ಬೆಂಗಳೂರು: ಪಶ್ಚಿಮ ವಿಭಾಗದ ಸಂಚಾರ ಪೊಲೀಸರು ಶಾಲಾ ವಾಹನ ಚಾಲಕರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ, ಮದ್ಯಪಾನ ಮಾಡಿ ಶಾಲಾ ವಾಹನ ಚಲಾಯಿಸುತ್ತಿದ್ದ 16 ಮಂದಿಯ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ಧಾರೆ.
ಶುಕ್ರವಾರ ಬೆಳಿಗ್ಗೆ 7ರಿಂದ 9.30ರ ವರೆಗೆ ನಡೆಸಿದ ಕಾರ್ಯಾಚರಣೆಯಲ್ಲಿ 1,303 ವಾಹನಗಳನ್ನು ತಪಾಸಣೆ ನಡೆಸಲಾಯಿತು. ನಿಯಮ ಉಲ್ಲಂಘಿಸಿದ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಸಂಚಾರ ಪೊಲೀಸರು ಹೇಳಿದರು.
‘ವಿದ್ಯಾರ್ಥಿಗಳನ್ನು ಶಾಲೆಗೆ ಕರೆದೊಯ್ಯುವ ಹಾಗೂ ಮನೆಗೆ ವಾಪಸ್ ಕರೆತರುವ ವೇಳೆ ಶಾಲಾ ವಾಹನ ಚಾಲಕರು ಮದ್ಯಪಾನ ಮಾಡಿ, ಚಾಲನೆ ಮಾಡುತ್ತಿರುವುದು ಕಂಡುಬರುತ್ತಿದೆ. ಇದಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಮುಂದಿನ ದಿನಗಳಲ್ಲಿಯೂ ಇದೇ ರೀತಿಯ ಕಾರ್ಯಾಚರಣೆ ನಡೆಸಲಾಗುವುದು’ ಎಂದು ಸಂಚಾರ ಪೊಲೀಸರು ಹೇಳಿದರು.
ವ್ಹೀಲಿ ವಿರುದ್ಧ ಕಾರ್ಯಾಚರಣೆ: ವ್ಹೀಲಿ ನಡೆಸುವ ಪುಂಡರ ವಿರುದ್ಧ ವಿಶೇಷ ಕಾರ್ಯಾಚರಣೆ ಮುಂದುವರಿಸಿರುವ ನಗರ ಸಂಚಾರ ವಿಭಾಗದ ಪೊಲೀಸರು ಶುಕ್ರವಾರ ಮತ್ತೆ 12 ಮಂದಿಯನ್ನು ಬಂಧಿಸಿದ್ದಾರೆ.
ಮೇಲ್ಸೇತುವೆ ಹಾಗೂ ವಿವಿಧ ಬಡಾವಣೆಗಳಲ್ಲಿ ವ್ಹೀಲಿ ನಡೆಸುತ್ತಿದ್ದವರನ್ನು ಬಂಧಿಸಲಾಗಿದೆ. ಒಟ್ಟು 18 ಪ್ರಕರಣ ದಾಖಲಿಸಿಕೊಳ್ಳಲಾಗಿದೆ. 19 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.