ಮದ್ಯ –ಪ್ರಾತಿನಿಧಿಕ ಚಿತ್ರ
ಬೆಂಗಳೂರು: ನಗರ ಸಂಚಾರ ವಿಭಾಗದ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ, ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುತ್ತಿದ್ದ 518 ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುತ್ತಿದ್ದ ಹಾಗೂ ಅತಿವೇಗವಾಗಿ ವಾಹನ ಚಾಲನೆ ಮಾಡುತ್ತಿದ್ದವರ ವಿರುದ್ಧ 53 ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಗಸ್ಟ್ 11ರಿಂದ 17ರ ನಡುವೆ ವಿಶೇಷ ಕಾರ್ಯಾಚರಣೆ ನಡೆಸಲಾಯಿತು.
ವಿವಿಧ ಮಾದರಿಯ 38,804 ವಾಹನಗಳ ಚಾಲಕರನ್ನು ಪರೀಕ್ಷೆಗೆ ಒಳಪಡಿಸಿ ಮದ್ಯಪಾನ ಮಾಡಿ ಚಾಲನೆ ಮಾಡುತ್ತಿದ್ದ 518 ಮಂದಿ ವಿರುದ್ಧ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ಅತಿವೇಗವಾಗಿ ವಾಹನ ಚಾಲನೆ ಮಾಡುತ್ತಿದ್ದ 44 ಮಂದಿಯ ವಿರುದ್ಧವೂ ಪ್ರಕರಣ ದಾಖಲಿಸಿಕೊಂಡು, ₹44 ಸಾವಿರ ದಂಡ ಸಂಗ್ರಹಿಸಲಾಗಿದೆ ಎಂದು ಸಂಚಾರ ವಿಭಾಗದ ಪೊಲೀಸರು ಹೇಳಿದರು.
ಆಗಸ್ಟ್ 1ರಿಂದ 17ರವರೆಗೆ ನಡೆದ ಕಾರ್ಯಾಚರಣೆಯಲ್ಲಿ ನಿರ್ಬಂಧಿತ ಸ್ಥಳದಲ್ಲಿ ವಾಹನ ನಿಲುಗಡೆ ಮಾಡಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ತೊಂದರೆ ಉಂಟು ಮಾಡಿದ್ದವರ ವಿರುದ್ಧ 17,436 ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಸಂಚಾರ ಪೊಲೀಸರು ಹೇಳಿದರು.
ಈ ರೀತಿಯ ಕಾರ್ಯಾಚರಣೆಯನ್ನು ಮುಂದುವರೆಸಲಾಗುವುದು ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.