ಬೆಂಗಳೂರು: ಕೊಳೆಗೇರಿ ನಿವಾಸಿಗಳ ಜನಸಂಖ್ಯೆಗೆ ಅನುಗುಣವಾಗಿ ಕೊಳಚೆ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ₹ 5 ಸಾವಿರ ಕೋಟಿ ಅನುದಾನವನ್ನು ಮುಂಬರುವ ಬಜೆಟ್‌ನಲ್ಲಿ ಮೀಸಲಿಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಾವಿತ್ರಿ ಬಾಯಿ ಫುಲೆ ಮಹಿಳಾ ಸಂಘಟನೆ ಹಾಗೂ ಸ್ಲಂ ಜನಾಂದೋಲನ ಕರ್ನಾಟಕ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.
ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಸೇರಿದ್ದ ನೂರಾರು ಜನರು, ಕೊಳೆಗೇರಿಗಳಲ್ಲಿ ವಸತಿ, ಕುಡಿಯುವ ನೀರು, ರಸ್ತೆ, ಚರಂಡಿ, ಬೀದಿ ದೀಪ, ಶೌಚಾಲಯ ವ್ಯವಸ್ಥೆ ಸೇರಿದಂತೆ ಮೂಲಸೌಕರ್ಯ ಕಲ್ಪಿಸದಿರುವುದಕ್ಕೆ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಖಾಸಗಿ ಮಾಲೀಕತ್ವದ ಕೊಳಚೆ ಪ್ರದೇಶಗಳ ಘೋಷಣೆಗೆ ತೊಡಕಾಗಿರುವ ವಸತಿ ಇಲಾಖೆ ಸುತ್ತೋಲೆಯನ್ನು ಹಿಂಪಡೆದು ಭೂಸ್ವಾಧೀನಕ್ಕೆ ಹಣ ಒದಗಿಸಬೇಕು. ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಸುವರ್ಣ ಸಂಭ್ರಮದ ನೆನಪಿಗಾಗಿ ಮಂಡಳಿಯ ಕಾಯ್ದೆಗೆ ತಿದ್ದುಪಡಿ ತರಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.
ಕೊಳೆಗೇರಿ ನಿವಾಸಿಗಳ ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣಕ್ಕಾಗಿ ಪ್ರತ್ಯೇಕ ಸಚಿವಾಲಯ ಆರಂಭಿಸಬೇಕು. ಜನರ ಜೀವನೋಪಾಯಕ್ಕಾಗಿ ನಗರ ಉದ್ಯೋಗ ಖಾತ್ರಿ ಯೋಜನೆ ಜಾರಿಗೊಳಿಸಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಇತರೆ ವಂಚಿತ ಸಮುದಾಯಗಳಿಗೆ ವಸತಿ ಸೌಲಭ್ಯ ಕಲ್ಪಿಸಲು 2017–18ರ ಬಜೆಟ್ ಘೋಷಣೆಯಂತೆ ನಗರ ಭೂ ಬ್ಯಾಂಕ್ ಯೋಜನೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
ರಾಜ್ಯದ ಅರ್ಧದಷ್ಟು ಕೊಳೆಗೇರಿಗಳು ಬೆಂಗಳೂರು ನಗರದಲ್ಲಿದ್ದು, ಇಲ್ಲಿನ ನಿವಾಸಿಗಳ ಪುನರ್ವಸತಿಗಾಗಿ ಭೂ ಮಂಜೂರಾತಿ ನೀಡಲು ಜಿಲ್ಲಾಧಿಕಾರಿಗೆ ಸೂಚಿಸಬೇಕು ಎಂದು ಮನವಿ ಮಾಡಿದರು.
ಸಾವಿತ್ರಿ ಬಾಯಿ ಫುಲೆ ಮಹಿಳಾ ಸಂಘಟನೆ ಸಂಚಾಲಕಿ ಚಂದ್ರಮ್ಮ, ಸ್ಲಂ ಜನಾಂದೋಲನ ಕರ್ನಾಟಕದ ಸಂಚಾಲಕ ಎ. ನರಸಿಂಹಮೂರ್ತಿ ಅವರು ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಪ್ರಸಾದ್ ಅಬ್ಬಯ್ಯ ಮತ್ತು ಆಯುಕ್ತ ಅಶೋಕ್ ಅವರಿಗೆ ಮನವಿ ಸಲ್ಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.