ADVERTISEMENT

ವಸತಿ ಯೋಜನೆ ಸ್ಥಗಿತ: ಈಶ್ವರ ಖಂಡ್ರೆ ಕಿಡಿ

ಎಂಟು ತಿಂಗಳಾದರೂ ಹಣ ಬಿಡುಗಡೆಯಾಗಿಲ್ಲ

​ಪ್ರಜಾವಾಣಿ ವಾರ್ತೆ
Published 8 ಜನವರಿ 2020, 20:27 IST
Last Updated 8 ಜನವರಿ 2020, 20:27 IST
ಈಶ್ವರ ಖಂಡ್ರೆ
ಈಶ್ವರ ಖಂಡ್ರೆ   

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ವಸತಿ ಯೋಜನೆಗಳು ಸ್ಥಗಿತಗೊಂಡಿದ್ದು, ಮತ್ತೆ ಆರಂಭಿಸಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಬುಧವಾರ ಆಗ್ರಹಿಸಿದರು.

ಅಕ್ರಮ ನಡೆದಿರುವ ಆರೋಪದ ಮೇಲೆ ಮನೆಗಳ ನಿರ್ಮಾಣ ಕಾರ್ಯವನ್ನು ಸ್ಥಗಿತಗೊಳಿಸಿ, ಹಣ ಬಿಡುಗಡೆಯನ್ನೂ ನಿಲ್ಲಿಸಲಾಗಿದೆ. ಅಕ್ರಮ ನಡೆದಿದ್ದರೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿ. ಅದು ಬಿಟ್ಟು ಇಡೀ ಯೋಜನೆಯನ್ನೇ ಸ್ಥಗಿತಗೊಳಿಸುವುದು ಸರಿಯಲ್ಲ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಗುಡಿಸಲು ಮುಕ್ತ ರಾಜ್ಯ ಮಾಡಲು ಯೋಜನೆ ರೂಪಿಸಲಾಗಿತ್ತು. 16 ಲಕ್ಷ ಮನೆಗಳನ್ನು ನಿರ್ಮಿಸುವ ಗುರಿ ಹೊಂದಿದ್ದು, 13 ಲಕ್ಷ ಮನೆಗಳಿಗೆ ಮಂಜೂರಾತಿ ನೀಡಲಾಗಿತ್ತು. ಮನೆಗಳ ನಿರ್ಮಾಣ ಕೆಲಸವೂ ಚುರುಕಾಗಿ ಸಾಗಿತ್ತು. ಆದರೆ ಈಗ ಹಣ ಬಿಡುಗಡೆಯಾಗದೆ ಕೆಲಸ ಸ್ಥಗಿತಗೊಂಡಿದೆ. ಮನೆಗಳಿಗೆ ಮಂಜೂರಾತಿ ಪಡೆದು ಎಂಟತ್ತು ತಿಂಗಳು ಕಳೆದರೂ ಹಣವನ್ನೇ ಕೊಡುತ್ತಿಲ್ಲ ಎಂದು ಆರೋಪಿಸಿದರು.

ADVERTISEMENT

ನೆಲೆ ಕಳೆದುಕೊಂಡ ಜನರು ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಹಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

ನೆರೆ ಸಂತ್ರಸ್ತರು ಬಳಲುತ್ತಿದ್ದರೂ ಪರಿಹಾರ ಕಲ್ಪಿಸಿಲ್ಲ. ರೈತರ ಆತ್ಮಹತ್ಯೆ ತಡೆಯುವ ಪ್ರಯತ್ನ ಮಾಡಿಲ್ಲ. ಸರ್ಕಾರದ ತಪ್ಪುಗಳನ್ನು ತೋರಿಸಲು ಪ್ರತಿಭಟನೆ ಮಾಡಲೂ ಅವಕಾಶ ನೀಡುತ್ತಿಲ್ಲ. ಜನರ ಹಕ್ಕುಗಳನ್ನು ಕಿತ್ತುಕೊಳ್ಳಲಾಗಿದೆ. ಪೌರತ್ವ (ತಿದ್ದುಪಡಿ) ಕಾಯ್ದೆ, ರಾಷ್ಟ್ರೀಯ ಪೌರತ್ವ ನೋಂದಣಿ ಜಾರಿಯಿಂದಾಗಿ ಹಲವು ಸಮಸ್ಯೆಗಳಿಗೆ ಕಾರಣವಾಗಿದೆ ಎಂದು ಟೀಕಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.