ADVERTISEMENT

‘ಮೂಲನಿವಾಸಿಗಳ ವಿರೋಧಿ ಸರ್ಕಾರ’

ಡಿ.6ರಂದು ದಲಿತರ ಸಾಂಸ್ಕೃತಿಕ ಪ್ರತಿರೋಧದ ಐಕ್ಯತಾ ಸಮಾವೇಶ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2022, 15:48 IST
Last Updated 3 ಡಿಸೆಂಬರ್ 2022, 15:48 IST

ಬೆಂಗಳೂರು: ಡಾ.ಬಿ.ಆರ್. ಅಂಬೇಡ್ಕರ್ ಅವರ ಪರಿನಿರ್ವಾಣ ದಿನದ ಅಂಗವಾಗಿ ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿಯಿಂದ ಡಿ. 6ರಂದು ‘ಸಂವಿಧಾನ ಮತ್ತು ಪ್ರಜಾಪ್ರಭುತ್ವದ ರಕ್ಷಣೆಗಾಗಿ ದಲಿತರ ಸಾಂಸ್ಕೃತಿಕ ಪ್ರತಿರೋಧ ಮತ್ತು ದಲಿತ ಸಂಘಟನೆಗಳ ಬೃಹತ್ ಐಕ್ಯತಾ ಸಮಾವೇಶ’ವನ್ನು ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಆಯೋಜಿಸಿದೆ.

‘ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತಿವೆ. ದೇಶದ ಮೂಲ ನಿವಾಸಿಗಳ ಹಿತಾಸಕ್ತಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿವೆ. ಆದ್ದರಿಂದ ಈ ದಲಿತ ಸಮಾವೇಶವನ್ನು ಜನ ಚಳವಳಿಯಾಗಿ ಪರಿವರ್ತನೆ ಮಾಡಬೇಕಿದೆ’ ಎಂದು ಚಾಲನಾ ಸಮಿತಿಯ ಅಧ್ಯಕ್ಷ ಎನ್‌. ವೆಂಕಟೇಶ AVRU ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

‘ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಸಂವಿಧಾನದ ಆಶಯಗಳು ಮತ್ತು ಪ್ರಜಾಸತ್ತಾತ್ಮಕ ಮೌಲ್ಯಗಳು ಕುಸಿಯುತ್ತಿವೆ. ಸಾಮಾಜಿಕ ನ್ಯಾಯವೆಂಬುದು ಕನಸಿನ ಮಾತಾಗಿದೆ. ನಿರುದ್ಯೋಗ ಯುವ ಜನಾಂಗವನ್ನು ಹತಾಶೆಗೆ ದೂಡಿದೆ. ದೇಶದಲ್ಲಿ ಕೋಮು ರಾಜಕೀಯ ವಿಜೃಂಭಿಸುತ್ತಿದೆ. ಸಮ ಸಮಾಜದ ಕನಸು ಬಿತ್ತಿದ್ದ ಬುದ್ಧ, ಬಸವ, ಅಂಬೇಡ್ಕರ್‌ ಮರೆಯಾಗಿ ಕೋಮ ವಿಷದ ಗೋಡ್ಸೆ, ಸಾವರ್ಕರ್‌ ಮುನ್ನೆಲೆಗೆ ಬರುತ್ತಿದ್ದಾರೆ’ ಎಂದರು.

ADVERTISEMENT

‘ಬ್ರಾಹ್ಮಣ ಶ್ರೇಷ್ಠತೆ ಪ್ರತಿಪಾದಿಸುವ ಜಾತಿ ವ್ಯವಸ್ಥೆಯನ್ನು ಮರುಸ್ಥಾಪನೆ ಮಾಡುವುದೇ ಆರ್‌ಎಸ್‌ಎಸ್ ಮತ್ತು ಬಿಜೆಪಿಯ ಉದ್ದೇಶವಾಗಿದೆ. ಈ ದೇಶದ ದಲಿತ, ಆದಿವಾಸಿ, ಅಲೆಮಾರಿ, ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಬೆಂಬಲ ಸಿಗುವುದಿಲ್ಲ ಎಂಬ ಕಾರಣಕ್ಕೆ ಪ್ರತಿಯೊಂದು ಜಾತಿಯೊಳಗೆ ಉಪಜಾತಿಯ ವಿಷ ಬೀಜವನ್ನು ಬಿತ್ತುತ್ತಿದ್ದಾರೆ. ದಲಿತ ಸಮುದಾಯವನ್ನು ಜಾತಿ–ಉಪಜಾತಿಯ ಹೆಸರಿನಲ್ಲಿ ಛಿದ್ರಗೊಳಿಸಲಾಗುತ್ತಿದೆ. ಹಿಂದುತ್ವದದ ಹೆಸರಿನಲ್ಲಿ ಅಲ್ಪಸಂಖ್ಯಾತರನ್ನು ಶತ್ರುಗಳಂತೆ ಬಿಂಬಿಸಲಾಗುತ್ತಿದೆ’ ಎಂದು ದಸಂಸ(ಅಂಬೇಡ್ಕರ್‌ ವಾದ) ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್ ಬೇಸರ ವ್ಯಕ್ತಪಡಿಸಿದರು.

ಈ ಸಮಾವೇಶವನ್ನು ಡಾ.ಬಿ.ಆರ್. ಅಂಬೇಡ್ಕರ್‌ ಅವರ ಮೊಮ್ಮಗಳು ರಮಾಬಾಯಿ ಆನಂದ್ ತೇಲ್ತುಂಬ್ಡೆ ಉದ್ಘಾಟಿಸಲಿದ್ದಾರೆ. ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ, ರವಿವರ್ಮ ಕುಮಾರ್ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ದಲಿತ ಸಂಘರ್ಷ ಸಮಿತಿ ನಾಯಕರಾದ ಇಂದೂಧರ ಹೊನ್ನಾಪುರ, ಅಣ್ಣಯ್ಯ, ಜಿಗಣಿ ಶಂಕರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.