ADVERTISEMENT

Bengaluru Crime | ನಕಲಿ ದಾಖಲೆ: ಬಂಧಿತರ ಸಂಖ್ಯೆ ಐದಕ್ಕೆ ಏರಿಕೆ

ವೈದ್ಯಾಧಿಕಾರಿ, ಮಕ್ಕಳ ತಜ್ಞ, ಶಿಕ್ಷಕ, ಇಬ್ಬರು ಸಹಾಯಕರ ಸೆರೆ * ಮಲ್ಲೇಶ್ವರ ಠಾಣೆ ಪೊಲೀಸರ ಕಾರ್ಯಾಚರಣೆ

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2025, 0:00 IST
Last Updated 26 ಸೆಪ್ಟೆಂಬರ್ 2025, 0:00 IST
ಉಮೇಶ್ ಚೌಧರಿ 
ಉಮೇಶ್ ಚೌಧರಿ    

ಬೆಂಗಳೂರು: ನಕಲಿ ವೈದ್ಯಕೀಯ ದಾಖಲೆಗಳನ್ನು ಸಲ್ಲಿಸಿ, ಅಂಗವಿಕಲ ಕೋಟಾದ ಮೀಸಲಾತಿ ಅಡಿ ಸರ್ಕಾರಿ ವೈದ್ಯಕೀಯ ಸೀಟು ಪಡೆಯಲು ಯತ್ನಿಸಿದ್ದವರಿಗೆ ನೆರವು ನೀಡಿದ್ದ ಪ್ರಕರಣದಲ್ಲಿ ಮತ್ತೆ ಇಬ್ಬರು ಆರೋಪಿಗಳನ್ನು ಮಲ್ಲೇಶ್ವರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.

ವಿಜಯನಗರದ ಹೊಸಪೇಟೆಯ ಸರ್ಕಾರಿ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಹರಿಪ್ರಸಾದ್ ಹಾಗೂ ಮಕ್ಕಳ ತಜ್ಞ ಶ್ರೀನಿವಾಸ್ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.

ಸೆ.17ರಂದು ಬೆಂಗಳೂರಿನ ನಂದಿನಿ ಲೇಔಟ್‌ನ ನಿವಾಸಿ, ಶಿಕ್ಷಕ ಭರಮಪ್ಪ (ಮೂಲತಃ ಚಿತ್ರದುರ್ಗದ ನಿವಾಸಿ), ಕೊಪ್ಪಳದ ಕುಕನೂರು ತಾಲ್ಲೂಕಿನ ಮಂಗಳೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಾಯಕ ಸುಧಾಕರ್, ಪ್ರಥಮ ದರ್ಜೆ ಸಹಾಯಕ ಉಮೇಶ್ ಚೌಧರಿ ಅವರನ್ನು ಬಂಧಿಸಲಾಗಿತ್ತು. 

ADVERTISEMENT

ಎರಡನೇ ಹಂತದ ಕಾರ್ಯಾಚರಣೆಯಲ್ಲಿ ಬಂಧಿಸಿರುವ ವೈದ್ಯಾಧಿಕಾರಿ ಹಾಗೂ ಮಕ್ಕಳ ತಜ್ಞರನ್ನು ಕಸ್ಟಡಿಗೆ ಪಡೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.

ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌.ಪ್ರಸನ್ನ ಅವರ ನಿರ್ದೇಶನದಂತೆ ಮುಖ್ಯ ಆಡಳಿತಾಧಿಕಾರಿ ಇಸ್ಲಾವುದ್ದೀನ್‌ ಗದ್ಯಾಳ್ ಅವರು ಮಲ್ಲೇಶ್ವರ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ದೂರು ಆಧರಿಸಿ ತನಿಖೆ ನಡೆಸಿದ ಪೊಲೀಸರು, ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

‘21 ಅಭ್ಯರ್ಥಿಗಳು ಶ್ರವಣ ದೋಷವಿದೆ ಎಂದು ವೈದ್ಯಕೀಯ ದಾಖಲೆಗಳನ್ನು ಸಲ್ಲಿಸಿದ್ದರು. ಈ ಪೈಕಿ, ಹೆಚ್ಚಿನವರು ಯುಡಿ ಐಡಿ (ಅಂಗವಿಕಲರ ವಿಶಿಷ್ಟ ಗುರುತಿನ ಚೀಟಿ) ಅನ್ನು ವಿಜಯನಗರ ಜಿಲ್ಲೆಯ ಸಾರ್ವಜನಿಕ ಆಸ್ಪತ್ರೆಯಿಂದ ಪಡೆದಿದ್ದರು. ಯುಡಿ ಐಡಿ ಪಡೆಯಲು ಇತ್ತೀಚೆಗೆ ಪಡೆದ ವೈದ್ಯಕೀಯ ಪ್ರಮಾಣಪತ್ರಗಳನ್ನು ಹಾಜರುಪಡಿಸಿದ್ದರು. ಪ್ರಮಾಣ ಪತ್ರಗಳ ಪರಿಶೀಲನೆಯ ವೇಳೆ ಅಭ್ಯರ್ಥಿಗಳು ನಕಲಿ ಪ್ರಮಾಣ ಪತ್ರ ಸಲ್ಲಿಸಿದ್ದಾರೆ ಎಂಬುದು ಗೊತ್ತಾಗಿತ್ತು’ ಎಂದು ಮೂಲಗಳು ಹೇಳಿವೆ.

ಅಂಗವಿಕಲರ ಕೋಟಾದಡಿ ನಕಲಿ ಪ್ರಮಾಣಪತ್ರಗಳನ್ನು ಸೃಷ್ಟಿಸಿ, ವೈದ್ಯಕೀಯ ವಿದ್ಯಾರ್ಥಿಗಳಿಂದ ಲಕ್ಷಾಂತರ ರೂಪಾಯಿ ಹಣ ಪಡೆದು ಆರೋಪಿಗಳು ವಂಚಿಸುತ್ತಿದ್ದರು ಎಂದು ಪೊಲೀಸರು ಹೇಳಿದರು.

ಪ್ರಮುಖ ಆರೋಪಿ ಭರಮಪ್ಪ ಅವರು ನಂದಿನಿ ಲೇಔಟ್​ನ ಶಾಲೆಯೊಂದರಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದರು. ಅಕ್ರಮವಾಗಿ ಹಣ ಸಂಪಾದಿಸಲು ಅಂಗವಿಕಲ ಕೋಟಾದಡಿ ವೈದ್ಯಕೀಯ ಸೀಟು ಕೊಡಿಸುವುದಾಗಿ ಅಭ್ಯರ್ಥಿಗಳನ್ನು ನಂಬಿಸಿ ಅವರಿಂದ ₹ 5 ಲಕ್ಷ ಪಡೆಯುತ್ತಿದ್ದರು. ಬಳಿಕ ತನ್ನ ಸಂಪರ್ಕದಲ್ಲಿದ್ದ ಇತರೆ ಆರೋಪಿಗಳೊಂದಿಗೆ ಸೇರಿಕೊಂಡು ನಕಲಿ ಪ್ರಮಾಣಪತ್ರಗಳನ್ನು ಸೃಷ್ಟಿಸುತ್ತಿದ್ದರು. ಈ ವರ್ಷ 21 ಮಂದಿ ಅಭ್ಯರ್ಥಿಗಳಿಂದ ಲಕ್ಷಾಂತರ ಹಣ ಪಡೆದು ನಕಲಿ ದಾಖಲಾತಿ ಸೃಷ್ಟಿಸಿರುವುದು ತನಿಖೆಯಿಂದ ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದರು. 

‘ಭರಮಪ್ಪ ಅವರು ತಾನು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಕಚೇರಿಯಲ್ಲಿ ಕೆಲಸ ಮಾಡುತ್ತಿರುವುದಾಗಿ ಅಭ್ಯರ್ಥಿಗಳಿಗೆ ಸುಳ್ಳು ಹೇಳಿದ್ದರು. ಅಭ್ಯರ್ಥಿಗಳಿಂದ ಅಗತ್ಯ ದಾಖಲಾತಿಗಳನ್ನು ಪಡೆದು ಇತರೆ ಆರೋಪಿಗಳ ಜತೆಗೆ ಸೇರಿಕೊಂಡು ಯುಡಿ ಐಡಿ ಕಾರ್ಡ್ ತಯಾರಿಸುತ್ತಿದ್ದರು’ ಎಂದು ಪೊಲೀಸರು ಹೇಳಿದರು. 

ಅಭ್ಯರ್ಥಿಗಳಿಗೆ ನೋಟಿಸ್

21 ಅಭ್ಯರ್ಥಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ಕೃತ್ಯದಲ್ಲಿ ಅಭ್ಯರ್ಥಿಗಳೂ ಶಾಮೀಲಾಗಿದ್ದಾರೆಯೇ ಎಂಬುದರ ಕುರಿತು ವಿಚಾರಣೆ ನಡೆಸಲಾಗುವುದು ಎಂದು ಪೊಲೀಸರು ಹೇಳಿದರು. 

ಶ್ರೀನಿವಾಸ್ 
ಭರಮಪ್ಪ 
ಹರಿಪ್ರಸಾದ್‌ 
ಸುಧಾಕರ್‌ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.