಯಿತು. ವಿಚಾರಣೆ ವೇಳೆ ಕಳ್ಳತನ ಮಾಡಿರುವುದಾಗಿ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದರು.

‘ಕಳವು ಮಾಡಿದ್ದ ಚಿನ್ನಾಭರಣಗಳ ಪೈಕಿ ಕೆಲವು ಆಭರಣಗಳನ್ನು ಮನೆಯಲ್ಲಿಟ್ಟಿದ್ದ. ಉಳಿದವನ್ನು ಪುಲಕೇಶಿನಗರದ ಜ್ಯೂವೆಲರಿ ಅಂಗಡಿಯೊಂದಕ್ಕೆ ಮಾರಾಟ ಮಾಡಿದ್ದ. ಅಲ್ಲಿಂದ ಆಭರಣ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

ಆರೋಪಿ ಮನೆಯಿಂದ 169 ಗ್ರಾಂ ಚಿನ್ನಾಭರಣ, ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನ ಹಾಗೂ ಜ್ಯೂವೆಲರಿ ಅಂಗಡಿಯಿಂದ 75 ಗ್ರಾಂ ಆಭರಣ ಸೇರಿದಂತೆ ಒಟ್ಟು 245 ಗ್ರಾಂ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ ಎಂದು ಮಹದೇವಪುರ ಠಾಣೆಯ ಪೊಲೀಸರು ತಿಳಿಸಿದ್ದಾರೆ.

ಆರೋಪಿ ವಿರುದ್ಧ ಈ ಹಿಂದೆ ಮೈಸೂರಿನ ನರಸಿಂಹರಾಜಪುರ ಪೊಲೀಸ್ ಠಾಣೆ ಹಾಗೂ ಕೇರಳದ ಎರಡು ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ಗೊತ್ತಾಗಿದೆ.

ಹಗಲು ವೇಳೆ ತಳ್ಳು ಗಾಡಿಯಲ್ಲಿ ಹಣ್ಣಿನ ವ್ಯಾಪಾರ ಮಾಡುತ್ತಿದ್ದ ಆರೋಪಿ ಬೀಗ ಹಾಕಿದ ಮನೆಗಳನ್ನು ಗುರುತಿಸುತ್ತಿದ್ದ. ರಾತ್ರಿ ವೇಳೆ ಆ ಮನೆಗೆ ಬಂದು ಕನ್ನ ಹಾಕುತ್ತಿದ್ದ ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.