ADVERTISEMENT

ಬೆಂಗಳೂರು | ಡ್ರಗ್ಸ್‌ ಮಾರಾಟ: 47 ಮಂದಿ ಸೆರೆ

ವಿವಿಧ ಠಾಣೆಗಳ ಪೊಲೀಸರ ಕಾರ್ಯಾಚರಣೆ

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2025, 15:38 IST
Last Updated 8 ಏಪ್ರಿಲ್ 2025, 15:38 IST
ಡ್ರಗ್ಸ್‌ –ಪ್ರಾತಿನಿಧಿಕ ಚಿತ್ರ
ಡ್ರಗ್ಸ್‌ –ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ನಗರ ಪೊಲೀಸ್ ಕಮಿಷನರೇಟ್‌ ವ್ಯಾಪ್ತಿಯಲ್ಲಿ ಮಾರ್ಚ್‌ ತಿಂಗಳಲ್ಲಿ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಇಬ್ಬರು ವಿದೇಶಿ ಪ್ರಜೆಗಳೂ ಸೇರಿದಂತೆ ಡ್ರಗ್ಸ್ ಮಾರಾಟ ಮಾಡುತ್ತಿದ್ದ 47 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

‘ಮಾದಕ ದ್ರವ್ಯ ನಿಗ್ರಹ ಕಾಯ್ದೆ ಅಡಿ(ಎನ್‌ಡಿಪಿಎಸ್‌) ಒಂದು ತಿಂಗಳಲ್ಲಿ 40 ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. 90 ಗಾಂಜಾ, 3 ಕೆ.ಜಿ ಹ್ಯಾಶಿಷ್‌ ಆಯಿಲ್, 2 ಗ್ರಾಂ. ಕೊಕೇನ್‌, ಒಂದು ಕೆ.ಜಿ 254 ಗ್ರಾಂ. ಎಂಡಿಎಂಎ ಕ್ರಿಸ್ಟಲ್‌ ಅನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ’ ಎಂದು ನಗರ ಪೊಲೀಸ್‌ ಕಮಿಷನರ್‌ ಬಿ.ದಯಾನಂದ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

‘ಕಾನೂನುಬಾಹಿರ ಚಟುವಟಿಕೆಗಳ ನಿಯಂತ್ರಣಕ್ಕೂ ಕ್ರಮ ತೆಗೆದುಕೊಳ್ಳಲಾಗಿದೆ. ಮಟ್ಕಾ, ಜೂಜಾಟ, ಬೆಟ್ಟಿಂಗ್‌, ಶಸ್ತ್ರಾಸ್ತ್ರ ಕಾಯ್ದೆ, ಮಾನವ ಕಳ್ಳ ಸಾಗಣೆ ಸೇರಿದಂತೆ ಕಾನೂನು ಬಾಹಿರ ಚಟುವಟಿಕೆ ನಡೆಸುತ್ತಿದ್ದ 548 ಮಂದಿಯನ್ನು ಬಂಧಿಸಲಾಗಿದೆ. ಒಟ್ಟು 319 ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ತಿಳಿಸಿದರು.

ADVERTISEMENT

‘ನಗರದ ವಿವಿಧ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಮಾರ್ಚ್‌ ತಿಂಗಳಲ್ಲಿ 4,522 ಮೊಬೈಲ್‌ ಫೋನ್‌ಗಳನ್ನು ಕಳ್ಳತನ ಮಾಡಲಾಗಿತ್ತು. ಸಿಇಐಆರ್ ಪೋರ್ಟಲ್‌ ಮೂಲಕ ದಾಖಲಾದ ದೂರುಗಳನ್ನು ಆಧರಿಸಿ 1,499 ಮೊಬೈಲ್‌ ಫೋನ್‌ಗಳನ್ನು ಪತ್ತೆ ಮಾಡಿ ಆರೋಪಿಗಳಿಂದ 856 ಮೊಬೈಲ್‌ ಜಪ್ತಿ ಮಾಡಲಾಗಿದೆ. 726 ಮೊಬೈಲ್‌ಗಳನ್ನು ವಾರಸುದಾರರಿಗೆ ಹಸ್ತಾಂತರ ಮಾಡಲಾಗಿದೆ’ ಎಂದು ಅವರು ಮಾಹಿತಿ ನೀಡಿದರು.

‘ವೀಸಾ ಅವಧಿ ಮುಕ್ತಾಯ ಆಗಿದ್ದರೂ ಅನಧಿಕೃತವಾಗಿ ನಗರದಲ್ಲಿ ವಾಸಿಸುತ್ತಿದ್ದ ಮೂವರನ್ನು ಬಂಧಿಸಲಾಗಿದೆ. 11 ಮಂದಿಯನ್ನು ಅವರ ದೇಶಕ್ಕೆ ವಾಪಸ್‌ ಕಳುಹಿಸಲಾಗಿದೆ’ ಎಂದು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.