
ಬೆಂಗಳೂರು: ‘ನಾಯಿ, ಹಾವು ಮತ್ತು ಇತರೆ ಪ್ರಾಣಿಗಳ ದಾಳಿ ಪ್ರಕರಣದಲ್ಲಿ ಮುಂಗಡ ಹಣಕ್ಕೆ ಒತ್ತಾಯಿಸದೆ ತಕ್ಷಣವೇ ಅಗತ್ಯ ಚಿಕಿತ್ಸೆ ಒದಗಿಸಬೇಕು’ ಎಂದು ಆರೋಗ್ಯ ಇಲಾಖೆಯು ಖಾಸಗಿ ಆಸ್ಪತ್ರೆಗಳಿಗೆ ಸೂಚಿಸಿದೆ.
ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಆರೋಗ್ಯ ಇಲಾಖೆಯು ಈ ಕುರಿತು ಸುತ್ತೋಲೆ ಹೊರಡಿಸಿದೆ.
2030ರ ವೇಳೆಗೆ ನಾಯಿ ಕಡಿತದಿಂದ ಬರುವ ‘ರೇಬಿಸ್’ ರೋಗವನ್ನು ನಿರ್ಮೂಲನೆ ಮಾಡುವ ಗುರಿ ಹೊಂದಲಾಗಿದೆ. ಈಗಾಗಲೇ ರೇಬಿಸ್ ಅನ್ನು ರಾಜ್ಯದಲ್ಲಿ ‘ಘೋಷಿತ ಕಾಯಿಲೆ’ಯ ವ್ಯಾಪ್ತಿಗೆ ತರಲಾಗಿದೆ. ಎಲ್ಲ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳು ಕಡ್ಡಾಯವಾಗಿ ರೇಬಿಸ್ ನಿರೋಧಕ ಲಸಿಕೆ ಮತ್ತು ‘ರೇಬಿಸ್ ಇಮ್ಯುನೊಗ್ಲೋಬ್ಯುಲಿನ್’ (ಆರ್‌ಐಜಿ) ಚುಚ್ಚುಮದ್ದಿನ ದಾಸ್ತಾನು ಹೊಂದಿರಬೇಕು. ನಾಯಿ ಕಡಿತಕ್ಕೆ ಒಳಗಾದವರಿಗೆ ಸಕಾಲಿಕ ಚಿಕಿತ್ಸೆಯೊಂದಿಗೆ ‘ರೇಬಿಸ್ ಇಮ್ಯುನೊಗ್ಲೋಬ್ಯುಲಿನ್’ ಚುಚ್ಚುಮದ್ದನ್ನು ಒದಗಿಸಬೇಕು ಎಂದು ತಿಳಿಸಿದೆ.
ನಾಯಿ ಅಥವಾ ಇತರ ಯಾವುದೇ ಪ್ರಾಣಿಯ ಕಡಿತದ ಪ್ರಕರಣಗಳು ವರದಿಯಾದಾಗ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಬೇಕು. ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಗಳು ತುರ್ತು ವೈದ್ಯಕೀಯ ಸೇವೆಗಳು ಮತ್ತು ಪ್ರಥಮ ಚಿಕಿತ್ಸೆಯನ್ನು ಉಚಿತವಾಗಿ ಒದಗಿಸಬೇಕು. ಒಂದುವೇಳೆ, ಆಸ್ಪತ್ರೆಯಲ್ಲಿ ಸೌಲಭ್ಯಗಳ ಕೊರತೆ ಇದ್ದಲ್ಲಿ ರೋಗಿಗೆ ಪ್ರಾಣಾಪಾಯವಾಗದಂತೆ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚುವರಿ ಚಿಕಿತ್ಸಾ ಸೌಲಭ್ಯವಿರುವ ಆಸ್ಪತ್ರೆಗೆ ರವಾನಿಸಬೇಕು ಎಂದು ಸೂಚಿಸಲಾಗಿದೆ.
ಶುಲ್ಕ ಮರುಪಾವತಿ:
ನಾಯಿ ಮತ್ತು ಹಾವು ಕಡಿತಕ್ಕೊಳಗಾದ ಸಂತ್ರಸ್ತರಿಗೆ ನೀಡಿದ ಚಿಕಿತ್ಸೆಗಾಗಿ ಆಸ್ಪತ್ರೆ ಶುಲ್ಕವನ್ನು ಸರ್ಕಾರ ಮರುಪಾವತಿ ಮಾಡುತ್ತದೆ. ಆಸ್ಪತ್ರೆಗಳು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (ಸಾಸ್ಟ್) ನಿಗದಿಪಡಿಸಿರುವ ಮೊತ್ತ ಪಡೆದು, ಚಿಕಿತ್ಸೆ ನೀಡಲು ನಿರಾಕರಿಸಿದರೆ ಅಂತಹ ಆಸ್ಪತ್ರೆಗಳ ವಿರುದ್ಧ ದೂರು ದಾಖಲಿಸಲಾಗುವುದು ಎಂದೂ ಎಚ್ಚರಿಕೆ ನೀಡಲಾಗಿದೆ.
ನಾಯಿ, ಹಾವು ಹಾಗೂ ಇತರೆ ಪ್ರಾಣಿಗಳ ಕಡಿತ ಪ್ರಕರಣಗಳಲ್ಲಿ ವೈದ್ಯಕೀಯ ನಿರ್ಲಕ್ಷ್ಯದಿಂದ ಸಾವುಗಳು ಸಂಭವಿಸಿದರೆ, ಸಂಬಂಧಿಸಿದ ವೈದ್ಯಾಧಿಕಾರಿ ಮತ್ತು ಸಂಸ್ಥೆಯ ಮುಖ್ಯಸ್ಥರಿಗೆ ಎರಡು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಆಸ್ಪತ್ರೆಗಳ ಪರವಾನಗಿಯನ್ನು ರದ್ದುಗೊಳಿಸಲಾಗುತ್ತದೆ ಎಂದು ತಿಳಿಸಲಾಗಿದೆ.
4.19 ಲಕ್ಷಕ್ಕೆ ಏರಿಕೆ
ರಾಜ್ಯದಲ್ಲಿ ಈ ವರ್ಷ ನಾಯಿ ಕಡಿತ ಪ್ರಕರಣಗಳು ಹೆಚ್ಚುತ್ತಿದ್ದು ನವೆಂಬರ್ ಎರಡನೇ ವಾರದ ಅಂತ್ಯಕ್ಕೆ ಪ್ರಕರಣಗಳ ಸಂಖ್ಯೆ 4.19 ಲಕ್ಷಕ್ಕೆ ಏರಿಕೆಯಾಗಿದೆ. ಕಡಿತಕ್ಕೆ ಒಳಗಾದವರಲ್ಲಿ 35 ಮಂದಿ ಮೃತಪಟ್ಟಿದ್ದಾರೆ. ಕಳೆದ ವರ್ಷ 3.61 ಲಕ್ಷ ಪ್ರಕರಣಗಳು ವರದಿಯಾಗಿದ್ದವು. ನಾಯಿ ಕಡಿತದಿಂದಾದ ಗಾಯಗಳಿಂದ ಬಳಲಿದವರಲ್ಲಿ 42 ಮಂದಿ ರೇಬಿಸ್‌ನಿಂದ ಸಾವಿಗೀಡಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.