ADVERTISEMENT

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ; ಆಶಾ ಕಾರ್ಯಕರ್ತೆಯರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2021, 23:06 IST
Last Updated 24 ಸೆಪ್ಟೆಂಬರ್ 2021, 23:06 IST
ಆಶಾ ಕಾರ್ಯಕರ್ತೆಯರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು – ಪ್ರಜಾವಾಣಿ ಚಿತ್ರ
ಆಶಾ ಕಾರ್ಯಕರ್ತೆಯರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು – ಪ್ರಜಾವಾಣಿ ಚಿತ್ರ   

ಬೆಂಗಳೂರು: ‘ಕನಿಷ್ಠ ವೇತನ ನಿಗದಿಪಡಿಸಿ, ಸರ್ಕಾರಿ ನೌಕರರ ಮಾನ್ಯತೆ ನೀಡಬೇಕು’ ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಹಾಗೂ ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (ಎಐಯುಟಿಯುಸಿ) ಸಹಯೋಗದಲ್ಲಿ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ರಾಜ್ಯದ ಹಲವು ಜಿಲ್ಲೆಗಳ ಆಶಾ ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

‘ಕೋವಿಡ್ ಕಾಲದಲ್ಲಿ ಜೀವವನ್ನು ಪಣಕ್ಕಿಟ್ಟು ಕೆಲಸ ಮಾಡುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಸಾಮಾಜಿಕ ಭದ್ರತೆ ಒದಗಿಸಬೇಕು. ಕನಿಷ್ಠ ವೇತನ ನಿಗದಿಪಡಿಸಿ, ಸರ್ಕಾರಿ ನೌಕರರ ಮಾನ್ಯತೆ ನೀಡಬೇಕು’ ಎಂದು ಪ್ರತಿಭಟನಕಾರರು ಒತ್ತಾಯಿಸಿದರು.

ADVERTISEMENT

ಸಂಘದ ರಾಜ್ಯ ಘಟಕದ ಕಾರ್ಯದರ್ಶಿ ಡಿ. ನಾಗಲಕ್ಷ್ಮಿ, ‘ಕೋವಿಡ್ ಕಾಲದಲ್ಲಿ ಹಲವು ಆಶಾ ಕಾರ್ಯಕರ್ತೆಯರು ಹಾಗೂ ಅವರ ಕುಟುಂಬಕ್ಕೆ ಸೋಂಕು ತಗುಲಿದೆ. ಅವರಿಗೆಲ್ಲ ಚಿಕಿತ್ಸೆ ಸಿಗುವುದೇ ದುಸ್ತರವಾಯಿತು. ಕೆಲವರು ಸೂಕ್ತ ಚಿಕಿತ್ಸೆ ಸಿಗದೇ ಮೃತಪಟ್ಟರು. ಅಂಥವರ ಕುಟುಂಬಗಳು ಇಂದು ಬೀದಿಗೆ ಬಿದ್ದಿವೆ. ಮೃತರ ಕುಟುಂಬಗಳಿಗೆ ಸರ್ಕಾರ ಘೋಷಿಸಿ‌ದ್ಧ ₹ 50 ಲಕ್ಷ ಇದುವರೆಗೂ ಬಂದಿಲ್ಲ’ ಎಂದರು.

ಎಐಯುಟಿಯುಸಿ ಟಿ.ಸಿ. ರಮಾ, ‘ಆಶಾ ಕಾರ್ಯಕರ್ತೆಯರಿಗೆ ಸರ್ಕಾರ ಮನ್ನಣೆ ನೀಡಬೇಕು. ಮೂಲ ಸೇವೆಗಳನ್ನು ಬಲಪಡಿಸಲು ಸರ್ಕಾರ ಗಮನ ಹರಿಸಬೇಕು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.