ಪ್ರಾತಿನಿಧಿಕ ಚಿತ್ರ
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿ ವ್ಯಾಪ್ತಿಯಲ್ಲಿ ಕೃಷಿ ಜಮೀನು ಸ್ವಾಧೀನಕ್ಕೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಹೊರಡಿಸಿರುವ ಅಂತಿಮ ಅಧಿಸೂಚನೆ ರದ್ದುಪಡಿಸುವಂತೆ ಆಗ್ರಹಿಸಿ ಜೂನ್ 25ರಂದು ದೇವನಹಳ್ಳಿ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ಸಂಯುಕ್ತ ಹೋರಾಟ ಕರ್ನಾಟಕ ತಿಳಿಸಿದೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಯುಕ್ತ ಹೋರಾಟ ಕರ್ನಾಟಕದ ಸಂಚಾಲಕ ಬಡಗಲಪುರ ನಾಗೇಂದ್ರ, ಕರ್ನಾಟಕ ಪ್ರಾಂತ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಟಿ. ಯಶವಂತ, ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್, ‘ಈ ಅಧಿಸೂಚನೆಯನ್ನು ಸಂಪೂರ್ಣವಾಗಿ ರದ್ದುಪಡಿಸುವಂತೆ ಆಗ್ರಹಿಸಿ, ದೇವನಹಳ್ಳಿ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲಾಗುವುದು. ಈ ಹೋರಾಟದಲ್ಲಿ ರೈತ, ಕಾರ್ಮಿಕ, ದಲಿತ, ಮಹಿಳಾ, ವಿದ್ಯಾರ್ಥಿ ಸಂಘಟನೆಗಳು ಪಾಲ್ಗೊಳ್ಳಲಿವೆ. ಸರ್ಕಾರಗಳಿಗೆ ಈ ಜಮೀನು ಕೇವಲ ಮಾರಾಟದ ಸರಕಷ್ಟೇ. ಆದರೆ ಇಲ್ಲಿನ ರೈತರಿಗೆ ಇದು ಬದುಕಾಗಿದೆ. ಯಾವುದೇ ಕಾರಣಕ್ಕೂ ನಾವು ಜಮೀನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ’ ಎಂದು ಹೇಳಿದರು.
‘ಚನ್ನರಾಯಪಟ್ಟಣ ಹೋಬಳಿಯ ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವಂತೆ 1,180 ದಿನಗಳಿಂದ 13 ಗ್ರಾಮಗಳ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಶೇಕಡ 80ರಷ್ಟು ರೈತರು ಲಿಖಿತವಾಗಿ ಅಸಮ್ಮತಿ ವ್ಯಕ್ತಪಡಿಸಿದ್ದಾರೆ. ಆದರೂ ಕೆಐಎಡಿಬಿ ಬಲವಂತದಿಂದ ಭೂಸ್ವಾಧೀನ ಮಾಡುತ್ತಿದ್ದು, ಭೂಸ್ವಾಧೀನ ಕಾಯ್ದೆ–2013ರ ಸ್ಪಷ್ಟ ಉಲ್ಲಂಘನೆ ಮಾಡುತ್ತಿದೆ’ ಎಂದು ದೂರಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.