
ಆಸ್ಪತ್ರೆ –(ಪ್ರಾತಿನಿಧಿಕ ಚಿತ್ರ)
ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮದಲ್ಲಿ ನಷ್ಟಕ್ಕೆ ಒಳಗಾಗಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದ ಪ್ರಕರಣದಲ್ಲಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಇಬ್ಬರ ಪೈಕಿ ಮಹಿಳೆ ಸ್ಥಿತಿ ಗಂಭೀರವಾಗಿದೆ.
ದೇವನಹಳ್ಳಿ ತಾಲ್ಲೂಕಿನ ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯ ಹೆಗ್ಗನಹಳ್ಳಿಯಲ್ಲಿ ಗುರುವಾರ ರಾತ್ರಿ ಘಟನೆ ನಡೆದಿತ್ತು.
ರಿಯಲ್ ಎಸ್ಟೇಟ್ ಉದ್ಯಮಿ ಕುಮಾರಪ್ಪ (60), ಅವರ ಪತ್ನಿ ರಮಾ (55), ಪುತ್ರರಾದ ಅರುಣ್ ಕುಮಾರ್ (30) ಹಾಗೂ ಅಕ್ಷಯ್ ಕುಮಾರ್ (25) ಆತ್ಮಹತ್ಯೆಗೆ ಯತ್ನಿಸಿದ್ದರು. ಕುಮಾರಪ್ಪ ಹಾಗೂ ಅರುಣ್ ಅವರು ಮೃತಪಟ್ಟಿದ್ದರು. ಅಸ್ವಸ್ಥರಾಗಿದ್ದ ರಮಾ ಹಾಗೂ ಅಕ್ಷಯ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ರಮಾ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿದಿದೆ. ಅಕ್ಷಯ್ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಅವರು ಚೇತರಿಸಿಕೊಂಡ ಬಳಿಕ ಮಾಹಿತಿ ಪಡೆದುಕೊಳ್ಳಲಾಗುವುದು. ಆಗ ಕಾರಣ ಗೊತ್ತಾಗಲಿದೆ ಎಂದು ಪೊಲೀಸರು ಹೇಳಿದರು.
ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಸಿ ಸಂಬಂಧಿಕರಿಗೆ ಹಸ್ತಾಂತರ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು
ಸಾಲಬಾಧೆಯೇ ಕಾರಣ?: ‘ಕುಮಾರಪ್ಪ ಅವರು ರಿಯಲ್ ಎಸ್ಟೇಟ್ ಉದ್ಯಮ ಸೇರಿ ಬೇರೆ ಬೇರೆ ಕಾರಣಕ್ಕೆ ವಿಪರೀತ ಸಾಲ ಮಾಡಿದ್ದರು. ಸಾಲ ನೀಡಿದವರು ನಿತ್ಯ ಮನೆಯ ಬಳಿ ಬಂದು ಹಣ ನೀಡುವಂತೆ ಒತ್ತಡ ಹೇರುತ್ತಿದ್ದರು. ಇದೇ ಕಾರಣಕ್ಕೆ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದರು. ಅದರಲ್ಲಿ ಇಬ್ಬರು ಮೃತಪಟ್ಟಿದ್ದರು’ ಎಂದು ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.