
ಬೆಂಗಳೂರು: ‘ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಪ್ರಕ್ರಿಯೆಯನ್ನು ಮುಂದಿನ ದಿನಗಳಲ್ಲಿ ಇನ್ನಷ್ಟು ಸರಳೀಕರಿಸಲಾಗುವುದು. ಈ ವಿಚಾರದಲ್ಲಿ ಶಾಲಾ ಆಡಳಿತ ಮಂಡಳಿಯವರಿಗೆ ಅಧಿಕಾರಿಗಳು ಕಿರುಕುಳ ನೀಡುವುದು ಕಂಡುಬಂದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು’ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಎಚ್ಚರಿಕೆ ನೀಡಿದರು.
ಅರಮನೆ ಮೈದಾನದಲ್ಲಿ ಖಾಸಗಿ ಶಾಲಾ ಸಂಘಟನೆ ಕ್ಯಾಮ್ಸ್, ವಿವಿಧ ಶಾಲಾ ಆಡಳಿತ ಮಂಡಳಿಗಳು, ಸಂಸ್ಥೆಗಳ ಸಹಯೋಗದಲ್ಲಿ ಭಾನುವಾರ ನಡೆದ ‘ವಿಷನ್- ಮಿಷನ್’ ಎಂಬ ರಾಜ್ಯಮಟ್ಟದ ಶೈಕ್ಷಣಿಕ ಸಮ್ಮೇಳನದಲ್ಲಿ ಅವರು ಮಾತನಾಡಿದರು.
ಇಲಾಖೆಯಲ್ಲಿ ತಂದ ಸುಧಾರಣೆಗಳಿಗಾಗಿ ನೀಡಿದ ಸಚಿವರಿಗೆ ‘ಶಿಕ್ಷಣ ಬಂಗಾರ’ ಬಿರುದು ನೀಡಿ ಸನ್ಮಾನಿಸಲಾಯಿತು.
‘ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ವಿಚಾರದಲ್ಲಿ ಹಲವು ವರ್ಷಗಳಿಂದ ಸಾಕಷ್ಟು ಸಮಸ್ಯೆಗಳಿವೆ. ಈ ಮೊದಲು ಸುಮಾರು 60ಕ್ಕೂ ಹೆಚ್ಚು ದಾಖಲೆಗಳನ್ನು ಸಲ್ಲಿಸಬೇಕಿತ್ತು. ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಅದನ್ನು 30ಕ್ಕೆ ಇಳಿಸಲಾಗಿದೆ. ಮುಂದಿನ ದಿನಗಳಲ್ಲಿ ನಿಯಮಗಳಿಗೆ ಬದಲಾವಣೆ ತಂದು ಮತ್ತಷ್ಟು ಸರಳೀಕರಿಸಲಾಗುವುದು. ಈ ಉದ್ದೇಶದಿಂದ ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ಸದನ ಸಮಿತಿಯನ್ನೂ ರಚಿಸಲಾಗಿದೆ’ ಎಂದರು.
‘ಮಾನ್ಯತೆ ನವೀಕರಣ ವಿಚಾರದಲ್ಲಿ ಅಧಿಕಾರಿಗಳಿಂದ ಕಿರುಕುಳದ ಆರೋಪ, ದೂರುಗಳು ಬರುತ್ತಿವೆ. ಇದನ್ನು ಸಹಿಸುವುದಿಲ್ಲ’ ಎಂದೂ ಹೇಳಿದರು.
ವಿಧಾನ ಪರಿಷತ್ ಸದಸ್ಯರಾದ ಪುಟ್ಟಣ್ಣ, ಡಿ.ಟಿ. ಶ್ರೀನಿವಾಸ್, ರಾಮೋಜಿ ಗೌಡ, ಭಾರತೀಯ ಶಿಕ್ಷಣ ಮಂಡಳಿಯ ಕಾರ್ಯನಿರತ ಅಧ್ಯಕ್ಷ ಎನ್.ಪಿ. ಸಿಂಗ್, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಶೇಖರ ನುಗ್ಗಲಿ, ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್, ಪ್ರೌಢ ಶಾಲಾ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ಮಂಜುನಾಥ್ ಇದ್ದರು.
ಗಣಿತಕ್ಕೆ 2 ರೀತಿ ಪ್ರಶ್ನೆ ಪತ್ರಿಕೆಗೆ ಮನವಿ
'ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯ ಆಧರಿಸಿ ಗಣಿತ ವಿಷಯದಲ್ಲಿ ಸಿಬಿಎಸ್‌ಇ ಮಾದರಿಯಲ್ಲಿ ಸುಲಭವಾದ ಮತ್ತು ಕಠಿಣ ಎರಡು ರೀತಿಯ ಪ್ರಶ್ನೆ ಪತ್ರಿಕೆ ನೀಡಬೇಕು’ ಎಂದು ಖಾಸಗಿ ಶಾಲಾ ಸಂಘಟನೆಗಳ ಪದಾಧಿಕಾರಿಗಳು ಮನವಿ ಮಾಡಿದರು. ಈ ಕುರಿತು ಪರಿಶೀಲಿಸಿ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ವೇದಿಕೆಯಲ್ಲೇ ಸಚಿವರು ಸೂಚಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.