ADVERTISEMENT

ಡಿ.ಜೆ.ಹಳ್ಳಿ: ಎನ್‌ಐಎ ತನಿಖೆ ಕೋರಿ ಪಿಐಎಲ್‌

​ಪ್ರಜಾವಾಣಿ ವಾರ್ತೆ
Published 26 ಆಗಸ್ಟ್ 2020, 4:35 IST
Last Updated 26 ಆಗಸ್ಟ್ 2020, 4:35 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ಡಿ.ಜೆ. ಹಳ್ಳಿ ಗಲಭೆ ಬಗ್ಗೆ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ರಾಷ್ಟ್ರೀಯ ತನಿಖಾ ದಳದಿಂದ (ಎನ್‌ಐಎ) ತನಿಖೆ ಮಾಡಿಸಬೇಕು ಎಂದು ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.

ಗಲಭೆ ಸಂಬಂಧಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸಿದಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರಿದ್ದ ವಿಭಾಗೀಯ ಪೀಠ,ಮುಂದಿನ ವಿಚಾರಣೆ ವೇಳೆತನಿಖಾ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತು.

‘ಕಾನೂನು ಸುವ್ಯವಸ್ಥೆ ಹಾಳು ಮಾಡಿ ಜನರನ್ನು ಭಯಭೀತಗೊಳಿಸುವ ಸಲುವಾಗಿ ನಡೆಸಿದ ಪೂರ್ವನಿಯೋಜಿತ ದಾಳಿ ಇದಾಗಿದೆ.ಕರ್ನಾಟಕ ಸಾಂಕ್ರಾಮಿಕ ರೋಗಗಳ ಸುಗ್ರೀವಾಜ್ಞೆಯನ್ನೂ ಗಲಭೆಕೋರರು ಉಲ್ಲಂಘಿಸಿದ್ದಾರೆ. ಹಿಂಸಾಚಾರದಲ್ಲಿ ಪೊಲೀಸರು ಸಂತ್ರಸ್ತರಾಗಿದ್ದು, ಎನ್‌ಐಎ ಅಥವಾ ಯಾವುದೇ ರಾಷ್ಟ್ರೀಯ ತನಿಖಾ ಸಂಸ್ಥೆಯಿಂದಲೇ ತನಿಖೆಯಾಗಬೇಕು’ ಎಂದು ಶೇಷಾದ್ರಿಪುರದ ನಿವಾಸಿ ಗಿರೀಶ್ ಭಾರದ್ವಾಜ್‌ ಅರ್ಜಿಯಲ್ಲಿ ಪ್ರತಿಪಾದಿಸಿದ್ದಾರೆ.

ADVERTISEMENT

‘ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಅವರಿಂದನ್ಯಾಯಾಂಗ ತನಿಖೆ ನಡೆಸಬೇಕು ಮತ್ತು ವಿಶೇಷ ತನಿಖಾ ತಂಡ ರಚಿಸಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕು. ಆರೋಪಿಗಳ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣಾ (ಕೋಕಾ) ಕಾಯ್ದೆ ಅಡಿ ಪ್ರಕರಣ ದಾಖಲಿಸಲು ತಿಳಿಸಬೇಕು’ ಎಂದು ಕೋರಿ ವಕೀಲ ಎನ್‌.ಪಿ. ಅಮೃತೇಶ್ ಅರ್ಜಿ ಸಲ್ಲಿಸಿದ್ದಾರೆ.

‘ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿ ಆಧರಿಸಿದಾಳಿಕೋರರಿಂದ ಹಾನಿ ನಷ್ಟ ವಸೂಲಿ ಮಾಡಲು ಕ್ಲೇಮ್ ಕಮಿಷನರ್ ನೇಮಿಸಿ ಆದೇಶ ಹೊರಡಿಸಬೇಕು’ ಎಂದು ಹೆಚ್ಚುವರಿ ಅಡ್ವೊಕೇಟ್ ಜನರಲ್ ಇದೇ ವೇಳೆ ಮನವಿ ಮಾಡಿದರು. ‘ಈ ಸಂಬಂಧ ಸುಪ್ರೀಂ ಕೋರ್ಟ್‌ ಆದೇಶ ಆಧರಿಸಿ ಪ್ರತ್ಯೇಕ ಆದೇಶ ಹೊರಡಿಸಲಾಗುವುದು’ ಎಂದು ಪೀಠ ಮೌಖಿಕವಾಗಿ ತಿಳಿಸಿತು.ವಿಚಾರಣೆಯನ್ನು ಆ.28ಕ್ಕೆ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.