ADVERTISEMENT

ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ: ಬಿಳಿಮಲೆ ವಿರೋಧ

​ಪ್ರಜಾವಾಣಿ ವಾರ್ತೆ
Published 4 ಜುಲೈ 2025, 15:58 IST
Last Updated 4 ಜುಲೈ 2025, 15:58 IST
ಪುರುಷೋತ್ತಮ ಬಿಳಿಮಲೆ
ಪುರುಷೋತ್ತಮ ಬಿಳಿಮಲೆ   

ಬೆಂಗಳೂರು: ರಾಜ್ಯದಾದ್ಯಂತ 4,137 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹೊಸದಾಗಿ ಆಂಗ್ಲ ಮಾಧ್ಯಮ ತರಗತಿಗಳನ್ನು ತೆರೆಯುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ವಿರೋಧ ವ್ಯಕ್ತಪಡಿಸಿದ್ದಾರೆ. 

ಈ ಬಗ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿದ್ದಾರೆ. 

‘ಸಂವಹನಕ್ಕಾಗಿ ತಾಯ್ನುಡಿ ಹೊರತಾದ ಯಾವುದೇ ಭಾಷೆಯನ್ನು ಕಲಿಯುವುದು ತಪ್ಪಲ್ಲ. ಆದರೆ, ಅಂತಹ ಪ್ರಯತ್ನಗಳು ನಮ್ಮ ಮಾತೃಭಾಷೆಯನ್ನೇ ಮೂಲೆಗುಂಪಾಗಿಸುವ ಕಾರ್ಯಕ್ಕೆ ಪ್ರಾಧಿಕಾರ ಸಾಕ್ಷಿಯಾಗುವುದಿಲ್ಲ. ನಾಡಿನ ಅಭಿವೃದ್ಧಿ ಎನ್ನುವುದು ಸಂಪೂರ್ಣವಾಗಿ ಅಲ್ಲಿನ ಶಿಕ್ಷಣ ವ್ಯವಸ್ಥೆಯನ್ನು ಅವಲಂಬಿಸಿದೆ’ ಎಂದು ತಿಳಿಸಿದ್ದಾರೆ.

ADVERTISEMENT

‘ಕನ್ನಡ ಅಭಿವೃದ್ಧಿ ಪ್ರಾಧಿಕಾರವು 2017ರಲ್ಲಿ ಸಲ್ಲಿಸಿರುವ ಸರ್ಕಾರಿ ಶಾಲೆಗಳ ಸಬಲೀಕರಣ ವರದಿಯನ್ನು ಕೂಡಲೇ ಜಾರಿಗೊಳಿಸಬೇಕು. ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಕಲಿಸಲು ರೂಪಿಸಿರುವ ‘ಕನ್ನಡ ಕಲಿಕಾ ಕಾಯ್ದೆ 2015’ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಮುಂದಾಗಬೇಕು. ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಕನ್ನಡ ಶಾಲೆಗಳ ಸಬಲೀಕರಣಕ್ಕಾಗಿ ಒಂದು ಪ್ರತ್ಯೇಕ ಪ್ರಾಧಿಕಾರವನ್ನು ರಚಿಸಿ, ಸರ್ಕಾರ ಆ ಶಾಲೆಗಳ ಬೆಂಬಲಕ್ಕೆ ನಿಲ್ಲಬೇಕು’ ಎಂದು ಹೇಳಿದ್ದಾರೆ.

‘ರಾಜ್ಯದಲ್ಲಿ ದ್ವಿಭಾಷಾ ನೀತಿ ಅಗತ್ಯವಿದ್ದು, ಪ್ರಾಧಿಕಾರವು ಈ ನಿರ್ಧಾರವನ್ನು ಎಲ್ಲ ವೇದಿಕೆಗಳಲ್ಲಿ ಸ್ಪಷ್ಟಪಡಿಸಿದೆ’ ಎಂದು ತಿಳಿಸಿದ್ದಾರೆ. 

4137 ಶಾಲೆಗಳಲ್ಲಿ ಈ ವರ್ಷ ಆಂಗ್ಲ ಮಾಧ್ಯಮ

ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ 4137 ಶಾಲೆಗಳಲ್ಲಿ ಒಂದನೇ ತರಗತಿಯಿಂದ ಆಂಗ್ಲ ಮಾಧ್ಯಮ ತರಗತಿ ಆರಂಭಿಸಲು ಶಾಲಾ ಶಿಕ್ಷಣ ಇಲಾಖೆ ಅನುಮತಿ ನೀಡಿದ್ದು ಆಂಗ್ಲ ಮಾಧ್ಯಮ ಸರ್ಕಾರಿ ಶಾಲೆಗಳ ಸಂಖ್ಯೆ 8738ಕ್ಕೆ ಏರಿಕೆಯಾಗಿದೆ. ಮೊದಲ ಬಾರಿ 2019–20ನೇ ಸಾಲಿನಲ್ಲಿ 1000 ಸರ್ಕಾರಿ ಶಾಲೆಗಳಲ್ಲಿ ಕನ್ನಡ ಮಾಧ್ಯಮದ ಜತೆಗೆ ಇಂಗ್ಲಿಷ್‌ ಮಾಧ್ಯಮಕ್ಕೂ (ದ್ವಿಭಾಷಾ ಮಾಧ್ಯಮ) ರಾಜ್ಯ ಸರ್ಕಾರ ಅವಕಾಶ ನೀಡಿತ್ತು.

2025–26ನೇ ಸಾಲಿನಲ್ಲಿ ಹೊಸದಾಗಿ 4000 ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ ಆರಂಭಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿಯ ಬಜೆಟ್‌ನಲ್ಲೇ ಘೋಷಿಸಿದ್ದರು.   ರಾಜ್ಯದ 33 ಶೈಕ್ಷಣಿಕ ಜಿಲ್ಲೆಗಳ 11555 ಶಾಲೆಗಳಿಂದ ದ್ವಿಭಾಷಾ ಮಾಧ್ಯಮಕ್ಕೆ ಬೇಡಿಕೆ ಬಂದಿದ್ದು ನಿಗದಿತ ಮಾನದಂಡಗಳಿಗೆ ಅನುಗುಣವಾಗಿ ಪರಿಶೀಲನೆ ನಡೆಸಿ 4137 ಶಾಲೆಗಳನ್ನು ಆಯ್ಕೆ ಮಾಡಲಾಗಿದೆ. ಅವುಗಳಲ್ಲಿ ಬೆಂಗಳೂರು ಉತ್ತರ ಮತ್ತು ದಕ್ಷಿಣ ಜಿಲ್ಲೆಗಳಲ್ಲೇ 1465 ಶಾಲೆಗಳಿವೆ. ಲಭ್ಯವಿರುವ ಸ್ಥಳೀಯ ಸಂಪನ್ಮೂಲಗಳನ್ನು ಬಳಸಿಕೊಂಡು ಆಂಗ್ಲ ಮಾಧ್ಯಮ ತರಗತಿಗಳನ್ನು ಆರಂಭಿಸಬೇಕು ಎಂದು ಇಲಾಖೆ ಸೂಚಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.