ಬೆಂಗಳೂರು: ತೀವ್ರ ಅನಾರೋಗ್ಯದ ಕಾರಣ ಕೆಂಗೇರಿಯ ಗ್ಲೆನೆಗಲ್ಸ್ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿರುವ ಸಾಹಿತಿ ದೊಡ್ಡರಂಗೇಗೌಡ ಅವರ ಸಂಪೂರ್ಣ ವೈದ್ಯಕೀಯ ವೆಚ್ಚವನ್ನು ಸರ್ಕಾರದಿಂದಲೇ ಭರಿಸುವುದಾಗಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.
ದೊಡ್ಡರಂಗೇಗೌಡ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೆ ಮಂಗಳವಾರ ಭೇಟಿ ನೀಡಿದ ಸಚಿವ ತಂಗಡಗಿ, ವೈದ್ಯರಿಂದ ಚಿಕಿತ್ಸೆಯ ಬಗ್ಗೆ ಮಾಹಿತಿ ಪಡೆದರು.
‘ಮುಖ್ಯಮಂತ್ರಿ ಅವರ ಆದೇಶದ ಅನುಸಾರ ದೊಡ್ಡರಂಗೇಗೌಡ ಅವರ ಸಂಪೂರ್ಣ ವೈದ್ಯಕೀಯ ವೆಚ್ಚವನ್ನು ಸರ್ಕಾರದಿಂದಲೇ ಭರಿಸಲಾಗುವುದು’ ಎಂದು ತಿಳಿಸಿದ ಸಚಿವರು, ‘ಅಗತ್ಯವಿರುವ ಎಲ್ಲ ವೈದ್ಯಕೀಯ ಸೌಲಭ್ಯವನ್ನು ಒದಗಿಸಬೇಕು’ ಎಂದು ವೈದ್ಯರಿಗೆ ಸೂಚಿಸಿದರು.
ಇದೇ ವೇಳೆ ಅವರ ಕುಟುಂಬದ ಸದಸ್ಯರನ್ನು ಭೇಟಿ ಮಾಡಿ ಧೈರ್ಯ ತುಂಬಿದ ಅವರು, ‘ದೊಡ್ಡರಂಗೇಗೌಡರು ಕನ್ನಡ ಸಾಂಸ್ಕೃತಿಕ ಲೋಕದ ಆಸ್ತಿ. ಅವರ ಬಗ್ಗೆ ಅಪಾರವಾದ ಕಾಳಜಿ ಇದೆ. ಸರ್ಕಾರದಿಂದ ಅವರಿಗೆ ಎಲ್ಲ ರೀತಿಯ ನೆರವು ನೀಡಲಾಗುವುದು’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.