ಬಂಧನ
(ಸಾಂದರ್ಭಿಕ ಚಿತ್ರ)
ಬೆಂಗಳೂರು: ನಗರದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವಿದೇಶಿ ಡ್ರಗ್ಸ್ ಪೆಡ್ಲರ್ ನನ್ನು ಸೋಲದೇವನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ
ಆಫ್ರಿಕಾ ದೇಶದ ಕ್ರಿಸ್ಟೋಫರ್ ಒಕ್ವಿಡಿಲಿ ಅವರನ್ನು ಬಂಧಿಸಿ, ₹ 48 ಲಕ್ಷ ಮೌಲ್ಯದ 250 ಗ್ರಾಂ ತೂಕದ ಹೈಡ್ರೋ ಗಾಂಜಾ, 165 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ.
ಬೆಂಗಳೂರು ಉತ್ತರ ತಾಲ್ಲೂಕಿನ ಚಿಕ್ಕಬಾಣಾವರದ ವಿನಾಯಕ ನಗರ ಬಳಿ ಆರೋಪಿಯು ಹೊರ ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ. ವಿಷಯ ತಿಳಿದ ಪೊಲೀಸರು ಕಾರ್ಯಾಚರಣೆ ನಡೆಸಿ, ಮಾದಕ ವಸ್ತುಗಳ ಸಮೇತ ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿಯು ಹೆಬ್ಬಾಳದಲ್ಲಿ ಕಡಿಮೆ ಬೆಲೆಗೆ ಮಾದಕ ವಸ್ತುಗಳನ್ನು ಖರೀದಿಸಿ, ಹೆಚ್ಚಿನ ಬೆಲೆಗೆ ಕಾಲೇಜು ವಿದ್ಯಾರ್ಥಿಗಳು ಹಾಗೂ ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದ. ಎಲ್ಲಿಂದ ಮಾದಕ ವಸ್ತು ನಗರಕ್ಕೆ ಪೂರೈಕೆ ಆಗುತ್ತಿತ್ತು ಎಂಬುದರ ಕುರಿತು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.