ಬೆಂಗಳೂರು: ರಾಜ್ಯದಲ್ಲಿಯೂ ದ್ವಿಭಾಷಾ ಶಿಕ್ಷಣ ನೀತಿಯನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ (ಕರವೇ) ಸದಸ್ಯರು ಸ್ವಾತಂತ್ರ್ಯ ಉದ್ಯಾನದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.
ರಾಜ್ಯದ ಎಲ್ಲ ಶಾಲೆಗಳಲ್ಲಿ ಕನ್ನಡ ಮತ್ತು ಇಂಗ್ಲಿಷ್ ಭಾಷೆ ಕಡ್ಡಾಯಗೊಳಿಸಿ, ದ್ವಿಭಾಷಾ ನೀತಿಯನ್ನು ಜಾರಿಗೊಳಿಸಬೇಕು. ರಾಜ್ಯ ಮತ್ತು ಕೇಂದ್ರೀಯ ಶಿಕ್ಷಣ ವ್ಯವಸ್ಥೆಯ ಸಿಬಿಎಸ್‌ಇ, ಐಸಿಎಸ್‌ಇ ಶಾಲೆಗಳಿಗೆ ಏಕರೂಪದ ದ್ವಿಭಾಷಾ ನೀತಿ ಅನುಷ್ಠಾನಗೊಳಿಸಿ, ಇಲ್ಲಿ ಕನ್ನಡ ಪ್ರಥಮ ಭಾಷೆಯಾಗಿ ಕಡ್ಡಾಯಗೊಳಿಸಬೇಕು. ಕನ್ನಡ ಮಾಧ್ಯಮ ಶಾಲೆಗಳನ್ನು ಬಲಪಡಿಸಿ, ಉತ್ತಮ ಗುಣಮಟ್ಟದ ಇಂಗ್ಲಿಷ್ ಶಿಕ್ಷಣ ನೀಡಬೇಕು’ ಎಂದು ಪ್ರತಿಭಟನಕಾರರು ಆಗ್ರಹಿಸಿದರು.
ಕರವೇ ರಾಜ್ಯ ಘಟಕದ ಅಧ್ಯಕ್ಷ ಟಿ.ಎ. ನಾರಾಯಣಗೌಡ ಮಾತನಾಡಿ, ‘ತ್ರಿಭಾಷಾ ನೀತಿಯಿಂದ ದಕ್ಷಿಣ ಭಾರತದ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಅನುಕೂಲವಾಗುತ್ತಿಲ್ಲ. ಇದು ಕೇಂದ್ರ ಸರ್ಕಾರದ ಹಿಂದಿ ಹೇರಿಕೆಯ ಒಂದು ಭಾಗವಾಗಿದೆ. ತ್ರಿಭಾಷಾ ನೀತಿಯಿಂದಾಗಿ ನಮ್ಮ ಮಕ್ಕಳು ಹೆಚ್ಚುವರಿಯಾಗಿ ಹಿಂದಿ ಭಾಷೆಯನ್ನು ಕಲಿಯಬೇಕಾಗಿದೆ. ಉತ್ತರ ಪ್ರದೇಶ ಮತ್ತು ಬಿಹಾರದಂತಹ ರಾಜ್ಯಗಳು ದ್ವಿಭಾಷಾ ನೀತಿ ಅನುಸರಿಸುತ್ತಿವೆ. ನಮ್ಮದಲ್ಲದ ಭಾಷೆ ಯಾಕೆ ಕಡ್ಡಾಯವಾಗಿ ಕಲಿಯಬೇಕು? ಯಾರದ್ದೋ ಹುನ್ನಾರಕ್ಕೆ ನಾವೇಕೆ ಬಲಿಯಾಗಬೇಕು’ ಎಂದು ಪ್ರಶ್ನಿಸಿದರು.
‘ತಮಿಳುನಾಡು 1968ರಲ್ಲೇ ತ್ರಿಭಾಷಾ ನೀತಿ ತಿರಸ್ಕರಿಸಿ, ದ್ವಿಭಾಷಾ ನೀತಿ ಅಳವಡಿಸಿಕೊಂಡಿದೆ. ಬಿಜೆಪಿ ನೇತೃತ್ವದ ಸರ್ಕಾರ ಇರುವ ಮಹಾರಾಷ್ಟ್ರ ಕೂಡ ದ್ವಿಭಾಷಾ ನೀತಿ ಜಾರಿಗೆ ಮುಂದಾಗಿದೆ. ಈ ಮಾದರಿಯಲ್ಲಿ ನಮ್ಮ ರಾಜ್ಯದಲ್ಲೂ ಕನ್ನಡ ಮತ್ತು ಇಂಗ್ಲಿಷ್ ಭಾಷೆಯನ್ನು ಒಳಗೊಂಡ ದ್ವಿಭಾಷಾ ನೀತಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.
‘2024–25ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 1.24 ಲಕ್ಷ ವಿದ್ಯಾರ್ಥಿಗಳು ಹಿಂದಿ ವಿಷಯದಲ್ಲಿ ಅನುತ್ತೀರ್ಣರಾಗಿದ್ದಾರೆ’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.