
ಸಮಾರಂಭದಲ್ಲಿ 75 ವರ್ಷ ಮೇಲ್ಪಟ್ಟ ನಿವೃತ್ತ ನೌಕರರನ್ನು ಅಭಿನಂದಿಸಲಾಯಿತು. ಚಿರಂಜೀವ್ ಸಿಂಘ್, ಸಿ.ಎಸ್. ಷಡಾಕ್ಷರಿ, ಎಲ್. ಬೈರಪ್ಪ, ಶಾಹಿನ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ
ಅಬ್ದುಲ್ ಖದೀರ್, ರಾಜ್ಯ ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಕೆ.ಬಿ. ಬೆಟ್ಟೇಗೌಡ ಉಪಸ್ಥಿತರಿದ್ದರು
ಪ್ರಜಾವಾಣಿ ಚಿತ್ರ
ಬೆಂಗಳೂರು: ‘ಸರ್ಕಾರದ ಭಾಗವಾಗಿ ಕೆಲಸ ಮಾಡಿದ ನಿವೃತ್ತ ನೌಕರರ ಬಗ್ಗೆಯೂ ಕಾಳಜಿ ತೋರಿಸಿ, ಅವರಿಗೂ ನಗದು ರಹಿತ ಆರೋಗ್ಯ ಸೇವೆ ಒದಗಿಸುವ ಯೋಜನೆಯನ್ನು ವಿಸ್ತರಿಸಬೇಕು’ ಎಂದು ನಿವೃತ್ತ ಐಎಎಸ್ ಅಧಿಕಾರಿ ಚಿರಂಜೀವ್ ಸಿಂಘ್ ಅವರು ಆಗ್ರಹಿಸಿದರು.
ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘ ನಗರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ನಿವೃತ್ತ ನೌಕರರ ಕುರಿತ ವಿಚಾರಸಂಕಿರಣ ಹಾಗೂ ಅಭಿನಂದನಾ ಸಮಾರಂಭ ಉದ್ಘಾಟಿಸಿ, ಮಾತನಾಡಿದರು.
‘ಅನೇಕ ಗ್ಯಾರಂಟಿ ನೀಡಿರುವ ರಾಜ್ಯ ಸರ್ಕಾರಕ್ಕೆ, ನಿವೃತ್ತ ಸರ್ಕಾರಿ ನೌಕರರಿಗೆ ನಗದುರಹಿತ ಆರೋಗ್ಯ ಸೇವೆ ಒದಗಿಸುವ ಯೋಜನೆ ಜಾರಿಗೊಳಿಸುವುದು ಕಷ್ಟವಲ್ಲ. ಆದ್ದರಿಂದ ಸರ್ಕಾರಿ ನೌಕರರಿಗೆ ಜಾರಿಗೊಳಿಸಿರುವ ‘ಆರೋಗ್ಯ ಸಂಜೀವಿನಿ’ ಯೋಜನೆಯನ್ನು ನಿವೃತ್ತ ನೌಕರರಿಗೂ ವಿಸ್ತರಿಸಬೇಕು’ ಎಂದು ಹೇಳಿದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ, ‘ನಗದುರಹಿತ ಆರೋಗ್ಯ ಸೇವೆ ಒದಗಿಸುವ ಯೋಜನೆಯನ್ನು ನಿವೃತ್ತ ಸರ್ಕಾರಿ ನೌಕರರಿಗೂ ವಿಸ್ತರಿಸುವಂತೆ ಸರ್ಕಾರದ ಮನವೊಲಿಸಲಾಗಿದೆ. ಬಜೆಟ್‌ನಲ್ಲಿ ಘೋಷಿಸುವ ಸಾಧ್ಯತೆಯಿದೆ’ ಎಂದರು. ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಎಲ್. ಬೈರಪ್ಪ, ‘ನಿವೃತ್ತರ ಸಮಸ್ಯೆಗಳಿಗೆ ಸ್ಪಂದಿಸಬೇಕು. ನಗದುರಹಿತ ಆರೋಗ್ಯ ಸೇವೆ ಒದಗಿಸುವ ‘ಆರೋಗ್ಯ ಸಂಜೀವಿನಿ’ ಯೋಜನೆಯನ್ನು ವಿಸ್ತರಿಸಬೇಕು. ಅನೇಕ ಕಾಯಿಲೆಗಳಿಂದ ಬಳಲುತ್ತಿರುವ ನಿವೃತ್ತರ ನೆರವಿಗೆ ಸರ್ಕಾರ ಬರಬೇಕು’ ಎಂದು ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.