ADVERTISEMENT

ಅಧೀನ ಕಾರ್ಯದರ್ಶಿ ಎತ್ತಂಗಡಿಗೆ ಡಿಸಿಎಂ ಪಟ್ಟು

​ಪ್ರಜಾವಾಣಿ ವಾರ್ತೆ
Published 8 ಜೂನ್ 2019, 19:31 IST
Last Updated 8 ಜೂನ್ 2019, 19:31 IST
   

ಬೆಂಗಳೂರು: ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ (ಬಿಬಿಎಂಪಿ ವಿಭಾಗ) ಲಕ್ಷ್ಮಿಸಾಗರ್‌ ಅವರನ್ನು ವರ್ಗಾವಣೆ ಮಾಡಲೇಬೇಕು ಎಂದು ಆಗ್ರಹಿಸಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಅವರು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿದ್ದಾರೆ.

‘ಲಕ್ಷ್ಮಿಸಾಗರ್‌ ಅವರು ಈ ಹಿಂದೆ ತಹಶೀಲ್ದಾರ್‌ ಆಗಿದ್ದರು. ವೃಂದ ಮತ್ತು ನೇಮಕಾತಿ ನಿಯಮಗಳಿಗೆ ವಿರುದ್ಧವಾಗಿ ಅವರನ್ನು ನಗರಾಭಿವೃದ್ಧಿ ಇಲಾಖೆಗೆ ನೇಮಕ ಮಾಡಲಾಗಿದೆ. ಅವರ ವಿರುದ್ಧ ಸಚಿವಾಲಯದ ನೌಕರರು ಪ್ರತಿಭಟನೆ ಮಾಡಿದ್ದಾರೆ. ಲಕ್ಷ್ಮಿಸಾಗರ್‌ ವಿರುದ್ಧ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಸಾಕಷ್ಟು ದೂರುಗಳನ್ನು ನೀಡಿದ್ದಾರೆ. ಹೀಗಾಗಿ, ಅವರನ್ನು ಮಾತೃ ಇಲಾಖೆಗೆ ಕಳುಹಿಸಬೇಕು’ ಎಂದು ಅವರು ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಜಿಲ್ಲಾ ತರಬೇತಿ ಸಂಸ್ಥೆಯ ಉಪ ಪ್ರಾಂಶುಪಾಲರಾಗಿದ್ದ ಲಕ್ಷ್ಮಿಸಾಗರ್‌ ಅವರನ್ನು ಇಲಾಖೆಯ ಅಧೀನ ಕಾರ್ಯದರ್ಶಿಯಾಗಿ ಈ ವರ್ಷದ ಫೆಬ್ರುವರಿಯಲ್ಲಿ ವರ್ಗಾವಣೆ ಮಾಡಲಾಗಿತ್ತು. ರಾಜ್ಯ ಸರ್ಕಾರದ ಸಚಿವಾಲಯದ ವೃಂದ ಹಾಗೂ ನೇಮಕಾತಿ ನಿಯಮಗಳಿಗೆ ವಿರುದ್ಧವಾಗಿ ಇತರೆ ಇಲಾಖೆಯ ನೌಕರರನ್ನು ಸಚಿವಾಲಯದ ಅಧೀನ ಕಾರ್ಯದರ್ಶಿ ಹುದ್ದೆ ಸ್ಥಳ ನಿಯುಕ್ತಿ ಮಾಡಲಾಗುತ್ತಿದೆ ಎಂದು ಆಕ್ಷೇಪಿಸಿ ಸಚಿವಾಲಯ ನೌಕರರ ಸಂಘವು ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮಹೇಂದ್ರ ಜೈನ್‌ ಅವರಿಗೆ ಫೆಬ್ರುವರಿಯಲ್ಲಿ ಮನವಿ ಸಲ್ಲಿಸಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.