ಪ್ರಾತಿನಿಧಿಕ ಚಿತ್ರ
– ಪ್ರಜಾವಾಣಿ ಚಿತ್ರ
ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಇತರೆ ಸಮುದಾಯಗಳು ಉಳುಮೆ ಮಾಡುತ್ತಿರುವ ಜಾಗವನ್ನು ಬಗರ್ ಹುಕುಂ ಅಡಿ ಮಂಜೂರು ಮಾಡುವ ಅರ್ಜಿಗಳನ್ನು ಕಾಲಮಿತಿಯೊಳಗೆ ಇತ್ಯರ್ಥಗೊಳಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಜುಲೈ 18ರಂದು ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ತಿಳಿಸಿದೆ.
ಬುಧುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್, ‘ರಾಜ್ಯ ಸರ್ಕಾರ ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ಮಾಡಿದೆ. ಆದರೆ ಇದನ್ನು ಮಾನ್ಯ ಮಾಡದ ಕಂದಾಯ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಹೈಕೋರ್ಟ್‌ನಲ್ಲಿ ಪಿಟಿಸಿಎಲ್ ಪ್ರಕರಣಗಳು ವಜಾಗೊಳ್ಳುತ್ತಿವೆ. ರಾಜ್ಯ ಸರ್ಕಾರ ನುರಿತ ವಕೀಲರನ್ನು ನೇಮಿಸಿ, ಸುಪ್ರೀಂ ಕೋರ್ಟ್‌ನಲ್ಲಿ ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ಮೇಲ್ಮನವಿ ಸಲ್ಲಿಸಬೇಕು’ ಎಂದು ಒತ್ತಾಯಿಸಿದರು.
‘ಬೆಂಗಳೂರು ನಗರ ಜಿಲ್ಲೆ ಪೂರ್ವ ತಾಲ್ಲೂಕಿನ ಕಾಡುಗೋಡಿ ಪ್ಲಾಂಟೇಷನ್‌ನಲ್ಲಿ ಪರಿಶಿಷ್ಟ ಜಾತಿಯವರಿಗೆ ಭೂಮಿ ಮಂಜೂರಾಗಿದೆ. ಆದರೆ ಅರಣ್ಯ ಇಲಾಖೆಯ ಅಧಿಕಾರಿಗಳು ಪರಿಶಿಷ್ಟ ಜಾತಿಯವರನ್ನು ಅಲ್ಲಿಂದ ಒಕ್ಕಲೆಬ್ಬಿಸುತ್ತಿದ್ದಾರೆ. ಇದನ್ನು ಕೂಡಲೇ ನಿಲ್ಲಿಸಿ, ಒಕ್ಕಲೆಬ್ಬಿಸಿದ ಅಧಿಕಾರಿಗಳ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ನಿಯಂತ್ರಣ ಕಾಯ್ದೆಯಡಿ ಪ್ರಕರಣಗಳನ್ನು ದಾಖಲಿಸಬೇಕು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.