ಬೆಂಗಳೂರು: ಉದ್ಯಮಿಗಳು ಹಾಗೂ ಸೆಲೆಬ್ರಿಟಿಗಳು ಆಯೋಜಿಸುತ್ತಿದ್ದ ಪಾರ್ಟಿಗಳಿಗೆ ಮಾದಕ ಪದಾರ್ಥಗಳನ್ನು ಪೂರೈಸುತ್ತಿದ್ದ ಆರೋಪದ ಅಡಿ ನಟಿಯರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದ್ದು, ಆ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಸಿಸಿಬಿ ಪೊಲೀಸರು ಸಿದ್ಧತೆ ನಡೆಸಿದ್ದಾರೆ.
‘ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ಹಾಗೂ ಪ್ರಶಾಂತ್ ರಂಕ ವಿರುದ್ಧ ಸಿಸಿಬಿ ನೀಡಿದ್ದ ದೂರು ಆಧರಿಸಿ ಕಾಟನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿತ್ತು. ಆ ಆದೇಶವನ್ನು ಪ್ರಶ್ನಿಸಿ, ಎರಡು ದಿನಗಳ ಒಳಗಾಗಿ ಮೇಲ್ಮನವಿ ಸಲ್ಲಿಸಲಾಗುವುದು. ದಾಖಲೆಗಳ ಸಿದ್ಧತೆ ಮಾಡಿಕೊಳ್ಳಲಾಗಿದೆ’ ಎಂದು ಸಿಸಿಬಿ ಮೂಲಗಳು ತಿಳಿಸಿವೆ.
‘ಮೇಲ್ಮನವಿ ಸಲ್ಲಿಸಲು ಗೃಹ ಹಾಗೂ ಕಾನೂನು ಇಲಾಖೆಯು ಸಮ್ಮತಿ ನೀಡಿದೆ’ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.
ದೋಷಾರೋಪ ಪಟ್ಟಿಯಲ್ಲಿ ಆರೋಪಿಗಳ ಹೇಳಿಕೆಗಳು ಹಾಗೂ ಸಾಕ್ಷಿಗಳ ಹೇಳಿಕೆ ಹೊರತುಪಡಿಸಿದರೆ, ಅರ್ಜಿದಾರರು ಪಾರ್ಟಿ ಆಯೋಜಿಸಿದ್ದರು ಅಥವಾ ಡ್ರಗ್ಸ್ ಪೂರೈಸಿದ್ದರು ಎಂಬುದಕ್ಕೆ ಯಾವುದೇ ಸಾಕ್ಷ್ಯಾಧಾರ ಒದಗಿಸಿಲ್ಲ ಎಂದು ಹೇಳಿದ್ದ ನ್ಯಾಯಾಲಯ ಪ್ರಕರಣವನ್ನು ರದ್ದುಗೊಳಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.