ಯಲಹಂಕ: ‘ಕಾರ್ಮಿಕರು ಈ ರಾಷ್ಟ್ರದ ಸಂಪತ್ತು. ಅವರ ಶ್ರಮದಿಂದಲೇ ಈ ದೇಶದ ಅಭಿವೃದ್ಧಿಯಾಗುತ್ತಿದೆ. ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ ನೀತಿಗಳನ್ನು ಅನುಸರಿಸಿ, ಸವಲತ್ತು ನೀಡದೆ ಅನ್ಯಾಯ ಎಸಗುತ್ತಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಆರೋಪಿಸಿದರು.
ಭಾರತೀಯ ರಾಷ್ಟ್ರೀಯ ಕಟ್ಟಡ ನಿರ್ಮಾಣ, ಅರಣ್ಯ ಮತ್ತು ಮರಗೆಲಸ ಕಾರ್ಮಿಕರ ಒಕ್ಕೂಟದ ಆಶ್ರಯದಲ್ಲಿ ಉಪನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಕಾರ್ಮಿಕರ ದಿನಾಚರಣೆ ಸಮಾರಂಭದಲ್ಲಿ ಅವರು ಮಾತನಾಡಿದರು.
‘ಈ ದೇಶ ಅಭಿವೃದ್ಧಿಯಾಗಬೇಕಾದರೆ ಕಾರ್ಮಿಕರ ಅಭಿವೃದ್ಧಿ ಅತ್ಯಗತ್ಯ. ಈ ನಿಟ್ಟಿನಲ್ಲಿ ರಾಜ್ಯಸರ್ಕಾರ ಕಾರ್ಮಿಕರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸುತ್ತಿದೆ’ ಎಂದರು.
ಒಕ್ಕೂಟದ ರಾಷ್ಟ್ರೀಯ ಅಧ್ಯಕ್ಷ ರಾಮಚಂದ್ರ ಕುಂಟಿಯ ಮಾತನಾಡಿ, ‘ದೇಶದ ಜನಸಂಖ್ಯೆಯ ಶೇ 40ರಷ್ಟು ಕಾರ್ಮಿಕರಿದ್ದು, ಅವರ ಸಮಸ್ಯೆಗಳಿಗೆ ಸ್ಪಂದಿಸದೆ ಅನ್ಯಾಯವೆಸಗುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಒಕ್ಕೂಟದ ವತಿಯಿಂದ ರಾಷ್ಟ್ರವ್ಯಾಪಿ ಆಂದೋಲನ ಕೈಗೊಳ್ಳಲು ನಿರ್ಧರಿಸಲಾಗಿದೆ’ ಎಂದು ತಿಳಿಸಿದರು.
ಒಕ್ಕೂಟದ ರಾಜ್ಯಘಟಕದ ಅಧ್ಯಕ್ಷ ಬಿ.ಆರ್.ದಿನೇಶ್, ಸಂಘಟನಾ ಕಾರ್ಯದರ್ಶಿ ಜ್ಯೋತಿಪುರ ಚಂದ್ರು, ಕಾಂಗ್ರೆಸ್ ಮುಖಂಡ ಎಂ.ಎನ್.ಗೋಪಾಲಕೃಷ್ಣ, ಐಎನ್‌ಟಿಯುಸಿ ಪ್ರಧಾನ ಕಾರ್ಯದರ್ಶಿ ವೆಂಕಟೇಶ್, ಕಾರ್ಮಿಕ ಸಂಘಟನೆಗಳ ಮುಖಂಡರಾದ ಶಿವಣ್ಣ, ವಿಜಯ್ ನಾಯಕ್, ಸಾಯಿ ಸತೀಶ್ ತೋಟಯ್ಯ, ಸೌಕತ್ ಆಲಿ, ಎ.ಜಾಕೀರ್ ಹುಸೇನ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.