ADVERTISEMENT

ಮತದಾರರ ಪಟ್ಟಿ: ಒಂದೇ ತಿಂಗಳಲ್ಲಿ 80 ಸಾವಿರ ಅರ್ಜಿ

​ಪ್ರಜಾವಾಣಿ ವಾರ್ತೆ
Published 2 ಜನವರಿ 2023, 20:59 IST
Last Updated 2 ಜನವರಿ 2023, 20:59 IST
   

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಮತದಾರರ ಮಾಹಿತಿ ಕಳ್ಳತನ ಪ್ರಕರಣ ಬೆಳಕಿಗೆ ಬಂದ ನಂತರ ಒಂದು ತಿಂಗಳಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು 80,841 ಜನ ಅರ್ಜಿ ಸಲ್ಲಿಸಿದ್ದಾರೆ.

ನ.9ರಿಂದ ಡಿ.8ರ ನಡುವೆ 25 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿಶೇಷ ಅಭಿಯಾನ ನಡೆಸಲಾಗಿದ್ದು, ಈ ಸಂದರ್ಭದಲ್ಲಿ 57,252 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಅಲ್ಲದೇ, ಮಹದೇವಪುರ, ಶಿವಾಜಿನಗರ ಮತ್ತು ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರಗಳಿಂದ 23,589 ಅರ್ಜಿಗಳು ಬಂದಿವೆ. ಮತದಾರರ ಮಾಹಿತಿ ಕಳ್ಳತನ ಪ್ರಕರಣ ವರದಿಯಾದ ಬಳಿಕ ಈ ಮೂರು ಕ್ಷೇತ್ರಗಳಲ್ಲಿ ಮತದಾರರ ಪಟ್ಟಿಯನ್ನು ಸಂಪೂರ್ಣ ಪರಿಶೀಲನೆ ನಡೆಸಲು ಭಾರತೀಯ ಚುನಾವಣಾ ಆಯೋಗ ಆದೇಶಿಸಿದೆ.

ಮತದಾರರ ಪಟ್ಟಿಗೆ ಸೇರ್ಪಡೆಯಾಗಲು 2022ರ ಜನವರಿಯಿಂದ ನವೆಂಬರ್ ತನಕದ 10 ತಿಂಗಳ ಅವಧಿಯಲ್ಲಿ 3.7 ಲಕ್ಷ ಅರ್ಜಿಗಳು ಸ್ವೀಕಾರಗೊಂಡಿವೆ. ಈಗ ಕೇವಲ ಒಂದು ತಿಂಗಳಲ್ಲಿ 80 ಸಾವಿರಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿರುವುದು ವಿಶೇಷ. ವ್ಯಾಪಕ ಪ್ರಚಾರ ನೀಡಿದ್ದರಿಂದ ಇಷ್ಟು ಪ್ರಮಾಣದ ಅರ್ಜಿ ಸ್ವೀಕೃತವಾಗಿವೆ ಎಂದು ಬಿಬಿಎಂಪಿ ಹಿರಿಯ ಅಧಿಕಾರಿಗಳು ಹೇಳುತ್ತಾರೆ.

ADVERTISEMENT

ಮತದಾರರ ಮಾಹಿತಿ ಕಳವು ಪ್ರಕರಣವು ಜನರಲ್ಲಿ ಜಾಗೃತಿ ಮೂಡಿಸಿದೆ. ನಾಗರಿಕ ಗುಂಪುಗಳು ಮತ್ತು ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳ ಪ್ರತಿನಿಧಿಗಳು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮತ್ತು ತಿದ್ದುಪಡಿಗೆ ಅರ್ಜಿ ಸಲ್ಲಿಸುವುದು ಹೆಚ್ಚಾಗಿದೆ ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದರು.

ತಿದ್ದುಪಡಿ ಕೋರಿ 44,197 ಅರ್ಜಿಗಳು ಮತ್ತು ಮತದಾರರ ಪಟ್ಟಿಯಿಂದ ಕೈಬಿಡಲು 14,952 ಅರ್ಜಿಗಳು ಬಂದಿವೆ. ಮಹದೇವಪುರ, ಶಿವಾಜಿನಗರ, ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರಗಳಲ್ಲೇ ಹೆಚ್ಚು ಅರ್ಜಿಗಳು ಬಂದಿರುವುದು ಮತ್ತೊಂದು ವಿಶೇಷ. ಈ ಮಧ್ಯೆ ಅಂತಿಮ ಮತದಾರರ ಪಟ್ಟಿಯನ್ನು ಜ.5ರಂದು ಪ್ರಕಟಿಸಲು ಬಿಬಿಎಂಪಿ ಸಜ್ಜಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.