ADVERTISEMENT

ಈಜಿಪುರ ವಸತಿ ಸಮುಚ್ಚಯ ಕಾಮಗಾರಿ: ಸರ್ಕಾರಕ್ಕೆ ನೋಟಿಸ್‌

​ಪ್ರಜಾವಾಣಿ ವಾರ್ತೆ
Published 16 ನವೆಂಬರ್ 2022, 21:32 IST
Last Updated 16 ನವೆಂಬರ್ 2022, 21:32 IST

ಬೆಂಗಳೂರು: ‘ಕೋರಮಂಗಲದ ಈಜಿಪುರ ವ್ಯಾಪ್ತಿಯಲ್ಲಿ, ಆರ್ಥಿಕವಾಗಿ ದುರ್ಬಲರಾದ ವರ್ಗಗಳ ಜನರಿಗೆ ನೀಡಲು ಉದ್ದೇಶಿಸಿದ ವಸತಿ ಸಮುಚ್ಚಯ (ಅಪಾರ್ಟ್‌ಮೆಂಟ್) ನಿರ್ಮಾಣದಲ್ಲಿ ವಿಳಂಬ ಮಾಡಲಾಗುತ್ತಿದೆ’ ಎಂದು ಆಕ್ಷೇಪಿಸಿದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

ಈ ಕುರಿತಂತೆ, ‘ಕರ್ನಾಟಕ ಈಜಿಪುರ ನಿವಾಸಿಗಳ ಸಾಮಾಜಿಕ ಕಲ್ಯಾಣ ಸಂಘ’ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ‘ಈಜಿಪುರದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ 1,512 ಮನೆಗಳ ನಿರ್ಮಾಣಕ್ಕೆ ಉದ್ದೇಶಿಸಲಾಗಿದೆ. ಈ ಸಮುಚ್ಚಯ ನಿರ್ಮಾಣದ ಕಾಮಗಾರಿಯನ್ನು ಹೈಕೋರ್ಟ್ ಆದೇಶದಂತೆ ಆರಂಭಿಸಲಾಗಿದ್ದರೂ ಈವರೆಗೂ ಪೂರ್ಣಗೊಳಿಸಿಲ್ಲ. ಹಾಗಾಗಿ, ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ನಿರ್ದೇಶಿಸಬೇಕು. ಕಾಮಗಾರಿ ಪೂರ್ಣಗೊಳಿಸುವರೆಗೆ ವಸತಿ ಹಕ್ಕುದಾರರಿಗೆ ಮಾಸಿಕ ಬಾಡಿಗೆ ಹಣ ನೀಡಲು ಆದೇಶಿಸಬೇಕು’ ಎಂದು ಕೋರಿದರು.

ADVERTISEMENT

ದಾಖಲೆಗಳನ್ನು ಪರಿಶೀಲಿಸಿದ ನ್ಯಾಯಪೀಠ, ‘ಕಾಮಗಾರಿ ವಿಳಂಬವಾಗಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಮನೆಗಳಿಗಾಗಿ ನಿವಾಸಿಗಳು ಇನ್ನೂ ಎಷ್ಟು ವರ್ಷ ಕಾಯಬೇಕು’ ಎಂದು ಖಾರವಾಗಿ ಪ್ರಶ್ನಿಸಿತಲ್ಲದೆ, ‘ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಿ’ ಎಂದುಪ್ರತಿವಾದಿಗಳಾದ ರಾಜ್ಯ ಸರ್ಕಾರದ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ, ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ), ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಬಿಡಿಎ) ಮತ್ತು ಗುತ್ತಿಗೆದಾರ ಕಂಪನಿ ಮೇವರಿಕ್ ಹೋರ್ಡಿಂಗ್ಸ್ ಪ್ರೈವೇಟ್ ಲಿಮಿಟೆಡ್‌ಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿತು. ವಿಚಾರಣೆಯನ್ನು ಡಿಸೆಂಬರ್ 7ಕ್ಕೆ ಮುಂದೂಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.