ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ಮೃತಪಟ್ಟವರಲ್ಲಿ ಇಬ್ಬರು ಕೋವಿಡ್ ಪೀಡಿತರಾಗಿದ್ದರು ಎನ್ನುವುದು ಪ್ರಯೋಗಾಲಯ ಪರೀಕ್ಷೆಯಿಂದ ದೃಢಪಟ್ಟಿದೆ. ಇದರಿಂದಾಗಿ ಈ ವರ್ಷ ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ.
ಉಡುಪಿಯಲ್ಲಿ 65 ವರ್ಷದ ವ್ಯಕ್ತಿ ಅನಾರೋಗ್ಯ ಸಂಬಂಧ ಮೇ 30ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರು ಇದೇ 2ರಂದು ಮೃತಪಟ್ಟಿದ್ದಾರೆ. ಕ್ಯಾನ್ಸರ್ ಪೀಡಿತರಾಗಿದ್ದ ಅವರು ಕಿಮೊಥೆರಪಿ ಪಡೆಯುತ್ತಿದ್ದರು. ಬೆಂಗಳೂರಿನ 42 ವರ್ಷದ ವ್ಯಕ್ತಿ ಮೇ 26ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿ, ಮೇ 31ರಂದು ಮೃತಪಟ್ಟಿದ್ದರು. ಈ ಇಬ್ಬರೂ ಜ್ವರ, ಉಸಿರಾಟ ಸಮಸ್ಯೆ ಎದುರಿಸುತ್ತಿದ್ದರು. ಆದ್ದರಿಂದ ಅವರ ಗಂಟಲ ದ್ರವದ ಮಾದರಿ ಸಂಗ್ರಹಿಸಿ, ಕೋವಿಡ್ ಪರೀಕ್ಷೆಗೆ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಬುಧವಾರ ಅವರ ಪರೀಕ್ಷಾ ವರದಿ ಬಂದಿದ್ದು, ಕೊರೊನಾ ಸೋಂಕಿತರಾಗಿದ್ದರು ಎನ್ನುವುದು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಕೊರೊನಾ ವೈರಾಣು ಪತ್ತೆ ಸಂಬಂಧ 24 ಗಂಟೆಗಳ ಅವಧಿಯಲ್ಲಿ 592 ಗಂಟಲ ದ್ರವದ ಮಾದರಿಗಳನ್ನು ಸಂಗ್ರಹಿಸಿದ್ದು, ಹೊಸದಾಗಿ 153 ಮಂದಿ ಕೋವಿಡ್ ಪೀಡಿತರಾಗಿರುವುದು ಮಂಗಳವಾರ ದೃಢಪಟ್ಟಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 324ಕ್ಕೆ ಏರಿಕೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.