ಬೆಂಗಳೂರು: ರಾಜ್ಯದ ಸರ್ಕಾರಿ ಜಿಲ್ಲಾ ಆಸ್ಪತ್ರೆಗಳಲ್ಲಿ ಸಿಟಿ ಮತ್ತು ಎಂಆರ್‌ಐ ಸ್ಕ್ಯಾನ್‌ಗೆ ಸಂಬಂಧಿಸಿದಂತೆ ಎಪಿಎಲ್ ಕುಟುಂಬದ ಸದಸ್ಯರಿಗೆ ಶೇ 70 ರಷ್ಟು ಶುಲ್ಕ ಪಾವತಿ ಪ್ರಕ್ರಿಯೆ ಪ್ರಾರಂಭಿಸಲಾಗಿದೆ.
ಈ ಬಗ್ಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರು ಆದೇಶ ಹೊರಡಿಸಿದ್ದು, ಮಂಗಳವಾರದಿಂದಲೇ ಈ ಆದೇಶ ಜಾರಿಗೆ ಬಂದಿದೆ. ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿ ಈವರೆಗೆ ರಾಜ್ಯದ 16 ಜಿಲ್ಲಾ ಆಸ್ಪತ್ರೆಗಳಲ್ಲಿ ಉಚಿತವಾಗಿ ಸಿಟಿ ಮತ್ತು ಎಂಆರ್‌ಐ ಸ್ಕ್ಯಾನ್ ನಡೆಸಲಾಗುತ್ತಿತ್ತು. ಒಟ್ಟು ಶುಲ್ಕದಲ್ಲಿ ಎಪಿಎಲ್ ಕುಟುಂಬದ ಸದಸ್ಯ ಶೇ 70ರಷ್ಟು ದರ ಪಾವತಿಸಿದರೆ, ಉಳಿದ ಶೇ 30ರಷ್ಟು ಶುಲ್ಕವನ್ನು ಯೋಜನೆಯಡಿ ಭರಿಸಲಾಗುತ್ತದೆ.
ಚಿಕ್ಕಮಗಳೂರು, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ, ವಿಜಯಪುರ, ಗದಗ, ಹಾವೇರಿ, ಬಾಗಲಕೋಟೆ, ಉಡುಪಿ, ಕಾರವಾರ (ಉತ್ತರ ಕನ್ನಡ), ಕೋಲಾರ, ತುಮಕೂರು, ಕೊಡಗು, ಯಾದಗಿರಿ, ಧಾರವಾಡ ಜಿಲ್ಲಾ ಆಸ್ಪತ್ರೆ ಹಾಗೂ ಬೆಂಗಳೂರಿನ ಜಯನಗರ ಸಾರ್ವಜನಿಕ ಆಸ್ಪತ್ರೆಗೆ ಈ ಆದೇಶ ಅನ್ವಯವಾಗಲಿದ್ದು, ಸಿಟಿ ಮತ್ತು ಎಂಆರ್‌ಐ ಸ್ಕ್ಯಾನ್ ಸೌಲಭ್ಯಕ್ಕೆ ಎಪಿಎಲ್ ಕಾರ್ಡ್‌ದಾರರು ಶುಲ್ಕ ಭರಿಸಬೇಕಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.