ADVERTISEMENT

ಇಂಗ್ಲಿಷ್‌ ಮಾಧ್ಯಮ ಶಾಲೆಗಳಿಗೆ ಪ್ರವೇಶಕ್ಕೆ ನಿರ್ಬಂಧ ಇಲ್ಲ: ಶಿಕ್ಷಣ ಇಲಾಖೆ

​ಪ್ರಜಾವಾಣಿ ವಾರ್ತೆ
Published 26 ಮೇ 2022, 5:03 IST
Last Updated 26 ಮೇ 2022, 5:03 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯ ಸರ್ಕಾರದ ಇಂಗ್ಲಿಷ್ ಮಾಧ್ಯಮ ಶಾಲೆಗಳಲ್ಲಿ ವಿದ್ಯಾರ್ಥಿಗಳ ಪ್ರವೇಶಾತಿಗೆ ಯಾವುದೇ ರೀತಿಯ ನಿರ್ಬಂಧ ವಿಧಿಸದಿರಲು ನಿರ್ಧರಿಸಿರುವ ಶಿಕ್ಷಣ ಇಲಾಖೆ, ಪ್ರವೇಶ ಕಲ್ಪಿಸುವಾಗ ಮೂಲಸೌಕರ್ಯಗಳನ್ನು ಗಮನದಲ್ಲಿರಿಸಿಕೊಳ್ಳಬೇಕು ಎಂದುಸೂಚಿಸಿದೆ.

2022–23ನೇ ಶೈಕ್ಷಣಿಕ ವರ್ಷದಲ್ಲಿ ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನು ಆರಂಭಿಸದ ಕಾರಣ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಈ ನಿರ್ಧಾರ ಕೈಗೊಂಡಿದೆ.

ಜತೆಗೆ, ಕೋವಿಡ್‌ನಿಂದ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಇಂಗ್ಲಿಷ್‌ ಮಾಧ್ಯಮ ಶಾಲೆಗಳಿಗೆ ಕಳುಹಿಸಲು ಬಯಸುವವರಿಗೆ ಅನುಕೂಲವಾಗಲಿ ಎನ್ನುವ ಉದ್ದೇಶದಿಂದ ಈ ಕ್ರಮಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

‘ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸಲು ಅವಕಾಶ ಕಲ್ಪಿಸಬೇಕು ಎನ್ನುವ ಬೇಡಿಕೆಯನ್ನು ಹಲವು ಸರ್ಕಾರಿ ಇಂಗ್ಲಿಷ್‌ ಮಾಧ್ಯಮ ಶಾಲೆಗಳಿಂದ ಬಂದಿದೆ. ಮೂಲಸೌಕರ್ಯಗಳು ಲಭ್ಯ ಇರುವ ಶಾಲೆಗಳಲ್ಲಿ ಹೆಚ್ಚು ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸಲು ಅವಕಾಶ ನೀಡಲಾಗುವುದು. ಶಿಕ್ಷಕರ ಕೊರತೆ ಇದ್ದಲ್ಲಿ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಬಹುದು. ಶಾಲಾಭಿವೃದ್ಧಿ ಸಮಿತಿಗಳು ಈ ಬಗ್ಗೆ ಬಿಇಒಗಳಿಗೆ ಮನವಿ ಸಲ್ಲಿಸಬಹುದು’ ಎಂದು ತಿಳಿಸಿದ್ದಾರೆ.

2019–20ರಲ್ಲಿ ರಾಜ್ಯ ಸರ್ಕಾರ 1,001 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್‌ ಮಾಧ್ಯಮ ಶಾಲೆಗಳನ್ನು ಆರಂಭಿಸಿತ್ತು. ನಂತರ, 276 ಕರ್ನಾಟಕ ಪಬ್ಲಿಕ್‌ ಶಾಲೆಗಳಲ್ಲಿ ಇಂಗ್ಲಿಷ್‌ ಮಾಧ್ಯಮ ಆರಂಭಿಸಲಾಗಿದೆ. ಒಟ್ಟಾರೆಯಾಗಿ ಪ್ರಸ್ತುತ, 2,401 ಇಂಗ್ಲಿಷ್‌ ಮಾಧ್ಯಮ ಸರ್ಕಾರಿ ಶಾಲೆಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.