ಬೆಂಗಳೂರು: ‘ನೂತನ ರಾಷ್ಟ್ರೀಯ ಶಿಕ್ಷಣ ನೀತಿಗೆ ವಿರುದ್ಧವಾಗಿರಾಜ್ಯ ಸರ್ಕಾರವು 1,400 ಸರ್ಕಾರಿ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಆಂಗ್ಲ ಮಾಧ್ಯಮಶಿಕ್ಷಣವನ್ನುಪ್ರಾರಂಭಿಸಲು ಮುಂದಾಗಿದೆ. ಸರ್ಕಾರದ ಈ ನಡೆಯು ಕನ್ನಡದ ಭವಿಷ್ಯಕ್ಕೆ ಮಾರಕವಾಗಿದೆ’ ಎಂದು ಕನ್ನಡ ಗೆಳೆಯರ ಬಳಗ ಬೇಸರ ವ್ಯಕ್ತಪಡಿಸಿದೆ.
‘ಈ ಹಿಂದೆ ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರವು 1 ಸಾವಿರ ಸರ್ಕಾರಿ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಆಂಗ್ಲ ಮಾಧ್ಯಮ ಶಿಕ್ಷಣವನ್ನು ಪ್ರಾರಂಭಿಸಿ, ಕನ್ನಡದ ಹಿತಕ್ಕೆ ಧಕ್ಕೆಯನ್ನುಂಟು ಮಾಡಿತು. ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರವೂ ಈಗ ಅದೇ ಹಾದಿಯಲ್ಲಿ ಸಾಗುತ್ತಿದೆ. ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಮಾತೃಭಾಷೆಗೆ ಆದ್ಯತೆ ನೀಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಆದರೆ, ರಾಜ್ಯ ಸರ್ಕಾರಈ ನೀತಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ’ ಎಂದು ಬಳಗದ ರಾ.ನಂ. ಚಂದ್ರಶೇಖರ ತಿಳಿಸಿದ್ದಾರೆ.
‘ಕನ್ನಡದ ಬಗ್ಗೆ ಕಾಳಜಿಯಿದ್ದಲ್ಲಿ ಸರ್ಕಾರವು ಖಾಸಗಿ ಶಾಲೆಗಳಲ್ಲೂ ಒಂದನೇ ತರಗತಿಯಿಂದ ಇಂಗ್ಲಿಷ್ ಮಾಧ್ಯಮ ಶಿಕ್ಷಣವನ್ನು ರದ್ದುಗೊಳಿಸಲು ಕ್ರಮಕೈಗೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.