ಡಿಸಿಎಂ ಡಿ.ಕೆ. ಶಿವಕುಮಾರ್ ಉದ್ಯಮಿ ಕಿರಣ್ ಮಜುಂದಾರ್ ಷಾ ಭೇಟಿ
ಚಿತ್ರ ಕೃಪೆ: DKShivakumar
ಬೆಂಗಳೂರು: ‘ನಗರದಲ್ಲಿ ಕೆಟ್ಟ ರಸ್ತೆಗಳಿವೆ, ತ್ಯಾಜ್ಯದ ಸಮಸ್ಯೆ ಇದೆ’ ಎಂದು ಬಯೊಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಷಾ ಅವರು ಬೆಂಗಳೂರಿನ ರಸ್ತೆ ಗುಂಡಿಗಳ ಬಗ್ಗೆ ಧ್ವನಿಯೆತ್ತಿದ್ದರು. ಇದರ ಬೆನ್ನಲ್ಲೆ ಕಿರಣ್ ಮಜುಂದಾರ್ ಷಾ ಅವರು ಸಿಎಂ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಡಿ.ಕೆ. ಶಿವಕುಮಾರ್ ಅವರು, ‘ಇಂದು ನನ್ನ ನಿವಾಸದಲ್ಲಿ ಉದ್ಯಮಿ ಮತ್ತು ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಂದಾರ್ ಷಾ ಅವರನ್ನು ಭೇಟಿಯಾಗಿದ್ದು ಸಂತೋಷವಾಯಿತು. ಬೆಂಗಳೂರಿನ ಬೆಳವಣಿಗೆ, ನಾವೀನ್ಯತೆ ಮತ್ತು ಕರ್ನಾಟಕದ ಬೆಳವಣಿಗೆಯ ಮುಂದಿನ ಹಾದಿಯ ಕುರಿತು ನಾವು ಚರ್ಚೆ ನಡೆಸಿದ್ದೇವೆ’ ಎಂದು ಬರೆದುಕೊಂಡಿದ್ದಾರೆ.
ಷಾ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೂ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಉಪಸ್ಥಿತರಿದ್ದರು.
ಈ ಹಿಂದೆ ಷಾ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಪ್ರಿಯಾಂಕ್ ಖರ್ಗೆ, ಬೆಂಗಳೂರಿನ ಯಾವ ಭಾಗವನ್ನು ಅವರು ನೋಡಿದ್ದಾರೆ ಎಂಬುದು ನಮಗೆ ಗೊತ್ತಿಲ್ಲ. ಕಾಮಗಾರಿ ನಡೆಯುತ್ತಿದೆ. ಕ್ಷಿಪ್ರ ವೇಗದಲ್ಲಿ ಕೆಲಸ ನಡೆಯುತ್ತಿದ್ದು, ಮೂಲಸೌಕರ್ಯ ಅಭಿವೃದ್ಧಿಗೆ ಏನು ಅಗತ್ಯವಿದೆಯೋ ಅದನ್ನು ನಾವು ಮಾಡುತ್ತಿದ್ದೇವೆ’ ಎಂದು ಹೇಳಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.