ಸುವರ್ಣ ವಿಧಾನಸೌಧ (ಬೆಳಗಾವಿ): ‘ಬೆಂಗಳೂರಿನ ಹೊರವಲಯದಲ್ಲಿ ನಾಲ್ಕು ಕಡೆ ಘನತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆಗೆ ಶೀಘ್ರವೇ ಟೆಂಡರ್ ಕರೆಯಲಾಗುವುದು’ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ವಿಧಾನ ಪರಿಷತ್ತಿನಲ್ಲಿ ಬಿಜೆಪಿಯ ಕೇಶವ ಪ್ರಸಾದ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ‘ಬೆಂಗಳೂರಿನಲ್ಲಿರುವ ಘನತ್ಯಾಜ್ಯ ಮಾಫಿಯಗೆ ಮಟ್ಟ ಹಾಕಲಾಗುವುದು’ ಎಂದರು.
ಬೆಂಗಳೂರು ಶಾಸಕರು ಈ ವಿಚಾರವಾಗಿ ಒತ್ತಡ ಹಾಕುತ್ತಿದ್ದಾರೆ. ಇದಕ್ಕಾಗಿ ಬೆಂಗಳೂರಿನ ಹೊರ ವಲಯದಲ್ಲಿ ನಾಲ್ಕು ದಿಕ್ಕುಗಳಲ್ಲಿ ಘನತ್ಯಾಜ್ಯ ವಿಲೇವಾರಿ ಕೇಂದ್ರ ಸ್ಥಾಪಿಸಲು ಮುಂದಾಗಿದ್ದೇವೆ.‘ ಎಂದರು.
ಇದಕ್ಕಾಗಿ ದೆಹಲಿ, ಹೈದರಾಬಾದ್, ಚೆನ್ನೈ ನಗರಗಳಲ್ಲಿ ಅಳವಡಿಸಿಕೊಂಡಿರುವ ಮಾದರಿಗಳನ್ನು ಪರಿಶೀಲಿಸಲಾಗಿದೆ ಎಂದು ತಿಳಿಸಿದರು ಎಂದರು.
‘ಬೆಂಗಳೂರಿನಿಂದ 15 ಕಿ.ಮೀ ದೂರದಲ್ಲಿ ಹೊರವಲಯದಲ್ಲಿ ನಾಲ್ಕು ಕಡೆ 100 ಎಕರೆ ಜಮೀನು ಗುರುತಿಸಲಾಗಿದೆ. ಶೀಘ್ರವೇ ಟೆಂಡರ್ ಕರೆದು ಶಾಶ್ವತ ಪರಿಹಾರ ನೀಡಲು ಪ್ರಯತ್ನಿಸಲಾಗುತ್ತಿದೆ’ ಎಂದರು.
‘ಇತ್ತೀಚೆಗೆ ಕಸದ ಟೆಂಡರ್ ವಿಚಾರದಲ್ಲಿ ಪಕ್ಷದ ಅಧ್ಯಕ್ಷರೊಬ್ಬರು ನಾನು ₹ 15 ಸಾವಿರ ಕೋಟಿ ಲೂಟಿ ಮಾಡಿದ್ದಾಗಿ ಹೇಳಿಕೆ ನೀಡಿ ಬ್ಲ್ಯಾಕ್‌ಮೇಲ್ ಮಾಡುವ ಪ್ರಯತ್ನ ಮಾಡಿದ್ದರು. ಈ ಬೆದರಿಕೆಗೆ ಹೆದರಲ್ಲ. ನಮ್ಮ ಸರ್ಕಾರ ಕೂಡಾ ಜಗ್ಗುವುದಿಲ್ಲ’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.