ADVERTISEMENT

ಧರ್ಮರಾಯ ದೇವಳದ ಆಸ್ತಿ ಒತ್ತುವರಿ

ನಾಲ್ವರು ಇಒಗಳ ಮೇಲೆ ಶಿಸ್ತುಕ್ರಮಕ್ಕೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೂಚನೆ

Published 26 ಜುಲೈ 2022, 21:52 IST
Last Updated 26 ಜುಲೈ 2022, 21:52 IST
ಧರ್ಮರಾಯಸ್ವಾಮಿ ದೇವಾಲಯ
ಧರ್ಮರಾಯಸ್ವಾಮಿ ದೇವಾಲಯ   

ಬೆಂಗಳೂರು: ಧರ್ಮರಾಯಸ್ವಾಮಿ ದೇವಾಲಯಕ್ಕೆ ಸೇರಿದ ಹಲಸೂರು ಪೇಟೆ ನೀಲಸಂದ್ರದಲ್ಲಿರುವ ಆಸ್ತಿಗಳ ರಕ್ಷಣೆ ಹಾಗೂ ಒತ್ತುವರಿ ತೆರವಿನ ಪ್ರಕರಣಗಳಲ್ಲಿ ಕ್ರಮ ಕೈಗೊಳ್ಳದ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲು ಆದೇಶಿಸಲಾಗಿದೆ.

ಧರ್ಮರಾಯಸ್ವಾಮಿ ದೇವಾಲಯಕ್ಕೆ 6 ವರ್ಷಗಳಲ್ಲಿ ಕಾರ್ಯನಿರ್ವಾಹಕ ಅಧಿಕಾರಿಗಳಾಗಿದ್ದ ಎಂ. ನಾರಾಯಣಸ್ವಾಮಿ, ಟಿ. ಸೆಲ್ವಮಣಿ, ಮಂಜುಳ ಟಿ.ಎನ್‌. ಹಾಗೂ ಶ್ರೀನಿವಾಸಮೂರ್ತಿ ಅವರು ಒತ್ತುವರಿ ತೆರವುಗೊಳಿಸಲು ಹಾಗೂ ಸಂರಕ್ಷಿಸಲು ಯಾವುದೇ ಕ್ರಮ ಕೈಗೊಂಡಿಲ್ಲ. ಇದರಿಂದ ಒತ್ತುವರಿಗೆ ಸಹಕರಿಸಿದಂತಾಗಿದೆ. ನ್ಯಾಯಾಲಯದ ಪ್ರಕರಣಗಳಲ್ಲಿ ಕೂಡ ಸಮಯಕ್ಕೆ ಸರಿಯಾಗಿ ಪ್ರಕರಣಗಳು ವಿಲೇ ಆಗಲು ಅಗತ್ಯ ಕ್ರಮ ಕೈಗೊಳ್ಳದೆ ಇರುವುದು ಕಂಡುಬಂದಿದೆ. ಆದ್ದರಿಂದ ಈ ಅಧಿಕಾರಿಗಳ ವಿರುದ್ಧ ಇಲಾಖೆಯ ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೂಚಿಸಿದ್ದಾರೆ.

ಬೆಂಗಳೂರು ಉತ್ತರ ತಾಲ್ಲೂಕು ನೀಲಸಂದ್ರ ಗ್ರಾಮದಲ್ಲಿರುವ ಮುಜರಾಯಿ ಇಲಾಖೆಯ ಅಧೀನದಲ್ಲಿರುವ ಧರ್ಮರಾಯಸ್ವಾಮಿ ದೇವಾಲಯಕ್ಕೆ ಸೇರಿದ ಸರ್ವೆ ನಂ. 79ರಲ್ಲಿರುವ ಆಸ್ತಿಗಳ ಸಂರಕ್ಷಣೆ ಬಗ್ಗೆ ಜನವರಿ 5ರಂದು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ನೇತೃತ್ವದಲ್ಲಿ ಸಭೆ ನಡೆಸಲಾಗಿತ್ತು. ಈ ಸಭೆಯ ನಡಾವಳಿಯನ್ನು ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಕಂದಾಯ ಇಲಾಖೆಗೆ ಕಳುಹಿಸಿದ್ದರು. ಆಸ್ತಿಗಳ ರಕ್ಷಣೆಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲು ಕಂದಾಯ ಇಲಾಖೆಯು ನಗರಾಭಿವೃದ್ಧಿ ಇಲಾಖೆಗೆ ಜುಲೈ 5ರಂದು ಟಿಪ್ಪಣೆ ಕಳುಹಿಸಿದ್ದಾರೆ.

ADVERTISEMENT

ಧರ್ಮರಾಯಸ್ವಾಮಿ ದೇವಾಲಯಕ್ಕೆ ಸೇರಿದ ಜಮೀನನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿ ಧಾರ್ಮಿಕ ದತ್ತಿ ಇಲಾಖೆಗೆ ಹಸ್ತಾಂತರಿಸಿದ ನಂತರವೂ ನೂರಾರು ಅನಧಿಕೃತ ಒತ್ತುವರಿಗಳಾಗಿದ್ದು, ಆರ್‌ಸಿಸಿ ಕಟ್ಟಡಗಳನ್ನು ನಿರ್ಮಿಸಲಾಗಿದೆ. ಇಲಾಖೆ ಅಧಿಕಾರಿಯ ಸಹಮತ ಇಲ್ಲದೆ ಹೀಗೆ ಆಗುವುದಿಲ್ಲ ಎಂದು ಸಭೆಯಲ್ಲಿ ಅಭಿಪ್ರಾಯಪಟ್ಟ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ, ಅಧಿಕಾರಿಗಳ ಮೇಲೆ ಶಿಸ್ತುಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.

ಕ್ರಮಕ್ಕೆ ಆಗ್ರಹ: ‘ಧರ್ಮರಾಯಸ್ವಾಮಿ ದೇವಾಲಯದ ಆಸ್ತಿ ಉಳಿಸಿ ಎಂದು ಹಲವು ವರ್ಷದಿಂದ ಹೋರಾಟ ನಡೆಸಲಾಗುತ್ತಿದೆ. ಆದರೆ ಸರ್ಕಾರ ಈ ಬಗ್ಗೆ ಇನ್ನೂ ಕ್ರಮ ಕೈಗೊಂಡಿಲ್ಲ. ದೂರು ನೀಡಿದಾಗ 15 ದಿನದಲ್ಲಿ ಕ್ರಮ ಆಗುತ್ತದೆ ಎಂದು ಸಚಿವರು ಹೇಳುತ್ತಾರೆ. ಇನ್ನೂ
ಯಾವುದೇ ಕ್ರಮ ಆಗಿಲ್ಲ. ಧಾರ್ಮಿಕ ದತ್ತಿ ಇಲಾಖೆ ಕೂಡಲೇ ಕ್ರಮ ಕೈಗೊಂಡು, ಒತ್ತುವರಿ ತೆರವು ಮಾಡಬೇಕು’ ಎಂದು ವಿಧಾನ ಪರಿಷತ್‌ ಸದಸ್ಯ ಪಿ.ಆರ್‌. ರಮೇಶ್‌ ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.