ADVERTISEMENT

ಸೊಳ್ಳೆ ನಿಯಂತ್ರಣ: ಕಾರ್ಯಕರ್ತರಿಗೆ ಸನ್ಮಾನ

ರಾಷ್ಟ್ರೀಯ ಡೆಂಗಿ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 16 ಮೇ 2022, 17:30 IST
Last Updated 16 ಮೇ 2022, 17:30 IST
ಡೆಂಗಿ ನಿಯಂತ್ರಣ ಜಾಥಾವನ್ನು ಡಾ.ಕೆ.ವಿ.ತ್ರಿಲೋಕ ಚಂದ್ರ ಹಾಗೂ ಡಿ.ರಂದೀಪ್‌ ಉದ್ಘಾಟಿಸಿದರು
ಡೆಂಗಿ ನಿಯಂತ್ರಣ ಜಾಥಾವನ್ನು ಡಾ.ಕೆ.ವಿ.ತ್ರಿಲೋಕ ಚಂದ್ರ ಹಾಗೂ ಡಿ.ರಂದೀಪ್‌ ಉದ್ಘಾಟಿಸಿದರು   

ಬೆಂಗಳೂರು: ನಗರದಲ್ಲಿ ಸೊಳ್ಳೆಗಳ ಸಂತಾನೋತ್ಪತ್ತಿ ತಾಣಗಳ ನಿರ್ಮೂಲನೆ ಕಾರ್ಯದಲ್ಲಿ ಗಮನಾರ್ಹ ಸಾಧನೆ ಮಾಡಿದ ಮೂರು ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಇಬ್ಬರು ಆರೋಗ್ಯ ಕಾರ್ಯಕರ್ತರು ಹಾಗೂ 5 ಖಾಸಗಿ ಸಂಸ್ಥೆ, ಆಸ್ಪತ್ರೆ ಹಾಗೂ ಪ್ರಯೋಗಾಲಯಗಳಿಗೆ ಬಿಬಿಎಂಪಿ ವತಿಯಿಂದ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ರಾಷ್ಟ್ರೀಯ ಡೆಂಗಿ ದಿನಾಚರಣೆ ಅಂಗವಾಗಿ ಬಿಬಿಎಂಪಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ‘ರಾಷ್ಟ್ರೀಯ ಡೆಂಗಿ ದಿನಾಚರಣೆ’ ಕಾರ್ಯಕ್ರಮದಲ್ಲಿ ಇಲಾಖೆಯ ಆಯುಕ್ತ ಡಿ.ರಂದೀಪ್ ಹಾಗೂ ಪಾಲಿಕೆ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ಡಾ.ಕೆ.ವಿ.ತ್ರಿಲೋಕಚಂದ್ರ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಬೆಂಗಳೂರು ನಗರ ಪ್ರದೇಶ ಜನರಿಗೆ ಡೆಂಗಿ ಸಾಂಕ್ರಾಮಿಕ ರೋಗದ ಹರಡುವಿಕೆ ಹಾಗೂ ನಿಯಂತ್ರಣ ಬಗ್ಗೆ ಅರಿವು ಮೂಡಿಸಲು ಎಂ.ಜಿ.ರಸ್ತೆಯ ಗಾಂಧಿ ಉದ್ಯಾನದಿಂದ ಪಾಲಿಕೆಯ ಕೇಂದ್ರ ಕಚೇರಿ ಆವರಣದವರೆಗೆ ಜಾಥಾ ನಡೆಯಿತು. ಪಾಲಿಕೆಯ ಅಧಿಕಾರಿಗಳು, ವೈದ್ಯರು, ಕಿರಿಯ ಆರೋಗ್ಯ ಸಹಾಯಕಿಯರು, ಆಶಾ ಕಾರ್ಯಕರ್ತೆಯರು ಮತ್ತು ಸ್ಥಳೀಯ ಸ್ವಯಂ ಸೇವಾ ಸಂಸ್ಥೆ ಪದಾಧಿಕಾರಿಗಳು ಸೇರಿದಂತೆ 800ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು.

ADVERTISEMENT

ಕಾರ್ಯಕ್ರಮದಲ್ಲಿ ಭಾರತೀಯ ಸರ್ಕಾರ ಹಿರಿಯ ಪ್ರಾಂತೀಯ ನಿರ್ದೇಶಕ ಡಾ.ರವಿಕುಮಾರ್.ಕೆ, ಆರೋಗ್ಯ ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶಕರಾದ ಡಾ. ಎಂ.ಇಂದುಮತಿ, ಮುಖ್ಯ ಆರೋಗ್ಯಾಧಿಕಾರಿ ಡಾ. ಬಾಲಸುಂದರ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.