ದಾಬಸ್ ಪೇಟೆ: ಇಲ್ಲಿನ ಸರ್ಕಾರಿ ಬಸ್ ನಿಲ್ದಾಣದ ಆವರಣದಲ್ಲಿ ಗುಂಡಿಗಳು ಬಿದ್ದಿದ್ದು, ವಾಹನಗಳ ಸಂಚಾರ ದುಸ್ತರವಾಗಿದೆ.
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆಗಳು ಸಂಪೂರ್ಣ ಹದಗೆಟ್ಟಿವೆ. ಇದೇ ರಸ್ತೆಯಲ್ಲಿ ನಿತ್ಯ ನೂರಾರು ಬಸ್‌ಗಳು, ಆಟೊ, ದ್ವಿಚಕ್ರ ವಾಹನಗಳು ಸಂಚರಿಸುತ್ತವೆ.
ಗುಂಡಿ ಬಿದ್ದ ರಸ್ತೆಯಲ್ಲಿ ಸಂಚರಿಸುವುದರಿಂದ ಪ್ರಯಾಣಿಕರು ತೊಂದರೆ ಅನುಭವಿಸುವಂತಾಗಿದೆ. ನಿಲ್ದಾಣದಲ್ಲಿ ವಾಹನಗಳು ನಿಲ್ಲಿಸಲು, ಪ್ರಯಾಣಿಕರು ಬಸ್ ಹತ್ತಲು ಪರದಾಡುವ ಸ್ಥಿತಿ ಇದೆ. ಕೆಲವೊಮ್ಮೆ ಕೆಸರು ನೀರು ಪ್ರಯಾಣಿಕರಿಗೆ ಸಿಡಿಯುತ್ತದೆ.
ವಾರದ ಹಿಂದೆಯಷ್ಟೇ ಬಸ್ ನಿಲ್ದಾಣ ವೀಕ್ಷಣೆಗೆ ಬಂದಿದ್ದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಈ ಭಾಗದಲ್ಲಿ ಹೈಟೆಕ್ ಬಸ್ ನಿಲ್ದಾಣ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದ್ದರು.
‘ಸೋಂಪುರ ಕೈಗಾರಿಕಾ ಪ್ರದೇಶದಲ್ಲಿರುವ ಬಸ್ ನಿಲ್ದಾಣ ಚಿಕ್ಕದಾಗಿದ್ದು, ಅವೈಜ್ಞಾನಿಕವಾಗಿ ನಿರ್ಮಾಣ ಆಗಿದೆ. ಮಳೆ ಬಂದರಂತೂ ಬಸ್ ನಿಲ್ದಾಣದಲ್ಲಿ ಸಮಸ್ಯೆ ತಪ್ಪಿದಲ್ಲ’ ಎಂದು ಪ್ರಯಾಣಿಕ ರವಿಕುಮಾರ್ ಬೇಸರ ವ್ಯಕ್ತಪಡಿಸಿದರು.
‘ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿ ಆರಂಭವಾಗುವವರೆಗೆ ಗುಂಡಿಗಳನ್ನು ಮುಚ್ಚಿ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡಬೇಕು’ ಎನ್ನುತ್ತಾರೆ ಸ್ಥಳೀಯರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.