ADVERTISEMENT

ನಿವೃತ್ತ ಅಧಿಕಾರಿಗಳ ಬಿಡುಗಡೆಗೆ ಸಿಎಸ್‌ ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 23 ಜನವರಿ 2024, 15:46 IST
Last Updated 23 ಜನವರಿ 2024, 15:46 IST
ರಜನೀಶ್ ಗೋಯಲ್
ರಜನೀಶ್ ಗೋಯಲ್   

ಬೆಂಗಳೂರು: ಗುತ್ತಿಗೆ ಅಥವಾ ಹೊರ ಗುತ್ತಿಗೆ ಆಧಾರದಲ್ಲಿ ನೇಮಿಸಿಕೊಂಡಿರುವ ಸರ್ಕಾರದ ನಿವೃತ್ತ ಅಧಿಕಾರಿಗಳು ಹಾಗೂ ನೌಕರರನ್ನು ಕೂಡಲೇ ಕರ್ತವ್ಯದಿಂದ ಬಿಡುಗಡೆಗೊಳಿಸುವಂತೆ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್‌ ಅವರು ಎಲ್ಲ ಇಲಾಖೆಗಳ ಮುಖ್ಯಸ್ಥರಿಗೆ ಮಂಗಳವಾರ ನಿರ್ದೇಶನ ನೀಡಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯಲ್ಲಿ ದೊಡ್ಡ ಸಂಖ್ಯೆಯಲ್ಲಿ ನಿವೃತ್ತ ಅಧಿಕಾರಿಗಳು, ನೌಕರರು ಗುತ್ತಿಗೆ ಅಥವಾ ಹೊರ ಗುತ್ತಿಗೆ ಆಧಾರದಲ್ಲಿ ಮುಂದುವರಿದಿರುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ಬಂದಿತ್ತು. ಈ ಕುರಿತು ಜನವರಿ 9ರಂದು ಮುಖ್ಯ ಕಾರ್ಯದರ್ಶಿಯವರಿಗೆ ಟಿಪ್ಪಣಿ ಹೊರಡಿಸಿದ್ದ ಮುಖ್ಯಮಂತ್ರಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯೂ ಸೇರಿದಂತೆ ಎಲ್ಲ ಇಲಾಖೆಗಳು ಹಾಗೂ ಸಚಿವಾಲಯದಲ್ಲಿ ಕೆಲಸ ಮಾಡುತ್ತಿರುವ ನಿವೃತ್ತ ಅಧಿಕಾರಿಗಳು, ನೌಕರರನ್ನು ಬಿಡುಗಡೆ ಮಾಡುವಂತೆ ಸೂಚಿಸಿದ್ದರು.

‘ಸರ್ಕಾರದ ವಿವಿಧ ಇಲಾಖೆಗಳು ಹಾಗೂ ಸಚಿವಾಲಯದಲ್ಲಿ ಗುತ್ತಿಗೆ ಮತ್ತು ಹೊರ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ನಿವೃತ್ತ ಅಧಿಕಾರಿಗಳು, ನೌಕರರನ್ನು ಕೂಡಲೇ ಬಿಡುಗಡೆಗೊಳಿಸಬೇಕು. ಆ ಹುದ್ದೆಗಳಿಗೆ ಸೇವೆಯಲ್ಲಿರುವ ಅಧಿಕಾರಿಗಳು ನೌಕರರನ್ನು ನಿಯೋಜನೆ ಮಾಡಬೇಕು. ಈ ಕುರಿತು ವರದಿ ಸಲ್ಲಿಸಬೇಕು’ ಎಂದು ವಿವಿಧ ಇಲಾಖೆಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಕಾರ್ಯದರ್ಶಿಗಳಿಗೆ ಗೋಯಲ್‌ ನಿರ್ದೇಶನ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.