ADVERTISEMENT

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಕುರಿತು ಅಶ್ಲೀಲ ಸಂದೇಶ: ತನಿಖೆಗೆ ಮೂರು ತಂಡ ರಚನೆ

​ಪ್ರಜಾವಾಣಿ ವಾರ್ತೆ
Published 25 ಡಿಸೆಂಬರ್ 2025, 15:32 IST
Last Updated 25 ಡಿಸೆಂಬರ್ 2025, 15:32 IST
ವಿಜಯಲಕ್ಷ್ಮಿ
ವಿಜಯಲಕ್ಷ್ಮಿ   

ಬೆಂಗಳೂರು: ನಟ ದರ್ಶನ್‌ ಅವರ ಪತ್ನಿ ವಿಜಯಲಕ್ಷ್ಮಿ ಅವರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಹಾಗೂ ಅವಹೇಳನಕಾರಿ ಸಂದೇಶಗಳನ್ನು ಹಾಕಿರುವ ಕಿಡಿಗೇಡಿಗಳ ಬಂಧನಕ್ಕೆ ಮೂರು ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದೆ.

ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ವಿಜಯಲಕ್ಷ್ಮಿ ಅವರು ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ಬುಧವಾರ ದೂರು ನೀಡಿದ್ದರು. ಆ ದೂರು ಆಧರಿಸಿ ಯೋಗಿ ಕಿಚ್ಚ, ಮಿ.ಅನಾಥ, ಮಹಿ ಕಿಚ್ಚ, ವಿರಾಟ್ ಕಿಚ್ಚ ಹೆಸರಿನಲ್ಲಿದ್ದ ಖಾತೆ ಸೇರಿದಂತೆ 18 ಇನ್‌ಸ್ಟ್ರಾಗ್ರಾಂ ಖಾತೆಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಚುರುಕು ಮಾಡಲಾಗಿದೆ. ಕಿಡಿಗೇಡಿಗಳು ಬೇರೆ ಬೇರೆ ಹೆಸರಿನಲ್ಲಿ ಖಾತೆಗಳನ್ನು ನಿರ್ವಹಣೆ ಮಾಡುತ್ತಿರುವುದು ಕಂಡುಬಂದಿದೆ. ಖಾತೆಗಳ ಬಳಕೆದಾರರು ಯಾರು ಎಂಬುದನ್ನು ಪತ್ತೆ ಮಾಡಲಾಗಿದೆ. ಸದ್ಯ ಕೆಲವು ಖಾತೆಗಳಿದ್ದ ಅಶ್ಲೀಲ ಬರಹಗಳನ್ನು ಅಳಿಸಿ ಹಾಕಲಾಗಿದೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ.

‘ಸಾಮಾಜಿಕ ಜಾಲತಾಣಗಳ ಮೂಲಕ ವಿಜಯಲಕ್ಷ್ಮಿ ಹಾಗೂ ಅವರ ಕುಟುಂಬಸ್ಥರನ್ನು ನಿಂದಿಸಿ 150ಕ್ಕೂ ಪೋಸ್ಟ್ ಹಾಕಿರುವುದು ತನಿಖೆ ವೇಳೆ ಕಂಡುಬಂದಿದೆ’ ಎಂದು ಸಿಸಿಬಿ ಮೂಲಗಳು ತಿಳಿಸಿವೆ.

ADVERTISEMENT

‘ದಾವಣಗೆರೆಯಲ್ಲಿ ಆಯೋಜಿಸಿದ್ದ ‘ಡೆವಿಲ್’ ಸಿನಿಮಾದ ಪ್ರಚಾರದಲ್ಲಿ ಯಾರು ಏನೇ ಹೇಳಿದರೂ ತಲೆಕೆಡಿಸಿಕೊಳ್ಳಬೇಡಿ ಎಂದು ಅಭಿಮಾನಿಗಳಿಗೆ ಕರೆ ನೀಡಿದ್ದೆ. ಈ ಬಗ್ಗೆ ಹಲವರು ಸಾಮಾಜಿಕ ಜಾಲತಾಣದ ಮೂಲಕ ನನ್ನ ಹಾಗೂ ನಮ್ಮ ಕುಟುಂಬದ ಕುರಿತು ಅಶ್ಲೀಲ ಸಂದೇಶಗಳನ್ನು ಹಾಕುತ್ತಿದ್ದಾರೆ. ಅದರಿಂದ ನಮ್ಮ ಗೌರವಕ್ಕೆ ಧಕ್ಕೆಯಾಗುತ್ತಿದ್ದು, ಮನಸ್ಸಿಗೆ ತೀವ್ರ ನೋವುಂಟು ಮಾಡಿದೆ. ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ವಿಜಯಲಕ್ಷ್ಮಿ ಅವರು ದೂರಿನಲ್ಲಿ ಕೋರಿದ್ದರು.

ನಟಿ ರಮ್ಯಾ ಅವರಿಗೂ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಈ ಹಿಂದೆ ಬೆದರಿಕೆ ಸಂದೇಶ ಕಳುಹಿಸಲಾಗಿತ್ತು. ಅವರು ನೀಡಿದ್ದ ದೂರು ಆಧರಿಸಿ, 11 ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.