ADVERTISEMENT

ದರ್ಶನ್‌ಗೆ ಸೌಲಭ್ಯ: ಅ.18ರ ಒಳಗೆ ವರದಿ ಸಲ್ಲಿಸಲು ಸೂಚನೆ

ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಖುದ್ದು ಭೇಟಿಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2025, 15:56 IST
Last Updated 10 ಅಕ್ಟೋಬರ್ 2025, 15:56 IST
   

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ನಗರ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಖುದ್ದು ಭೇಟಿ ನೀಡಿ ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್‌ ಅವರಿಗೆ ನೀಡಿರುವ ಸೌಲಭ್ಯಗಳನ್ನು ಪರಿಶೀಲಿಸಿ ವರದಿ ಸಲ್ಲಿಸಬೇಕು ಎಂದು 57ನೇ ಸಿಸಿಎಚ್ ನ್ಯಾಯಾಲಯವು ಆದೇಶಿಸಿದೆ.

ದರ್ಶನ್‍ಗೆ ಜೈಲು ಅಧಿಕಾರಿಗಳು ಕನಿಷ್ಠ ಮೂಲಸೌಲಭ್ಯ ಸಹ ಕಲ್ಪಿಸಿಲ್ಲ ಎಂಬ ಆರೋಪಕ್ಕೆ ಸಂಬಂಧಪಟ್ಟ ಅರ್ಜಿಯನ್ನು ನ್ಯಾಯಾಲಯವು ಅಂಗೀಕರಿಸಿದ್ದು, ಈ ಬಗ್ಗೆ ಖುದ್ದು ಪರಿಶೀಲನೆ ನಡೆಸಿ ಅಕ್ಟೋಬರ್‌ 18ರ ಒಳಗೆ ವರದಿ ನೀಡುವಂತೆ ಆದೇಶಿಸಿದೆ.

ಕಾರಾಗೃಹದಲ್ಲಿರುವ ದರ್ಶನ್‍ಗೆ ಮೂಲಸೌಲಭ್ಯ ಕಲ್ಪಿಸುವಂತೆ ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ವಕೀಲರು ನ್ಯಾಯಾಲಯಕ್ಕೆ ಮೂರನೇ ಬಾರಿ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯದ ಆದೇಶವಿದ್ದರೂ ಜೈಲು ಅಧಿಕಾರಿಗಳು ಕನಿಷ್ಠ ಸೌಕರ್ಯ ಕಲ್ಪಿಸಿಲ್ಲ ಎಂದು ದರ್ಶನ್ ಪರ ವಕೀಲರು ಅರ್ಜಿಯಲ್ಲಿ ಆರೋಪಿಸಿದ್ದಾರೆ.

ADVERTISEMENT

ದರ್ಶನ್ ಅವರನ್ನು ಇನ್ನೂ ಕ್ವಾರಂಟೈನ್ ಸೆಲ್‍ನಲ್ಲೇ ಇರಿಸಲಾಗಿದೆ. ಅಧಿಕಾರಿಗಳು ಬಿಸಿಲು ಬೀಳದ ಜಾಗದಲ್ಲಿ ವಾಕಿಂಗ್‌ಗೆ ಅವಕಾಶ ಕಲ್ಪಿಸಿದ್ದಾರೆ. ಇದರಿಂದ ದರ್ಶನ್‍ ಅವರಿಗೆ ಆರೋಗ್ಯ ಸಮಸ್ಯೆಯಾಗಿದೆ. ಈ ಹಿಂದೆ ನ್ಯಾಯಾಲಯ ನೀಡಿದ್ದ ಆದೇಶವನ್ನೂ ಅಧಿಕಾರಿಗಳು ಪಾಲಿಸುತ್ತಿಲ್ಲ. ಹೀಗಾಗಿ, ನ್ಯಾಯಾಧೀಶರೇ ಖುದ್ದು ಜೈಲಿಗೆ ಭೇಟಿ ಕೊಟ್ಟು ಪರಿಶೀಲನೆ ಮಾಡಿ ಸತ್ಯಾಸತ್ಯತೆ ತಿಳಿಯಬೇಕು ಎಂದು ದರ್ಶನ್ ಪರ ವಕೀಲರು ಅರ್ಜಿಯಲ್ಲಿ ಕೋರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.