ADVERTISEMENT

ಮಾದಕ ದ್ರವ್ಯ, ತಂಬಾಕಿನಿಂದ ದೂರ ಇರಿ: ಪ್ರೊ. ಕೆ.ಆರ್. ಜಲಜಾ

ಬೆಂಗಳೂರು ನಗರ ವಿ.ವಿಯಲ್ಲಿ ನಶಾಮುಕ್ತ ಭಾರತ ಅಭಿಯಾನ ಜಾಗೃತಿ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2025, 14:34 IST
Last Updated 13 ಆಗಸ್ಟ್ 2025, 14:34 IST
ಬೆಂಗಳೂರು ನಗರ ವಿಶ್ವವಿದ್ಯಾಲಯದಲ್ಲಿ ನಡೆದ ನಶಾಮುಕ್ತ ಜಾಗೃತಿ ಅಭಿಯಾನದಲ್ಲಿ ವಿದ್ಯಾರ್ಥಿಗಳು ಪ್ರಮಾಣ ವಚನ ಸ್ವೀಕರಿಸಿದರು.
ಬೆಂಗಳೂರು ನಗರ ವಿಶ್ವವಿದ್ಯಾಲಯದಲ್ಲಿ ನಡೆದ ನಶಾಮುಕ್ತ ಜಾಗೃತಿ ಅಭಿಯಾನದಲ್ಲಿ ವಿದ್ಯಾರ್ಥಿಗಳು ಪ್ರಮಾಣ ವಚನ ಸ್ವೀಕರಿಸಿದರು.   

ಬೆಂಗಳೂರು: ವಿದ್ಯಾರ್ಥಿಗಳು ಮಾದಕ ದ್ರವ್ಯ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ದೂರವಿದ್ದು ದೈಹಿಕ ಆರೋಗ್ಯ ಮತ್ತು ಸಾಮಾಜಿಕ ಸ್ವಾಸ್ಥ್ಯ ಕಾಪಾಡಿಕೊಳ್ಳಬೇಕು ಎಂದು ಬೆಂಗಳೂರು ನಗರ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಪ್ರೊ. ಕೆ.ಆರ್. ಜಲಜಾ ಸಲಹೆ ಮಾಡಿದರು.

ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ, ರಾಜ್ಯದಲ್ಲಿನ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಬೆಂಗಳೂರು ನಗರ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡಿದ್ದ ನಶಾಮುಕ್ತ ಭಾರತ ಅಭಿಯಾನದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಾದಕ ದ್ರವ್ಯಗಳ ಪಿಡುಗಿನಿಂದ ಸಮಾಜ ಹಾಗೂ ದೇಶವನ್ನು ಮುಕ್ತಗೊಳಿಸುವ ನಿಟ್ಟಿನಲ್ಲಿ ಯುವಜನತೆಯ ಪಾತ್ರ ಮುಖ್ಯವಾಗಿದೆ. ವಿದ್ಯಾರ್ಥಿ ದೆಸೆಯಲ್ಲಿಯೇ ಇಂತಹ ಪಿಡುಗುಗಳಿಂದ ದೂರವಿದ್ದು ಆರೋಗ್ಯ ಉಳಿಸಿಕೊಳ್ಳುವತ್ತ ಗಮನ ನೀಡಬೇಕು ಎಂದು ಹೇಳಿದರು.

ADVERTISEMENT

ಅಭಿಯಾನ ಉದ್ಘಾಟಿಸಿದ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕ ಟಿ. ರಾಘವೇಂದ್ರ, ಮಾದಕ ದ್ರವ್ಯಗಳ ಸೇವನೆ ಗೀಳಿಗೆ ಬಲಿಯಾಗದೆ ಕುಟುಂಬದ ಭವಿಷ್ಯದ ಕನಸುಗಳನ್ನು ಸಾಕಾರಗೊಳಿಸಲು ಯುವ ಸಮೂಹ ಪಣ ತೊಡಬೇಕು ಎಂದು ಕಿವಿಮಾತು ಹೇಳಿದರು.

ಬಿಸಿಯು ಕುಲಸಚಿವ (ಮೌಲ್ಯಮಾಪನ) ಪ್ರೊ. ಬಿ. ರಮೇಶ್, ಮಾದಕ ವಸ್ತುಗಳ ಅಪಾಯದ ಕುರಿತಾಗಿ ಮನೆ ಮನೆಗೆ ಸಂದೇಶ ತಲುಪಿಸಿ ಸಾಮಾಜಿಕ ಜವಾಬ್ದಾರಿ ನಿರ್ವಹಿಸಬೇಕು ಎಂದು ಸಲಹೆ ನೀಡಿದರು. ಇಲಾಖೆಯ ಉಪ ನಿರ್ದೇಶಕ ಎಸ್.ನಟರಾಜ್ ಪ್ರತಿಜ್ಞಾವಿಧಿ ಬೋಧಿಸಿದರು.

ಬೆಂಗಳೂರು ನಗರ ಜಿಲ್ಲೆಯ ಅಂಗವಿಕಲರ ಕಲ್ಯಾಣಾಧಿಕಾರಿ ಕೆ. ಕೃಷ್ಣಮೂರ್ತಿ ಅಭಿಯಾನದ ಉದ್ದೇಶಗಳನ್ನು ವಿವರಿಸಿದರು. ಬಿಸಿಯು ಸಹ ಪ್ರಾಧ್ಯಾಪಕ ಡಾ.ತಾಂಡವ ಗೌಡ ಮತ್ತು ಎನ್ಎಸ್ಎಸ್ ಸಂಯೋಜಕ ಡಾ.ಗೋವಿಂದೇಗೌಡ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.