
ಬೆಂಗಳೂರು: ‘ಅಂಗನವಾಡಿ, ಬಿಸಿಯೂಟ ಹಾಗೂ ಆಶಾ ಕಾರ್ಯಕರ್ತೆಯರ ವಿವಿಧ ಬೇಡಿಕೆಗಳನ್ನು 2026ರ ಫೆಬ್ರುವರಿಯಲ್ಲಿ ಮಂಡಿಸುವ ಕೇಂದ್ರ ಬಜೆಟ್‌ನಲ್ಲಿ ಈಡೇರಿಸಬೇಕು. ಇಲ್ಲದಿದ್ದರೆ ಮತ್ತೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು’ ಎಂದು ಸಿಐಟಿಯು ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ‘ರಾಜ್ಯದಲ್ಲಿರುವ ಕೇಂದ್ರ ಸಚಿವರ ಮನೆಗಳ ಮುಂಭಾಗದಲ್ಲಿ ಅಂಗನವಾಡಿ, ಬಿಸಿಯೂಟ ಹಾಗೂ ಆಶಾ ಕಾರ್ಯಕರ್ತೆಯರು ಡಿ. 1ರಂದು ಅನಿರ್ದಿಷ್ಟಾವಧಿ ಪ್ರತಿಭಟನೆ ಕೈಗೊಂಡಿದ್ದರು. ಇದಕ್ಕೆ ಸ್ಪಂದಿಸಿದ್ದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು, ನವದೆಹಲಿಯಲ್ಲಿ ಡಿ.3ರ ಸಭೆಗೆ ಆಹ್ವಾನಿಸಿದ್ದರು. ಕೇಂದ್ರ ಸಚಿವರಾದ ಅನ್ನಪೂರ್ಣದೇವಿ ಹಾಗೂ ಧರ್ಮೇಂದ್ರ ಪ್ರಧಾನ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಿಐಟಿಯು ಮುಖಂಡರು ಭಾಗವಹಿಸಿದ್ದರು’ ಎಂದು ತಿಳಿಸಿದರು.
‘ಸಭೆಯಲ್ಲಿ ಬಿಸಿಯೂಟ ನೌಕರರಿಗೆ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರ ಗೌರವ ಧನ ಹೆಚ್ಚಿಸಬೇಕು. ಅಂಗನವಾಡಿಗಳಲ್ಲಿ ಮುಖ ಚಹರೆ ಗುರುತಿಸುವಿಕೆ (ಎಫ್‌ಆರ್‌ಎಸ್) ವ್ಯವಸ್ಥೆಯನ್ನು ಸ್ಥಗಿತಗೊಳಿಸುವುದು. ಅಂಗನವಾಡಿ ಫಲಾನುಭವಿಗಳ ಘಟಕ ವೆಚ್ಚ ಹೆಚ್ಚಿಸುವುದು, ಸ್ಥಳೀಯ ಆಹಾರ ಪದಾರ್ಥಗಳನ್ನು ಸರಬರಾಜು ಮಾಡಬೇಕು. ಬಿಸಿಯೂಟ ಯೋಜನೆಯನ್ನು ಸರ್ಕಾರೇತರ ಸಂಸ್ಥೆಗಳಿಗೆ ನೀಡದಂತೆ ಮನವಿ ಸಲ್ಲಿಸಲಾಯಿತು. ಇದಕ್ಕೆ ಸ್ಪಂದಿಸಿದ ಅನ್ನಪೂರ್ಣ ದೇವಿ ಅವರು ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ್ದಾರೆ’ ಎಂದರು.
ರಾಜ್ಯ ಅಂಗನವಾಡಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಎಚ್.ಎಸ್ ಸುನಂದ, ರಾಜ್ಯ ಬಿಸಿಯೂಟ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಮಾಲಿನಿ ಮೇಸ್ತ, ಖಜಾಂಚಿ ಮಹದೇವಮ್ಮ, ಕರ್ನಾಟಕ ರಾಜ್ಯ ಆಶಾ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷೆ ಯಮುನಾ ಗಾಂವ್ಕರ್ ಸುದ್ದಿಗೋಷ್ಠಿಯಲ್ಲಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.