ಬೆಂಗಳೂರು: ಧರ್ಮಸ್ಥಳದ ನಿಗೂಢ ಸಾವುಗಳಿಗೆ ನ್ಯಾಯ ಒದಗಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಮಾನ ಮನಸ್ಕರ ವೇದಿಕೆಯ ಸದಸ್ಯರು ಸ್ವಾತಂತ್ರ್ಯ ಉದ್ಯಾನದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.
ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ರವಿಕೃಷ್ಣಾರೆಡ್ಡಿ ಮಾತನಾಡಿ, ‘ಧರ್ಮಸ್ಥಳ ವ್ಯಾಪ್ತಿಯಲ್ಲಿ ನಾಪತ್ತೆ ಆಗಿರುವ ಮಹಿಳೆಯರು, ವಿದ್ಯಾರ್ಥಿನಿಯರು, ಅಸ್ವಾಭಾವಿಕ ಸಾವು, ಕೊಲೆ ಹಾಗೂ ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ಸರಿಯಾಗಿ ತನಿಖೆ ನಡೆಸಬೇಕಿತ್ತು. 70 ವರ್ಷಗಳಲ್ಲಿ 150ಕ್ಕೂ ಹೆಚ್ಚು ಮಂದಿ ಅಪರಿಚಿತರು ನಾಪತ್ತೆಯಾಗಿದ್ದಾರೆ ಎಂಬ ಮಾಹಿತಿ ಇದೆ. ಪೊಲೀಸರು ಪ್ರಕರಣಗಳನ್ನು ದಾಖಲಿಸಿಕೊಂಡು, ತನಿಖೆ ನಡೆಸಿದ್ದರೆ ಆರೋಪಿಗಳನ್ನು ಪತ್ತೆ ಹಚ್ಚಬಹುದಿತ್ತು ಎಂದು ಹೇಳಿದರು.
‘ತಮ್ಮನ್ನು ಯಾರಾದರೂ ಪ್ರಶ್ನೆ ಮಾಡಿದರೆ ನೋಟಿಸ್ ನೀಡುವ ಕಾಯಿಲೆ ಧರ್ಮಸ್ಥಳದಲ್ಲಿ 1944ರಿಂದಲೂ ಇದೆ. ಕುವೆಂಪು ಅವರಿಗೆ ನೋಟಿಸ್ ನೀಡಲಾಗಿತ್ತು. ನೋಟಿಸ್ ನೀಡುವ ಪದ್ಧತಿ ಇದುವರೆಗೂ ಮುಂದುವರಿದಿದೆ’ ಎಂದು ದೂರಿದರು.
ಹೈಕೋರ್ಟ್ ವಕೀಲ ಎಸ್. ಬಾಲನ್, ಹೋರಾಟಗಾರರಾದ ಚೇತನ್ ಅಹಿಂಸಾ, ನರಸಿಂಹಮೂರ್ತಿ, ರಂಗನಾಥ್, ಎಚ್.ಎಂ. ವೆಂಕಟೇಶ್ ಹಾಗೂ ಕೆಆರ್‌ಎಸ್ ಪಕ್ಷದ ಕಾರ್ಯಕರ್ತರು, ವಿವಿಧ ಸಂಘಟನೆಗಳ ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.