ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ನಡೆದ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಪಿಎಸ್‌ಐ) ನೇಮಕಾತಿ ಪರೀಕ್ಷೆಯಲ್ಲಿ ಆಯ್ಕೆಯಾಗಿರುವ 402 ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಪತ್ರ ನೀಡಬೇಕು ಎಂದು ಆಗ್ರಹಿಸಿ ರಾಜ್ಯ ವಿದ್ಯಾರ್ಥಿಗಳ ಅಸೋಸಿಯೇಷನ್ ವತಿಯಿಂದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಯಿತು.
ಡಿಸೆಂಬರ್ 26ರಂದು ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆ, ದೈಹಿಕ ತಪಾಸಣೆ, ಸಿಂಧುತ್ವ ಪ್ರಮಾಣಪತ್ರ ಸೇರಿದಂತೆ ನೇಮಕಾತಿ ಪ್ರಕ್ರಿಯೆಗೆ ಬೇಕಾಗುವ ಎಲ್ಲಾ ಕಾರ್ಯಗಳು ಪೂರ್ಣಗೊಂಡಿವೆ. ಆದರೆ, ಸರ್ಕಾರ ನೇಮಕಾತಿ ಆದೇಶ ಪತ್ರ ನೀಡಲು ವಿಳಂಬ ಮಾಡುತ್ತಿದೆ ಎಂದು ಪ್ರತಿಭಟನಕಾರರು ಆರೋಪಿಸಿದರು.
ರಾಜ್ಯ ವಿದ್ಯಾರ್ಥಿಗಳ ಅಸೋಸಿಯೇಷನ್ ಅಧ್ಯಕ್ಷ ಕಾಂತ್‌ಕುಮಾರ್ ಮಾತನಾಡಿ, ‘ಸಚಿವರು ಹಾಗೂ ಅಧಿಕಾರಿಗಳನ್ನು ಭೇಟಿ ಮಾಡಿ ನೂರಾರು ಮನವಿಪತ್ರ ಸಲ್ಲಿಸಿದರೂ ಸ್ಪಂದನ ಇಲ್ಲ. ಕೇವಲ ಭರವಸೆ ನೀಡಿ ಕಳುಹಿಸುತ್ತಿದ್ದಾರೆ. ಈ ರೀತಿಯ ಪ್ರತ್ಯುತ್ತರಗಳಿಂದ ಅಭ್ಯರ್ಥಿಗಳು ದಿಕ್ಕು ತೋಚದ ಸ್ಥಿತಿಗೆ ತಲುಪಿದ್ದಾರೆ’ ಎಂದರು.
‘ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಆಯ್ಕೆಯಾಗುವುದು ಸಾಧನೆಯಾದರೆ, ನೇಮಕಾತಿ ಆದೇಶ ಪತ್ರಕ್ಕೆ ಕಾಯುವ ಸ್ಥಿತಿ ನಿರ್ಮಾಣವಾಗಿದೆ. ಸರ್ಕಾರ ತಕ್ಷಣ ನೇಮಕಾತಿ ಆದೇಶ ನೀಡಬೇಕು’ ಎಂದು ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.