
ಬೆಂಗಳೂರು: ದೆಹಲಿಯಲ್ಲಿ ಕಾರು ಸ್ಫೋಟ ಸಂಭವಿಸಿದ್ದರಿಂದ ನಗರದಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು, ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ ಎಂದು ನಗರ ಪೊಲೀಸ್ ಕಮಿಷನರ್ ಸೀಮಾಂತ್ ಕುಮಾರ್ ಸಿಂಗ್ ತಿಳಿಸಿದರು.
ಸೋಮವಾರ ಸಂಜೆಯಿಂದಲೇ ನಗರದಾದ್ಯಂತ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ತಪಾಸಣೆ ಕೈಗೊಂಡಿದ್ದಾರೆ. ನಗರದ ಮಾಲ್‌ಗಳು, ಲಾಡ್ಜ್, ಮೆಟ್ರೊ ನಿಲ್ದಾಣ, ರೈಲು ನಿಲ್ದಾಣ ಸೇರಿ ಪ್ರಮುಖ ಸ್ಥಳಗಳಲ್ಲಿ ಶೋಧ ನಡೆಸುತ್ತಿದ್ದು, ಯಾವುದೇ ಅನುಮಾನಸ್ಪದ ವಸ್ತುಗಳು ಪತ್ತೆಯಾಗಿಲ್ಲ. ಅಹಿತಕರ ಘಟನೆ ನಡೆಯದಂತೆ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.
ಭಾರತೀಯ ವಿಜ್ಞಾನ ಸಂಸ್ಥೆ, ಇಸ್ರೊ, ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಟೋಲ್‌ಗಳಲ್ಲಿ ಹಾಗೂ ಇತರೆಡೆ ನಗರ ಪ್ರವೇಶಿಸುವ ಎಲ್ಲ ವಾಹನಗಳನ್ನು ತಪಾಸಣೆ ಮಾಡಲಾಗುತ್ತಿದೆ.
ನಗರ ಕಮಿಷನ್‌ರೇಟ್ ವ್ಯಾಪ್ತಿಯ 11 ವಿಭಾಗಗಳಲ್ಲೂ ನಿಗಾ ವಹಿಸಲು ಆಯಾ ವಿಭಾಗದ ಡಿಸಿಪಿಗಳಿಗೆ ನಿರ್ದೇಶನ ನೀಡಲಾಗಿದೆ. ಅನುಮಾನಾಸ್ಪದವಾಗಿ ಓಡಾಟ ನಡೆಸುವ ವ್ಯಕ್ತಿಗಳನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲು ಸೂಚಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.