ADVERTISEMENT

ವಿವಿಧ ಬೇಡಿಕೆ ಈಡೇರಿಕೆ: ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 18 ಜುಲೈ 2025, 23:31 IST
Last Updated 18 ಜುಲೈ 2025, 23:31 IST
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ‍್ರಧಾನ ಸಂಚಾಲಕ ಮಾವಳ್ಳಿ ಶಂಕರ್‌, ಇಂದಿರಾ ಕೃಷ್ಣಪ್ಪ ನೇತೃತ್ವದಲ್ಲಿ ಶುಕ್ರವಾರ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಯಿತು   ಪ್ರಜಾವಾಣಿ ಚಿತ್ರ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ‍್ರಧಾನ ಸಂಚಾಲಕ ಮಾವಳ್ಳಿ ಶಂಕರ್‌, ಇಂದಿರಾ ಕೃಷ್ಣಪ್ಪ ನೇತೃತ್ವದಲ್ಲಿ ಶುಕ್ರವಾರ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಯಿತು   ಪ್ರಜಾವಾಣಿ ಚಿತ್ರ   

ಬೆಂಗಳೂರು: ಪರಿಶಿಷ್ಟರ ಪಿ.ಟಿ.ಸಿ.ಎಲ್ ಕಾಯ್ದೆಗೆ ರಾಜ್ಯ ಸರ್ಕಾರ ತಂದಿರುವ ತಿದ್ದುಪಡಿಯನ್ನು ಮಾನ್ಯ ಮಾಡದ ಕಂದಾಯ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಶುಕ್ರವಾರ ಪ್ರತಿಭಟನೆ ನಡೆಸಿತು.

ಹೈಕೋರ್ಟ್‌ನಲ್ಲಿ ಪಿ.ಟಿ.ಸಿ.ಎಲ್ ಪ್ರಕರಣಗಳು ವಜಾಗೊಳ್ಳುತ್ತಿವೆ. ಹಾಗಾಗಿ ರಾಜ್ಯ ಸರ್ಕಾರ ಪರಿಣತ ವಕೀಲರನ್ನು ನೇಮಿಸಿ, ಈ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.

ಪರಿಶಿಷ್ಟ ಜಾತಿ ಮತ್ತು ಪಂಗಡದವರು ಹಾಗೂ ಭೂ ಹೀನ ತಳ ಸಮುದಾಯದವರು ಉಳುಮೆ ಮಾಡುತ್ತಿರುವ ಬಗರ್‌ ಹುಕುಂ ಸಾಗುವಳಿ ಕಾಲಮಿತಿಯೊಳಗೆ ಇತ್ಯರ್ಥಗೊಳಿಸಬೇಕು. ವಿನಾಕಾರಣ ವಜಾಗೊಳಿಸಿರುವ ಬಗರ್ ಹುಕುಂ ಸಾಗುವಳಿಯ ಅರ್ಜಿಗಳನ್ನು ಮರುಪರಿಶೀಲಿಸಬೇಕು ಎಂದರು.

ADVERTISEMENT

ಬೆಂಗಳೂರು ನಗರ ಜಿಲ್ಲೆ, ಪೂರ್ವ ತಾಲ್ಲೂಕಿನ ಕಾಡುಗೋಡಿ ಪ್ಲಾಂಟೇಷನ್‌ನಲ್ಲಿ ಪರಿಶಿಷ್ಟ ಜಾತಿಯವರಿಗೆ ಭೂಮಿ ಮಂಜೂರಾಗಿದೆ. ಆದರೆ, ಅರಣ್ಯ ಅಧಿಕಾರಿಗಳು ರೈತರನ್ನು ಒಕ್ಕಲೆಬ್ಬಿಸುತ್ತಿದ್ದಾರೆ. ಇದನ್ನು ತಡೆಯಬೇಕು. ಅಧಿಕಾರಿಗಳ ವಿರುದ್ಧ ಎಸ್‌ಸಿ, ಎಸ್‌ಟಿ ದೌರ್ಜನ್ಯ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದರು.

ಎಸ್‌ಸಿಎಸ್‌ಪಿ, ಟಿಎಸ್‌ಪಿ ನಿರ್ವಹಣೆಗೆ ಪ್ರತ್ಯೇಕ ನಿರ್ದೇಶನಾಲಯ ಅಥವಾ ಏಕ ಗವಾಕ್ಷಿ ಯೋಜನೆ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಮನವಿ ಮಾಡಿದರು. 

ಪ್ರತಿಭಟನೆಯಲ್ಲಿ ಸಮಿತಿ ಸಂಘಟನಾ ಸಂಚಾಲಕ ಕಾರಳ್ಳಿ ಶ್ರೀನಿವಾಸ್, ಸದಸ್ಯರಾದ ಜಿಗಳ ಶ್ರೀರಾಮ್, ನಿರ್ಮಲಾ, ಸಂಪಂಗಿರಾಮ್, ಪ್ರೊ. ಬಿ.ಕೃಷ್ಣಪ್ಪ ಟ್ರಸ್ಟ್ ಮುಖ್ಯಸ್ಥೆ ಇಂದಿರಾ ಕೃಷ್ಣಪ್ಪ ಪಾಲ್ಗೊಂಡಿದ್ದರು.

ಪರಿಶಿಷ್ಟರ ಮೇಲಿನ ದೌರ್ಜನ್ಯ ಪ್ರಕರಣ ನಿರ್ವಹಣೆಗೆ ಸರ್ಕಾರ ಸ್ಥಾಪಿಸಿರುವ ಡಿಸಿಆರ್‌ಇ ಪೊಲೀಸ್ ಠಾಣೆಗಳಿಗೆ ಅಗತ್ಯವಿರುವ ಸಿಬ್ಬಂದಿ ಮತ್ತು ಮೂಲಸೌಕರ್ಯ ಒದಗಿಸಬೇಕು.
ಮಾವಳ್ಳಿ ಶಂಕರ್, ದಸಂಸ ಪ್ರಧಾನ ಸಂಚಾಲಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.