ಬೆಂಗಳೂರು: ಮಾದಕ ವಸ್ತುಗಳ ಮಾರಾಟ ಮಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳೂ ಸೇರಿದಂತೆ ಮೂವರನ್ನು ಆಡುಗೋಡಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಹಾಸನ ಜಿಲ್ಲೆಯ ಅರಸೀಕೆರೆ ಬಾಲಾಜಿನಗರದ ಅಮಿತ್ (27), ನೈಜೀರಿಯಾದ ಪ್ರಜೆಗಳಾದ ಸಾಮ್ಸನ್ (25) ಹಾಗೂ ಇಸಾಕ್ ಜಾಯ್ (45) ಬಂಧಿತರು. ವಿದೇಶಿ ಡ್ರಗ್ಸ್ ಪೆಡ್ಲರ್‌ಗಳಾದ ಸಾಮ್ಸನ್ ಹಾಗೂ ಇಸಾಕ್ ಬಾಲಾಜಿನಗರದ ಬಾಡಿಗೆ ಮನೆಯಲ್ಲಿ ನೆಲಸಿದ್ದರು.
ಬಂಧಿತರಿಂದ 743 ಗ್ರಾಂ. ಎಂಡಿಎಂಎ, ಒಂದು ಕೆ.ಜಿ. ಗಾಂಜಾ, ನಾಲ್ಕು ಮೊಬೈಲ್ ಹಾಗೂ ಒಂದು ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ. ಇವುಗಳ ಮೌಲ್ಯ₹77 ಲಕ್ಷ ಎಂದು ಅಂದಾಜಿಸಲಾಗಿದೆ. ಆರೋಪಿಗಳ ವಿರುದ್ಧ ಎನ್‌ಡಿಪಿಎಸ್ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಬನ್ನೇರುಘಟ್ಟ ರಸ್ತೆಯ ಕೆ.ಎಂ.ಎಫ್ ಕಾಂಪೌಂಡ್‌ನ ಪಕ್ಕದಲ್ಲಿ ಮೂವರು ಆರೋಪಿಗಳು ಡ್ರಗ್ಸ್ ಮಾರಾಟ ಮಾಡುತ್ತಿದ್ದರು. ಬಾತ್ಮೀದಾರರು ನೀಡಿದ ಮಾಹಿತಿ ಆಧರಿಸಿ ಆರೋಪಿಗಳನ್ನು ಬಂಧಿಸಲಾಯಿತು ಎಂದು ಪೊಲೀಸರು ಹೇಳಿದರು.
ಹೆಚ್ಚಿನ ವಿಚಾರಣೆಗಾಗಿ ಆರೋಪಿಗಳನ್ನು ಒಂಬತ್ತು ದಿನ ತಮ್ಮ ಕಸ್ಟಡಿಗೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.